ADVERTISEMENT

ಅರಿಶಿಣಕ್ಕೆ ಬೆಂಬಲ ಬೆಲೆ: ಶೀಘ್ರವೇ ಸಭೆ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2011, 7:50 IST
Last Updated 1 ನವೆಂಬರ್ 2011, 7:50 IST
ಅರಿಶಿಣಕ್ಕೆ ಬೆಂಬಲ ಬೆಲೆ: ಶೀಘ್ರವೇ ಸಭೆ
ಅರಿಶಿಣಕ್ಕೆ ಬೆಂಬಲ ಬೆಲೆ: ಶೀಘ್ರವೇ ಸಭೆ   

ಚಾಮರಾಜನಗರ: `ಅರಿಶಿಣಕ್ಕೆ ಬೆಂಬಲ ಬೆಲೆ ನಿಗದಿ ಮಾಡುವ ಸಂಬಂಧ ಶೀಘ್ರವೇ ಮುಖ್ಯಮಂತ್ರಿಗಳು ಹಾಗೂ ತೋಟಗಾರಿಕೆ ಸಚಿವರ ಸಮ್ಮುಖದಲ್ಲಿ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು~ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು ಭರವಸೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ಸೋಮವಾರ ಅರಿಶಿಣಕ್ಕೆ ಬೆಂಬಲ ಬೆಲೆ ನಿಗದಿ ಮಾಡುವ ಸಂಬಂಧ ನಡೆದ ರೈತರ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಅರಿಶಿಣ ಬೆಳೆಗಾರರು ಅನುಭವಿಸುತ್ತಿರುವ ತೊಂದರೆ ಬಗ್ಗೆ ಅರಿವಿದೆ. ಬೆಳೆಗಾರರ ಸಂಕಷ್ಟ ನಿವಾರಿಸಲು  ಕ್ರಮ ಕೈಗೊಳ್ಳಲಾಗುವುದು. ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರ ನೆರವಿಗೆ ಧಾವಿಸಲು ಸರ್ಕಾರ ಬದ್ಧವಾಗಿದೆ ಎಂದರು.

ಸಭೆಯಲ್ಲಿ ಹಾಜರಿದ್ದ ರೈತ ಮುಖಂಡರು ಶೀಘ್ರವೇ ಅರಿಶಿಣಕ್ಕೆ ಬೆಂಬಲ ಬೆಲೆ ನಿಗದಿ ಮಾಡಬೇಕು. ಇತರೇ ಬೆಳೆಗಳಿಗೂ ಉತ್ತಮ ಬೆಲೆ ಸಿಗುವಂತಾಗಬೇಕು. ಜಿಲ್ಲೆಯ ರೈತರ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಶಾಸಕರಾದ ಜಿ.ಎನ್. ನಂಜುಂಡಸ್ವಾಮಿ, ವಿಧಾನ ಪರಿಷತ್ ಸದಸ್ಯ ಪ್ರೊ.ಕೆ.ಆರ್. ಮಲ್ಲಿಕಾರ್ಜುನಪ್ಪ, ಜಿಲ್ಲಾಧಿಕಾರಿ ಕೆ. ಅಮರನಾರಾಯಣ, ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಂ. ಮಹೇಶ್‌ಪ್ರಭು, ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಸಿ. ಮಹೇಶ್‌ಕುಮಾರ್ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.