ADVERTISEMENT

ನಾಟಕದ ಮೂಲಕ ಪ್ರಧಾನಿ ನಿಂದನೆಗೆ ಖಂಡನೆ: ಬೀದರ್‌ನಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 30 ಜನವರಿ 2020, 7:38 IST
Last Updated 30 ಜನವರಿ 2020, 7:38 IST
ಶಾಹೀನ್ ಶಿಕ್ಷಣ ಸಂಸ್ಥೆಯ ಶಾಲಾ ವಾರ್ಷಿಕೋತ್ಸವದಲ್ಲಿ ಪ್ರಧಾನಿಯನ್ನು ನಿಂದಿಸಿರುವುದನ್ನು ಖಂಡಿಸಿ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬೀದರ್‌ನಲ್ಲಿ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಖದೀರ್ ಅವರ ಭಾವಚಿತ್ರವನ್ನು ಸುಟ್ಟು ಹಾಕಿದರು
ಶಾಹೀನ್ ಶಿಕ್ಷಣ ಸಂಸ್ಥೆಯ ಶಾಲಾ ವಾರ್ಷಿಕೋತ್ಸವದಲ್ಲಿ ಪ್ರಧಾನಿಯನ್ನು ನಿಂದಿಸಿರುವುದನ್ನು ಖಂಡಿಸಿ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬೀದರ್‌ನಲ್ಲಿ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಖದೀರ್ ಅವರ ಭಾವಚಿತ್ರವನ್ನು ಸುಟ್ಟು ಹಾಕಿದರು   

ಬೀದರ್: ಶಾಹೀನ್ ಶಿಕ್ಷಣ ಸಂಸ್ಥೆಯ ಶಾಲಾ ವಾರ್ಷಿಕೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಹಾಗೂ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದರು. ಜಿಲ್ಲಾಧಿಕಾರಿ ಕಚೇರಿ ಎದುರು ಶಾಹೀನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಖದೀರ್ ಅವರ ಭಾವಚಿತ್ರವನ್ನು ಸುಟ್ಟು ಹಾಕಿದರು. ಬಳಿಕ ರಾಷ್ಟ್ರಪತಿಗೆ ಬರೆದ ಮನವಿಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಕೆಲ ದಿನಗಳ ಹಿಂದೆ ಶಾಲೆಯಲ್ಲಿ ಪ್ರದರ್ಶಿಸಿದ ನಾಟಕದಲ್ಲಿ ಪ್ರಧಾನಿಯನ್ನು ನಿಂದಿಸಿದ್ದು, ಮಕ್ಕಳಿಂದ ದೇಶದ ಕಾನೂನನ್ನು ಅವಮಾನಿಸುವ ಕೆಲಸ ನಡೆದಿದೆ ಎಂದು ಆರೋಪಿಸಿದರು.

ADVERTISEMENT

ವಾರ್ಷಿಕೋತ್ಸವದಲ್ಲಿ ಸಿಎಎ, ಎನ್‍ಆರ್‌ಸಿ ಬಗ್ಗೆ ಮಕ್ಕಳಿಂದ ಅವಹೇಳನಕಾರಿ ಮಾತುಗಳನ್ನು ಆಡಿಸಲಾಗಿದೆ. ಪ್ರಧಾನಿಗೆ ಅಪಮಾನವಾಗುವ ರೀತಿಯಲ್ಲಿ ನಡೆದುಕೊಳ್ಳಲಾಗಿದೆ. ನಾಟಕ ಏರ್ಪಡಿಸಿದ ಶಿಕ್ಷಕರು, ಶಾಲಾ ಆಡಳಿತ ಮಂಡಳಿ ಹಾಗೂ ನಾಟಕ ನೋಡಿ ಚಪ್ಪಾಳೆ ತಟ್ಟಿದವರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಖದೀರ್ ಅವರಿಗೆ ನೀಡಿರುವ ಡಾಕ್ಟರೇಟ್ ಪದವಿಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡಿರುವ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ಇದರಡಿ ನಡೆಯುತ್ತಿರುವ ಸಂಸ್ಥೆಗಳಿಗೆ ನೀಡಿರುವ ಪರವಾನಗಿಯನ್ನು ರದ್ದುಪಡಿಸಬೇಕು. ರಾಷ್ಟ್ರಮಟ್ಟದ ತನಿಖೆ ನಡೆಸಿ ಶಾಹೀನ್ ಶಿಕ್ಷಣ ಸಂಸ್ಥೆಯ ಆಸ್ತಿಯನ್ನು ಮುಟ್ಟುಗೋಲು ಹಾಕಬೇಕು ಎಂದು ಆಗ್ರಹಿಸಿದರು.

ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ರಾಮಕೃಷ್ಣನ್, ಹಿಂದೂ ಜಾಗರಣ ವೇದಿಕೆಯ ವಿಭಾಗೀಯ ಅಧ್ಯಕ್ಷ ಶಿವಶರಣಪ್ಪ ಪಾಟೀಲ, ಬಜರಂಗ ದಳ ಜಿಲ್ಲಾ ಸಂಚಾಲಕ ಸುನೀಲ ದಳವೆ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.