
ಭಾಲ್ಕಿ (ಬೀದರ್ ಜಿಲ್ಲೆ): ವೀರಶೈವ ಲಿಂಗಾಯತ ಸಂಪ್ರದಾಯದ ಪ್ರಕಾರ ಮಾಜಿಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ (102) ಅವರ ಅಂತ್ಯಕ್ರಿಯೆ ಶನಿವಾರ ಪಟ್ಟಣ ಹೊರವಲಯದ ಚಿಕ್ಕಲ್ ಚಾಂದ ಸಮೀಪದ ತೋಟದ ಮನೆಯ ಶಾಂತಿಧಾಮದಲ್ಲಿ ನೆರವೇರಿತು.
ಪತ್ನಿ ದಿವಂಗತ ಲಕ್ಷ್ಮೀಬಾಯಿ ಅವರ ಸಮಾಧಿಯ ಬಳಿಯೇ ಭೀಮಣ್ಣ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.
ವಿಭೂತಿ, ಪತ್ರಿ, ಹೂ, ರುದ್ರಾಕ್ಷಿಯೊಂದಿಗೆ ವೀರಶೈವ ಲಿಂಗಾಯತ ಸಂಪ್ರದಾಯದ ಪ್ರಕಾರ ಸಮಾಧಿ ಮಾಡಲಾಯಿತು. ಇದಕ್ಕೂ ಮುನ್ನ ವಚನ ಪಠಣ ಮಾಡಿ, ಮಂತ್ರಘೋಷಗಳೊಂದಿಗೆ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಜರುಗಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಧಿ ಸ್ಥಳದಲ್ಲಿ ಐದು ವಿಭೂತಿ ಇರಿಸಿ ಅಂತ್ಯಕ್ರಿಯೆಯ ವಿಧಿ ವಿಧಾನಗಳಿಗೆ ಚಾಲನೆ ಕೊಟ್ಟರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಸಚಿವರಾದ ಈಶ್ವರ ಬಿ. ಖಂಡ್ರೆ, ಕೆ.ಜೆ. ಜಾರ್ಜ್, ಎಚ್.ಕೆ. ಪಾಟೀಲ್, ಲಕ್ಷ್ಮೀ ಹೆಬ್ಬಾಳಕರ್, ಶರಣಪ್ರಕಾಶ ಪಾಟೀಲ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿವಿಧ ಮಠಾಧೀಶರು, ರಾಕೀಯ ಪಜ್ಷಗಳು, ಸಂಘ ಸಂಸ್ಥೆಗಳ ಮುಖಂಡರು ಪಾಲ್ಗೊಂಡಿದ್ದರು.
ಇದಕ್ಕೂ ಮುನ್ನ ಭಾಲ್ಕಿ ಪಟ್ಟಣದಲ್ಲಿ ಅಲಂಕರಿಸಿದ ವಾಹನದಲ್ಲಿ ಪಾರ್ಥೀವ ಶರೀರದ ಮೆರವಣಿಗೆ ಮಾಡಲಾಯಿತು. ಮಾರ್ಗದುದ್ದಕ್ಕೂ ಜನ ಹೂಮಳೆಗರೆದು ಗೌರವ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.