ADVERTISEMENT

ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ

ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಸ್. ಮಹದೇವಪ್ರಸಾದ್ ಭರವಸೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2013, 6:40 IST
Last Updated 20 ಜೂನ್ 2013, 6:40 IST

ಗುಂಡ್ಲುಪೇಟೆ: ತಾಲ್ಲೂಕಿನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಕ್ರಮಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಸ್.ಮಹದೇವಪ್ರಸಾದ್ ಭರವಸೆ ನೀಡಿದರು.

ತಾಲ್ಲೂಕಿನ ಹುಂಡಿಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಬುಧವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

2007ರಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿದ್ದಾಗ ತಾಲ್ಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೇಲ್ದರ್ಜೆಗೆ ತೀರ್ಮಾನ ಕೈಗೊಳ್ಳಲಾಗಿತ್ತು. ಆಗ ಯೋಜನೆ ಯಶ ಕಾಣಲಿಲ್ಲ. ಆದರೆ, ಈಗ ನಾನು ಸಹಕಾರ ಸಚಿವನಾಗಿ ಆ ಕನಸು ನನಸು ಮಾಡುತ್ತೇನೆ ಎಂದು ಹೇಳಿದರು.

ತಾಲ್ಲೂಕಿನಲ್ಲಿ 2 ಲಕ್ಷ ಜನಸಂಖ್ಯೆಗೆ ಒಟ್ಟು 20 ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ಉಳಿದ ತಾಲ್ಲೂಕುಗಳಲ್ಲಿ 45 ಸಾವಿರ ಜನಸಂಖ್ಯೆಗೆ ಒಂದರಂತೆ ಆರೋಗ್ಯ ಕೇಂದ್ರ ನಿರ್ಮಿಸಲಾಗಿದೆ. ಇಲ್ಲಿನ ಎಲ್ಲ ಆರೋಗ್ಯ ಕೇಂದ್ರಗಳಿಗೆ ತಲಾ ಒಂದು ಕೋಟಿ ಹಣ ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಡೆಂಗೆ ವ್ಯಾಪಕವಾಗಿ ಹರಡುತ್ತಿದೆ. ಗ್ರಾಮ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ವತಿಯಿಂದ ಸಾರ್ವಜನಿಕ ಪ್ರದೇಶಗಳು ಮತ್ತು ಚರಂಡಿ ಇರುವ ಪ್ರದೇಶಗಳಲ್ಲಿ ರೋಗ ಹರಡದಂತೆ ಔಷಧ ಸಿಂಪಡಿಸಬೇಕು. ಕುಡಿಯುವ ನೀರು ಸರ್ಮಪಕವಾಗಿ ಪೂರೈಕೆಗೆ ಸಾಧ್ಯವಾಗುತ್ತಿಲ್ಲ. ತಾಲ್ಲೂಕಿನಲ್ಲಿ ಹೆಚ್ಚಿನ ಕೊಳವೆಬಾವಿಗಳು ಬತ್ತಿವೆ. ಈ ಕಾರಣಕ್ಕೆ ನದಿಮೂಲಗಳಿಂದ ನೀರು ಪೂರೈಸಲು ಕ್ರಮ ವಹಿಸಲಾಗುತ್ತದೆ ಎಂದು ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಾದ ರಮೇಶ್ ಬಾಬು, ತಾಲ್ಲೂಕು ಪಂಚಾಯಿತಿ ಸದಸ್ಯ ಎಸ್.ಎಂ. ವೀರಪ್ಪ, ಗ್ರಾಮದ ಮುಖಂಡ ಪ್ರಭುಸ್ವಾಮಿ ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಅಂಬಿಕಾ ರಾಜಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಗಾಯಿತ್ರಿ ನಾಗೇಶ್, ಮಾಜಿ ಅಧ್ಯಕ್ಷೆ ಕೋಮಲ, ಸದಸ್ಯರಾದ ಎಸ್.ಎಂ. ವೀರಪ್ಪ, ಗ್ರಾಮದ ಮುಖಂಡ ಪ್ರಭುಸ್ವಾಮಿ, ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಪಿ.ಬಿ.ರಾಜಶೇಖರ್, ಅಂಕಹಳ್ಳಿಕುಮಾರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.