ADVERTISEMENT

ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2012, 5:10 IST
Last Updated 13 ಅಕ್ಟೋಬರ್ 2012, 5:10 IST

ಚಾಮರಾಜನಗರ: ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಪುಣಜನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಮೂಡಳ್ಳಿ ಸಮೀಪ ಗುರುವಾರ ರಾತ್ರಿ ನಡೆದಿದೆ.

ಬಾನವಾಡಿ ಗ್ರಾಮದ ಮಾದೇಗೌಡ (55) ಮೃತಪಟ್ಟವರು. ದೊಡ್ಡಮೂಡಹಳ್ಳಿಯ ಜಮೀನಿನಲ್ಲಿ ರಾತ್ರಿ ಕಾವಲು ಕಾಯುತ್ತಿದ್ದ ವೇಳೆ ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟಿದ್ದಾರೆ.

ಭೇಟಿ: ಶಾಸಕ ಸಿ. ಪುಟ್ಟರಂಗಶೆಟ್ಟಿ ಶುಕ್ರವಾರ ಅಧಿಕಾರಿಗಳ ಜತೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿ ಮೃತನ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ನಂತರ ಅರಣ್ಯ ಇಲಾಖೆಯಿಂದ ನೀಡುವ 2 ಲಕ್ಷ ರೂ ಪರಿಹಾರದ ಚೆಕ್ಕನ್ನು ಸಂತ್ರಸ್ತ ಕುಟುಂಬಕ್ಕೆ ವಿತರಿಸಿದರು.
ಬಳಿಕ ಮಾತನಾಡಿದ ಅವರು, ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಮಾದೇಗೌಡ ಅವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 5 ಲಕ್ಷ ರೂ ಪರಿಹಾರ ಮಂಜೂರಾಗಿದೆ. ಪ್ರಥಮ ಹಂತದಲ್ಲಿ 2 ಲಕ್ಷ ರೂ ವಿತರಿಸಲಾಗಿದೆ. ಉಳಿದ ಪರಿಹಾರದ ಹಣವನ್ನು ಶೀಘ್ರವೇ ವಿತರಿಸಲಾಗುವುದು ಎಂದರು.

ಈ ಭಾಗದಲ್ಲಿ ಗಿರಿಜನರು ಹೆಚ್ಚಾಗಿ ನೆಲೆಸಿದ್ದಾರೆ. ಅವರಿಗೆ ಸರ್ಕಾರದಿಂದ ದೊರೆಯುವ ಸವಲತ್ತು ಕಲ್ಪಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಸದಸ್ಯ ಬಸವಣ್ಣ, ತಹಶೀಲ್ದಾರ್ ಚಂದ್ರಕಾಂತ್ ಭಜಂತ್ರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಜಿಲ್ಲಾ ಗಿರಿಜನ ಕಲ್ಯಾಣಾಧಿಕಾರಿ ನಾಗರತ್ನಮ್ಮ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಜೈಕೃಷ್ಣ, ಡಾ.ಶಿವಣ್ಣ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ದಾಶರಥಿ, ಗ್ರಾಮ ಪಂಚಾಯಿತಿ ಸದಸ್ಯರಾದ ಜಡೆಯಪ್ಪ, ಮೂರ್ತಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.