ADVERTISEMENT

ಆಸ್ಪತ್ರೆ ಕಟ್ಟಡದ ಉದ್ಘಾಟನೆಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಜನವರಿ 2012, 6:55 IST
Last Updated 5 ಜನವರಿ 2012, 6:55 IST

ಚಾಮರಾಜನಗರ: ಮೇಲ್ದರ್ಜೆಗೇರಿರುವ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ನೂತನ ಕಟ್ಟಡದ ಉದ್ಘಾಟನೆಗೆ ಕ್ರಮಕೈಗೊಳ್ಳ ಬೇಕು ಎಂದು ಆಗ್ರಹಿಸಿ ನಗರದ ಆಸ್ಪತ್ರೆ ಮುಂಭಾಗ ಬುಧವಾರ ಎಚ್.ಡಿ. ಕುಮಾರಸ್ವಾಮಿ ಅಭಿಮಾನಿಗಳ ಸಂಘದಿಂದ ಪ್ರತಿಭಟನೆ ನಡೆಯಿತು.

ಆಸ್ಪತ್ರೆ ಆವರಣದಲ್ಲಿ ಜಾನುವಾರು ಕೂಡಿಹಾಕಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿದರು.

ಜಿಲ್ಲಾ ಕೇಂದ್ರದಲ್ಲಿ 150 ಹಾಸಿಗೆ ಸಾಮರ್ಥ್ಯದ ಸಾರ್ವಜನಿಕ ಆಸ್ಪತ್ರೆ ಇದೆ. ಇದರ ಪಕ್ಕದಲ್ಲಿಯೇ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗೆ ನಿರ್ಮಿಸಲಾಗಿದೆ. ಒಟ್ಟು 250 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯ ಸೇವೆ ನಾಗರಿಕರಿಗೆ ಲಭ್ಯವಾಗುತ್ತಿಲ್ಲ. ಇದರಿಂದ ಗ್ರಾಮೀಣರು ತೊಂದರೆ ಅನುಭವಿಸುವಂತಾಗಿದೆ ಎಂದು ದೂರಿದರು.

ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿದ್ದರೂ ಅಗತ್ಯಕ್ಕೆ ಅನುಗುಣವಾಗಿ ಹುದ್ದೆ ಮಂಜೂರು ಮಾಡಿಲ್ಲ. ವೈದ್ಯರು, ಶುಶ್ರೂಷಕರು, ಫಾರ್ಮಸಿಸ್ಟ್ ಹುದ್ದೆಗಳು ಖಾಲಿ ಇವೆ. ಹಾಲಿ ಇರುವ ವೈದ್ಯಕೀಯ ಸಿಬ್ಬಂದಿಯನ್ನೇ ಬಳಸಿಕೊಂಡು ಉತ್ತಮ ಸೇವೆ ನೀಡುವುದು ಕಷ್ಟಕರ. ಈ ಹಿನ್ನೆಲೆಯಲ್ಲಿ ಕೂಡಲೇ ಅಗತ್ಯ ಸಿಬ್ಬಂದಿ ನೇಮಕಕ್ಕೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಗಡಿ ಜಿಲ್ಲೆಯ ಅಭಿವೃದ್ಧಿಗೆ ಉಸ್ತುವಾರಿ ಸಚಿವರು ಮತ್ತು ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯವಹಿಸಿದೆ. ಮೌಢ್ಯಕ್ಕೆ ಜೋತುಬಿದ್ದ ಬಿ.ಎಸ್. ಯಡಿಯೂರಪ್ಪ ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡಲಿಲ್ಲ. ಆದರೂ, ಅಧಿಕಾರ ಕಳೆದುಕೊಂಡರು. ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಜಿಲ್ಲಾ ಕೇಂದ್ರ ಭೇಟಿ ನೀಡಬೇಕು ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾ ಅಧ್ಯಕ್ಷ ಕೆಲ್ಲಂಬಳ್ಳಿ ಸೋಮನಾಯಕ, ಕೋಡಿಮೋಳೆ ಗೋವಿಂದಶೆಟ್ಟಿ, ಗಾಳೀಪುರ ಅಸ್ಮತ್, ದೊಡ್ಡರಾಯಪೇಟೆ ಉಷಾ, ಕೊಡಸೋಗೆ ಸಿದ್ದರಾಮಪ್ಪ ಸೇರಿದಂತೆ ಒಂಟೆತ್ತಿನಗಾಡಿ ಸಂಘದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.