ADVERTISEMENT

ಬೀದರ್‌ | ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆ ಉಚಿತ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2024, 14:15 IST
Last Updated 19 ಮಾರ್ಚ್ 2024, 14:15 IST
ಗೋವಿಂದ ರೆಡ್ಡಿ
ಗೋವಿಂದ ರೆಡ್ಡಿ   

ಬೀದರ್‌: ‘ಜಿಲ್ಲೆಯಲ್ಲಿ ಜಾನುವಾರುಗಳಿಗೆ ಕಾಲುಬಾಯಿ ರೋಗ ಬರದಂತೆ ತಡೆಯಲು ಏಪ್ರಿಲ್‌ 1ರಿಂದ 30ರ ವರೆಗೆ ಉಚಿತ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ರೈತರು ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದರು.

ನಗರದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಾನುವಾರುಗಳಿಗೆ ಕಾಲುಬಾಯಿ ರೋಗದ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,‘ಬೇಸಿಗೆ ಇರುವುದರಿಂದ ಬೆಳಿಗ್ಗೆ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು. ರೈತರು ತಪ್ಪದೇ ತಮ್ಮ ದನ, ಎಮ್ಮೆಗಳಿಗೆ ಲಸಿಕೆ ಹಾಕಿಸಬೇಕು. ಲಸಿಕೆ ಉಚಿತವಾಗಿ ನೀಡಲಾಗುತ್ತದೆ’ ಎಂದರು.

‘ಬೇಸಿಗೆ ಇರುವುದರಿಂದ ಜಾನುವಾರುಗಳ ಬಾಯಿ ಮತ್ತು ಕಾಲುಗಳಲ್ಲಿ ಹುಣ್ಣುಗಳಾಗಿ ಅವುಗಳ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಬಹುದು. ಜಾನುವಾರುಗಳ ಬಗ್ಗೆ ಸಾರ್ವಜನಿಕರು ಕಾಳಜಿ ವಹಿಸಬೇಕು’ ಎಂದು ಹೇಳಿದರು.

ADVERTISEMENT

‘ಈ ಲಸಿಕಾ ಕಾರ್ಯಕ್ರಮದಲ್ಲಿ 242 ಕೆಲಸ ನಿರ್ವಹಿಸುವರು. ಬೆಳಿಗ್ಗೆ 6ರಿಂದ 11.30ರ ವರೆಗೆ ಪಶು ವೈದ್ಯಾಧಿಕಾರಿಗಳು, ಸಿಬ್ಬಂದಿ ಲಸಿಕೆ ನೀಡಲು ಮನೆಗಳಿಗೆ ಭೇಟಿ ಕೊಡುವರು. ಸಾರ್ವಜನಿಕರು ಸಹಕಾರ ಕೊಡಬೇಕು’ ಎಂದು ತಿಳಿಸಿದರು.

‘ಬೇಸಿಗೆ ಇರುವುದರಿಂದ ಜಾನುವಾರುಗಳಿಗೆ ಮೇವಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಲಸಿಕಾ ಅಭಿಯಾನವನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ಕೈಗೊಳ್ಳಬೇಕು’ ಎಂದು ಪಶು ಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್‌ ಬದೋಲೆ, ಪಶು ಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ನರಸಪ್ಪ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನಗರಸಭೆ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಹಾಗೂ ಪಶು ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.