ADVERTISEMENT

ಬೀದರ್‌ ಸ್ಮಾರಕ ವೀಕ್ಷಿಸಿ ಗುರುಗ್ರಂಥ ಸಾಹೇಬ ದರ್ಶನ ಪಡೆದ ರಾಜ್ಯಪಾಲ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2022, 15:14 IST
Last Updated 25 ಡಿಸೆಂಬರ್ 2022, 15:14 IST
ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಬೀದರ್‌ನ ಐತಿಹಾಸಿಕ ಬಹುಮನಿ ಕೋಟೆಗೆ ಭೇಟಿ ನೀಡಿ ಸ್ಮಾರಕಗಳನ್ನು ವೀಕ್ಷಿಸಿದರು. ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಎಂ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಿ.ಕಿಶೋರ್ ಬಾಬು ಇದ್ದಾರೆ
ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಬೀದರ್‌ನ ಐತಿಹಾಸಿಕ ಬಹುಮನಿ ಕೋಟೆಗೆ ಭೇಟಿ ನೀಡಿ ಸ್ಮಾರಕಗಳನ್ನು ವೀಕ್ಷಿಸಿದರು. ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಎಂ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಿ.ಕಿಶೋರ್ ಬಾಬು ಇದ್ದಾರೆ   

ಬೀದರ್‌: ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜಿನಲ್ಲಿ ಡಿಸೆಂಬರ್ 26 ರಂದು ನಡೆಯಲಿರುವ ‘ಸರ್ದಾರ್‌ ಜೋಗಾಸಿಂಗ್‌ಜಿ ಕಲ್ಯಾಣ ಕರ್ನಾಟಕ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಭಾನುವಾರ ನಗರಕ್ಕೆ ಆಗಮಿಸಿದರು.

ವಾಯುಪಡೆ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಅವರನ್ನು ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಿ.ಕಿಶೋರ್ ಬಾಬು ಸ್ವಾಗತಿಸಿ ಬರಮಾಡಿಕೊಂಡರು.

ವಿಮಾನ ನಿಲ್ದಾಣದಿಂದ ಮಂಗಲಪೇಟೆಯ ಹಬ್ಸಿಕೋಟೆ ಅತಿಥಿಗೃಹಕ್ಕೆ ತೆರಳಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ನಂತರ ಬೀದರ್‌ನ ಐತಿಹಾಸಿಕ ಬಹಮನಿ ಕೋಟೆಗೆ ಭೇಟಿ ನೀಡಿ ಅಲ್ಲಿನ ಸ್ಮಾರಕಗಳನ್ನು ವೀಕ್ಷಿಸಿದರು. ಎಎಸ್‌ಐ ಅಧಿಕಾರಿಗಳು ಸ್ಮಾರಕಗಳ ಸಂಕ್ಷಿಪ್ತ ಮಾಹಿತಿ ಒದಗಿಸಿದರು.

ADVERTISEMENT

ನಂತರ ನೇರವಾಗಿ ಗುರುದ್ವಾರಕ್ಕೆ ಬಂದು ಗುರುಗ್ರಂಥ ಸಾಹೇಬ ದರ್ಶನ ಪಡೆದರು. ಗುರುನಾನಕ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಎಸ್. ಬಲಬೀರಸಿಂಗ್ ಅವರು ರಾಜ್ಯಪಾಲರಿಗೆ ಶಾಲು ಹೊದಿಸಿ ಗೌರವಿಸಿದರು. ಗುರುದ್ವಾರ ಪ್ರಬಂಧಕ ಕಮಿಟಿ ಸದಸ್ಯರು, ಭಾರತೀಯ ಪ್ಯಾರಾಒಲಿಂಪಿಕ್ ಸಮಿತಿ ಅಧ್ಯಕ್ಷೆ ದೀಪಾ ಮಲಿಕ್ ಇದ್ದರು.

ಇಂದು ಪ್ರಶಸ್ತಿ ಪ್ರದಾನ:

ಗುರುನಾನಕ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ದಿ. ಸರ್ದಾರ್‌ ಜೋಗಾಸಿಂಗ್‌ಜಿ ಅವರ 90ನೇ ಜನ್ಮ ದಿನಾಚರಣೆ ಅಂಗವಾಗಿ ಡಿ. 26ರಂದು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 17 ಜನರಿಗೆ ‘ಸರ್ದಾರ್‌ ಜೋಗಾಸಿಂಗ್‌ಜಿ ಕಲ್ಯಾಣ ಕರ್ನಾಟಕ ಪ್ರಶಸ್ತಿ’ ಪ್ರದಾನ ಡಿ. 26 ರಂದು ಮಧ್ಯಾಹ್ನ 12 ಕ್ಕೆ ನಗರದ ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿದೆ.

ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡುವರು. ಗುರುನಾನಕ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಎಸ್. ಬಲಬೀರಸಿಂಗ್, ಉಪಾಧ್ಯಕ್ಷೆ ರೇಷ್ಮಾ ಕೌರ್ ಉಪಸ್ಥಿತರಿರುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.