ADVERTISEMENT

ಕನ್ನಡದ ಸಾಹಿತ್ಯ ಹಿರಿಮೆ ಅನನ್ಯ: ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2012, 5:05 IST
Last Updated 2 ನವೆಂಬರ್ 2012, 5:05 IST

ಚಾಮರಾಜನಗರ: `ಮಾತೃಭಾಷೆ ಕನ್ನಡಕ್ಕೆ 8 ಜ್ಞಾನಪೀಠ ಪ್ರಶಸ್ತಿ ದೊರೆತಿರುವುದು ಕನ್ನಡದ ಸಾಹಿತ್ಯದ ಹಿರಿಮೆಯನ್ನು ಸಾರುತ್ತದೆ~ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಬಣ್ಣಿಸಿದರು.

ನಗರದ ಜಿಲ್ಲಾಡಳಿತ ಭವನದ ಮುಂಭಾಗ ಗುರುವಾರ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾ ರೋಹಣ ನೆರವೇರಿಸಿ ಅವರು ರಾಜ್ಯೋತ್ಸವದ ಸಂದೇಶ ಸಾರಿದರು.

ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಲಭಿಸಿದೆ. ಜತೆಗೆ, ಕನ್ನಡಕ್ಕೆ 8 ಜ್ಞಾನಪೀಠ ಪ್ರಶಸ್ತಿ ದೊರೆತಿರುವುದು ಸಾಹಿತ್ಯದ ಘನತೆಯನ್ನು ಹೆಚ್ಚಿಸಿದೆ. ನಾಡು-ನುಡಿಯ ಗೌರವವೂ ಹೆಚ್ಚಾಗಿದೆ. ಎಲ್ಲರೂ ಕನ್ನಡಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕರ್ನಾಟಕ ಏಕೀಕರಣಗೊಂಡು ಇಂದಿಗೆ 57 ವರ್ಷ ಉರುಳಿವೆ ಎಂದ ಅವರು, ಗಡಿ ಜಿಲ್ಲೆಯೂ ಅಪಾರವಾದ ಸಾಂಸ್ಕೃತಿಕ ಸಂಪತ್ತು ಹೊಂದಿದೆ. ಪೂರ್ವ ಮತ್ತು ಪಶ್ಚಿಮ ಘಟ್ಟಗಳಿಂದ ಆವೃತವಾಗಿದ್ದು, ನೈಸರ್ಗಿಕ ಸಂಪತ್ತು ಹೇರಳವಾಗಿದೆ ಎಂದರು.

ರಾಜ್ಯ ಸರ್ಕಾರ 52 ಗಡಿ ತಾಲ್ಲೂಕು ಗುರ್ತಿಸಿ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದೆ. ಇದರಲ್ಲಿ ಚಾಮರಾಜನಗರ, ಕೊಳ್ಳೇಗಾಲ ಹಾಗೂ ಗುಂಡ್ಲುಪೇಟೆಯನ್ನು ಹಿಂದುಳಿದ ತಾಲ್ಲೂಕು ಗಳೆಂದು ಗುರುತಿಸಿ ಅಭಿವೃದ್ಧಿಗೆ ಕ್ರಮವಹಿಸಲಾಗಿದೆ ಎಂದು ಹೇಳಿದರು.

ಸರ್ಕಾರ ಹಲವು ಜನಪರ ಕಾರ್ಯಕ್ರಮ ಹಮ್ಮಿಕೊಂಡಿದೆ. ಅಂಗವಿಕಲರಿಗೆ ಮಾಸಾಶನ ಸೇರಿದಂತೆ ಅಶಕ್ತರಿಗೆ ಸೌಲಭ್ಯ ಕಲ್ಪಿಸಲು ಒತ್ತು ನೀಡಿದೆ. ಬರಗಾಲದ ಹಿನ್ನೆಲೆಯಲ್ಲಿ ಜಿಲ್ಲೆಯ ನಾಲ್ಕು ತಾಲ್ಲೂಕಿನಲ್ಲೂ ಬರ ಪರಿಹಾರ ಕೈಗೆತ್ತಿಕೊಳ್ಳಲಾಗಿದೆ ಎಂದರು.

ಗ್ರಾಮೀಣರಿಗೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ವಿತರಿಸಲು ಕ್ರಮಕೈಗೊಳ್ಳಲಾಗಿದೆ. ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಜನರು ಸಹಕಾರ ನೀಡಬೇಕು ಎಂದು ಕೋರಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರೊ.ಕೆ.ಆರ್. ಮಲ್ಲಿಕಾರ್ಜುನಪ್ಪ, ಸಂಸದ ಆರ್. ಧ್ರುವನಾರಾಯಣ, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ಆರ್. ಕೃಷ್ಣಮೂರ್ತಿ, ನಗರಸಭೆ ಅಧ್ಯಕ್ಷೆ ಭಾಗ್ಯಮ್ಮ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಿ. ನಾಗಶ್ರೀ, ಉಪಾಧ್ಯಕ್ಷ ಮಹದೇವಪ್ಪ, ಚೂಡಾ ಅಧ್ಯಕ್ಷ ಎಸ್. ಬಾಲಸುಬ್ರಮ್ಮಣ್ಯ, ಜಿಲ್ಲಾಧಿಕಾರಿ                 ಎನ್. ಜಯರಾಂ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಟಿ. ಚಂದ್ರಶೇಖರ್, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹ ಣಾಧಿಕಾರಿ ಎಂ.ಆರ್. ಸೋಮಶೇಖರಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.