
ಬೀದರ್: ನಗರದ ನೆಹರೂ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಕ್ರೀಡಾಕೂಟ ಯುವ ಪ್ರತಿಭೆಗಳಿಗೆ ಸಾಣೆ ಹಿಡಿಯಿತು.
ಭಾರತ ಕ್ರೀಡಾ ಪ್ರಾಧಿಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ‘ಖೇಲೋ ಇಂಡಿಯಾ’, ಬೀದರ್ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಶನ್ ಸಹಯೋಗದಲ್ಲಿ ಏರ್ಪಡಿಸಿದ್ದ ‘ಅಸ್ಮಿತಾ’ ಲೀಗ್‌ನಲ್ಲಿ ಜಿಲ್ಲೆಯ ವಿವಿಧ ಭಾಗಗಳ ಕ್ರೀಡಾಪಟುಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆ ತೋರಿಸಿದರು.
ಹೈಜಂಪ್, ಭಲ್ಲೆ ಎಸೆತ ಸೇರಿದಂತೆ ಇತರೆ ಕ್ರೀಡೆಗಳಲ್ಲಿ ಭಾಗವಹಿಸಿ, ತಮ್ಮ ಸಾಮರ್ಥ್ಯ ಪ್ರದರ್ಶಿಸಿದರು. ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ 1,200ಕ್ಕೂ ಹೆಚ್ಚು ವಿದ್ಯಾರ್ಥಿಗಳು, 400ಕ್ಕೂ ಅಧಿಕ ಕ್ರೀಡಾಪಟುಗಳು ಪಾಲ್ಗೊಂಡಿದ್ದರು. ಕ್ರೀಡಾಪಟುಗಳು ಮತ್ತು ಎನ್‌ಸಿಸಿ ಕೆಡೆಟ್‌ಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಇದಕ್ಕೂ ಮುನ್ನ ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ ಧ್ವಜಾರೋಹಣ ನೆರವೇರಿಸಿದರು.
ಬಳಿಕ ಮಾತನಾಡಿ, ಜಿಲ್ಲೆಯ ಕ್ರೀಡಾಪಟುಗಳಿಗೆ ಇದೊಂದು ಉತ್ತಮ ವೇದಿಕೆ. ಕ್ರೀಡೆಯಲ್ಲಿ ಭಾಗವಹಿಸಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಬೇಕೆಂದು ಹೇಳಿದರು.
ಗ್ಲೋಬಲ್ ಸೈನಿಕ್ ಶಾಲೆಯ ಅಧ್ಯಕ್ಷ ಕರ್ನಲ್ ಶರಣಪ್ಪ ಸಿಕೇನಪುರ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಬಲೂನ್ ಹಾರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶೈನಿ ಪ್ರದೀಪ್ ಗುಂಟಿ, ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಬಾಬು ವಾಲಿ, ಜ್ಞಾನಸುಧಾ ವಿದ್ಯಾಲಯದ ಅಧ್ಯಕ್ಷೆ ಪೂರ್ಣಿಮಾ ಜಿ., ಅಥ್ಲೆಟಿಕ್ಸ್ ಅಸೋಸಿಯೇಷನ್ ಸದಸ್ಯ ಶಿವರಾಜ ಕಣಜಿ, ಎಚ್‌ಕೆಇ ಆಡಳಿತ ಮಂಡಳಿ ಸದಸ್ಯ ಡಾ. ರಜನೀಶ ವಾಲಿ, ನಗರಸಭೆ ಸದಸ್ಯ ಶಶಿ ಹೊಸಳ್ಳಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸುರೇಶ ಚನಶೆಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.