ADVERTISEMENT

ಕೆರೆ ಕಟ್ಟೆಗೆ ನೀರು: ಮುನ್ನೆಚ್ಚರಿಕೆಗೆ ಸಚಿವ ಚವಾಣ್ ಸೂಚನೆ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2020, 14:57 IST
Last Updated 18 ಸೆಪ್ಟೆಂಬರ್ 2020, 14:57 IST
ಪ್ರಭು ಚವಾಣ್
ಪ್ರಭು ಚವಾಣ್   

ಬೀದರ್: ಮಳೆಯಿಂದಾಗಿ ಜಿಲ್ಲೆಯ ಕೆರೆ ಕಟ್ಟೆಗಳಿಗೆ ನೀರು ಹರಿದು ಬರುತ್ತಿರುವ ಕಾರಣ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರು ಸಣ್ಣ ನೀರಾವರಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್‌ಗೆ ಸೂಚನೆ ನೀಡಿದ್ದಾರೆ.

ಅಧಿಕಾರಿಗಳ ತಂಡ ರಚಿಸಿ, ಜಿಲ್ಲೆಯಲ್ಲಿರುವ ಎಲ್ಲ ಕೆರೆಗಳಿಗೆ ಭೇಟಿ ನೀಡಬೇಕು. ಕೆರೆಗಳ ನೀರು ಸಂಗ್ರಹಣೆ ಸಾಮರ್ಥ್ಯ, ಹೆಚ್ಚುವರಿಯಾಗಿ ಬಂದ ನೀರು, ಕೆರೆ ಬಿರುಕು ಬಿಟ್ಟಿದೆಯೇ ಎನ್ನುವ ಮಾಹಿತಿ ಪಡೆದು, ಕೆರೆ ಪಕ್ಕದ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಗೋದಾವರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗಿರುವುದರಿಂದ ಭಾಲ್ಕಿ ತಾಲ್ಲೂಕಿನ ಬ್ಯಾಲಹಳ್ಳಿ ಸಮೀಪದ ಕಾರಂಜಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರಲಿದೆ. ನದಿ ಪ್ರದೇಶದ ಸುತ್ತಲಿನ ಗ್ರಾಮಗಳಲ್ಲಿ ಹಾನಿ ಸಂಭವಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ADVERTISEMENT

ಹುಲಸೂರು ಮಾರ್ಗದಲ್ಲಿರುವ ಬ್ರಿಡ್ಜ್ ಕಂ ಬ್ಯಾರೇಜ್, ಬೆಳಕುಣಿ ಸೇತುವೆ, ದಾಡಗಿ ಸೇತುವೆ, ಬಗದಲ್ ಬಳಿಯ ಸೇತುವೆ ಸೇರಿದಂತೆ ಹಲವು ಕಡೆಗಳಲ್ಲಿ ಸೇತುವೆಗಳು ಮುಳುಗಿ ಸಂಚಾರಕ್ಕೆ ಸಮಸ್ಯೆಯಾಗಿದೆ. ಹುಲಸೂರು ಬಳಿಯ ಕೆರೆ ಒಡೆದು ಸಮೀಪದ ಹೊಲ ಮತ್ತು ಮನೆಗಳಿಗೆ ನೀರು ನುಗ್ಗಿರುವುದು ವರದಿಯಾಗಿದೆ ಎಂದು ಹೇಳಿದ್ದಾರೆ.

ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳ ತಂಡ ರಚಿಸಿ, ಖುದ್ದು ಪರಿಶೀಲನೆಗೆ ಮುಂದಾಗಬೇಕು. ತಮ್ಮ ವ್ಯಾಪ್ತಿಯಲ್ಲಿ ಬರುವ ಕೆರೆ, ಬ್ರಿಜ್ ಕಂ ಬ್ಯಾರೇಜ್, ಬಾಂದಾರ ಮೊದಲಾದ ಕಡೆ ಸಂಚರಿಸಿ ಹಾನಿಯ ಮಾಹಿತಿ ಕಲೆ ಹಾಕಬೇಕು. ಕೆರೆ ಒಡೆದು ಹೊಲಗಳಿಗೆ ನೀರು ನುಗ್ಗುವ ಸಂಭವ ಇದ್ದಲ್ಲಿ ಮೊದಲೇ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಅಧಿಕಾರಿಗಳು ಕೆರೆ ಪರಿಶೀಲನೆಗೆ ಹೋದಾಗ ತಮ್ಮ ವ್ಯಾಟ್ಸ್‌ಆ್ಯಪ್‍ಗೆ ಫೋಟೊ ಕಳುಹಿಸಬೇಕು. ಯಾವುದೇ ಕಾರಣಕ್ಕೂ ಕಚೇರಿಯಲ್ಲಿ ಕುಳಿತು ವರದಿ ತಯಾರಿಸಬಾರದು. ಅಧಿಕಾರಿಗಳ ನಿಷ್ಕಾಳಜಿಯಿಂದ ಎಲ್ಲಿಯಾದರೂ ಅನಾಹುತ ಸಂಭವಿಸಿದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.