ADVERTISEMENT

ಎಸ್‌ಟಿಗೆ ಸೇರಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2017, 5:50 IST
Last Updated 25 ಅಕ್ಟೋಬರ್ 2017, 5:50 IST

ಚಾಮರಾಜನಗರ: ರಾಜ್ಯದ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಹಾಲುಮತ ಮಹಾಸಭಾ ಒತ್ತಾಯಿಸಿದೆ. ಬುಡಕಟ್ಟು ಮೂಲದ ಕುರುಬರನ್ನು ಪಂಗಡಗಳ ಆಧಾರದ ಮೇಲೆ ವಿಭಾಗಿಸಿ ಹಂಚಲಾದ ಮೀಸಲಾತಿಯು ಎಲ್ಲ ಪಂಗಡಗಳ ಕುರುಬರಿಗೂ ನ್ಯಾಯ ಸಮ್ಮತವಾಗಿ ದಕ್ಕಬೇಕು. ಈ ಬಗ್ಗೆ ಹಲವು ರೀತಿಯ ಹೋರಾಟಗಳಿಗೆ ವೇದಿಕೆ ಸಿದ್ಧಪಡಿಸಲಾಗುತ್ತಿದೆ.

ರಾಜಸ್ತಾನದಲ್ಲಿ ಗುಜ್ಜಾರ, ಗುಜರಾತ್‌ನಲ್ಲಿ ಪಟೇಲ್‌ ಮತ್ತು ಹರಿಯಾಣದಲ್ಲಿ ಜಾಟ್‌ ಸಮುದಾಯದವರು ಮೀಸಲು ಹಕ್ಕಿಗಾಗಿ ಹೋರಾಟ ನಡೆಸಿದ ಮಾದರಿಯಲ್ಲಿಯೇ ರಾಜ್ಯದಲ್ಲಿ ಕುರುಬರು ಮೀಸಲಾತಿಗಾಗಿ ತೀವ್ರ ಹೋರಾಟಕ್ಕೆ ಸನ್ನದ್ಧರಾಗಿದ್ದಾರೆ ಎಂದು ಮಹಾಸಭಾ ತಿಳಿಸಿದೆ.

ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂಬ ಆಗ್ರಹ ಹಲವು ದಶಕದಿಂದಲೂ ಕೇಳಿ ಬರುತ್ತಿದೆ. ಈ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಹಲವು ಬಾರಿ ಮನವಿ ಮಾಡಿಕೊಂಡಿದ್ದರೂ, ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ ಎಂದು ಆರೋಪಿಸಿದೆ.

ADVERTISEMENT

ರಾಜ್ಯ ಸರ್ಕಾರಕ್ಕೆ ಅನೇಕ ಮನವಿ ಸಲ್ಲಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಮಾವೇಶ ನಡೆಸಲಾಗಿದೆ. ಆದರೂ ಕುರುಬರನ್ನು ಎಸ್‌ಟಿಗೆ ಸೇರಿಸುವ ಬೇಡಿಕೆಗೆ ಯಾವುದೇ ಸ್ಪಂದನೆ ದೊರೆಯುತ್ತಿಲ್ಲ. ಹಕ್ಕುಗಳನ್ನು ಹೋರಾಟ ತೀವ್ರಗೊಳಿಸಲಾಗುವುದು ಎಂದು ತಿಳಿಸಿದೆ.

ಅದಕ್ಕಾಗಿ, ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಮೂಲಕ ಏಕಕಾಲಕ್ಕೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುತ್ತಿದೆ. ಈ ಮನವಿಗೂ ಸ್ಪಂದಿಸದೆ ನಿರ್ಲಕ್ಷ್ಯ ಧೋರಣೆ ಅನುಸರಿಸಿದರೆ, ನಾಲ್ಕೂ ದಿಕ್ಕುಗಳಿಂದ ಬೆಂಗಳೂರಿಗೆ ಮುತ್ತಿಗೆ ಹಾಕಿ ಅನಿರ್ದಿಷ್ಟಾವಧಿ ಚಳವಳಿ ನಡೆಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ಮಹಾಸಭಾ ಎಚ್ಚರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.