ADVERTISEMENT

ಅಂಗನವಾಡಿಗೆ ಕಳಪೆ ಆಹಾರ ಪೂರೈಸಿದರೆ ಕ್ರಮ

ಅಧಿಕಾರಿಗಳಿಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಸೂಚನೆ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2022, 14:45 IST
Last Updated 25 ನವೆಂಬರ್ 2022, 14:45 IST
ಬೀದರ್‌ನಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಮಾತನಾಡಿದರು
ಬೀದರ್‌ನಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಮಾತನಾಡಿದರು   

ಬೀದರ್: ‘ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಸಿರುವುದು ಕಂಡುಬಂದಲ್ಲಿ ಟೆಂಡರ್‌ದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಸೂಚಿಸಿದರು.

ಇಲ್ಲಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಆಗಾಗ ಅಂಗನವಾಡಿ ಕೇಂದ್ರಗಳಿಗೆ ಭೇಟಿ ಕೊಟ್ಟು ಆಹಾರದ ಗುಣಮಟ್ಟ ಪರೀಕ್ಷಿಸಬೇಕು ಎಂದು ನಿರ್ದೇಶನ ನೀಡಿದರು.

ADVERTISEMENT

ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ಕೊಡುತ್ತಿಲ್ಲ ಎನ್ನುವ ದೂರುಗಳು ಇವೆ. ಕಾರಣ, ಗುಣಮಟ್ಟದ ಆಹಾರ ಒದಗಿಸಬೇಕು ಎಂದು ತಾಕೀತು ಮಾಡಿದರು.

ಕೃಷಿ ಇಲಾಖೆಗೆ ಸಂಬಂಧಿಸಿದ ಕೇಂದ್ರದ ಯೋಜನೆಗಳ ಬಗ್ಗೆ ಹೆಚ್ಚಿನ ಪ್ರಚಾರ ಮಾಡಬೇಕು. ರೈತರ ಸಮಸ್ಯೆಗೆ ತಕ್ಷಣ ಸ್ಪಂದಿಸಬೇಕು. ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಉಂಟಾದರೆ ಗಮನಕ್ಕೆ ತರಬೇಕು ಎಂದು ಜಂಟಿ ಕೃಷಿ ನಿರ್ದೇಶಕರಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಆಯುಷ್ ಇಲಾಖೆಯ 23 ಆಸ್ಪತ್ರೆಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಆಯುಷ್ ಇಲಾಖೆ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.

ಆಯುಷ್ ಆಸ್ಪತ್ರೆಗೆ ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವಂತಾಗಲು ಆಸ್ಪತ್ರೆ ಸೌಲಭ್ಯಗಳ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸಬೇಕು ಎಂದು ಖೂಬಾ ತಿಳಿಸಿದರು.

ಬೀದರ್-ಔರಾದ್ ಮಧ್ಯದ 45 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಪೈಕಿ 28 ಕಿ.ಮೀ. ಕಾಮಗಾರಿ ಪೂರ್ಣಗೊಂಡಿದೆ. ಮುಂದಿನ ವರ್ಷದ ಮೇ ಅಥವಾ ಜೂನ್ ಒಳಗೆ ಕಾಮಗಾರಿ ಮುಕ್ತಾಯಗೊಳ್ಳಲಿದೆ. ಕೆಲ ಕಡೆ ರಸ್ತೆ ಅಗಲೀಕರಣಕ್ಕೆ ಭೂಮಿ ಅಡೆ, ತಡೆ ಇದೆ ಎಂದು ಸಂಬಂಧಪಟ್ಟ ಅಧಿಕಾರಿ ಮಾಹಿತಿ ನೀಡಿದರು.

ಪೊಲೀಸರ ಸಹಕಾರೊಂದಿಗೆ ಕೆಲಸ ಮುಂದುವರಿಸಬೇಕು. ಆದಷ್ಟು ಬೇಗ ಕಾಮಗಾರಿ ಕೊನೆಗೊಳಿಸಬೇಕು ಎಂದು ಸಚಿವರು ತಿಳಿಸಿದರು.

ಜಲಜೀವನ್ ಮಿಷನ್, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ, ಲೋಕೋಪಯೋಗಿ, ಆರೋಗ್ಯ ಸೇರಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿದ ಅವರು,‘ಕಾಲಮಿತಿಯೊಳಗೆ ಯೋಜನೆಗಳನ್ನು ಪೂರ್ಣಗೊಳಿಸಬೇಕು. ಯಾವ ಕಾರಣಕ್ಕೂ ನೆಪ ಹೇಳಬಾರದು’ ಎಂದರು.

ಶಾಸಕ ಶರಣು ಸಲಗರ, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ರಾಜ್ಯ ಹಜ್ ಸಮಿತಿ ಅಧ್ಯಕ್ಷ ರೌಫೊದ್ದಿನ್ ಕಚೇರಿವಾಲೆ, ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ.ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕ ಕಿಶೋರ ಬಾಬು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.