ಚಾಮರಾಜನಗರ: `ಕ್ರೀಡಾಪಟುಗಳಿಗೆ ಸೌಕರ್ಯ ಕಲ್ಪಿಸಲು ನಿರ್ಮಿಸುತ್ತಿರುವ ಹಾಸ್ಟೆಲ್ ಹಾಗೂ ಗ್ಯಾಲರಿ ಕಾಮಗಾರಿ ಮಂದಗತಿಯಲ್ಲಿ ಸಾಗಿದೆ. ತ್ವರಿತಗತಿಯಲ್ಲಿ ಕಾಮಗಾರಿ ಕೈಗೆತ್ತಿಕೊಂಡು ಇನ್ನು 8 ತಿಂಗಳೊಳಗೆ ಪೂರ್ಣಗೊಳಿಸಲು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಮುಂದಾಗಬೇಕು' ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ತಾಕೀತು ಮಾಡಿದರು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಸೋಮವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡಲು ಸರ್ಕಾರ ಅನುದಾನ ನೀಡಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಲಭಿಸಿರುವ ಅನುದಾನವನ್ನು ನಿಗದಿತ ಅವಧಿಯೊಳಗೆ ಖರ್ಚು ಮಾಡಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಬೇಕಿದೆ ಎಂದು ಸೂಚಿಸಿದರು.
32 ಎಕರೆ ಹೊಂದಿರುವ ಈ ಕ್ರೀಡಾಂಗಣವನ್ನು ಸುಸಜ್ಜಿತವಾಗಿ ನಿರ್ಮಾಣ ಮಾಡಲು ಸರ್ಕಾರದಿಂದ ಇನ್ನೂ ಹೆಚ್ಚಿನ ಅನುದಾನ ಮಂಜೂರು ಮಾಡಿಸಲಾಗುವುದು ಎಂದು ಭರವಸೆ ನೀಡಿದರು.
`ಎಸ್‌ಆರ್ ದರಕ್ಕೆ ಅನುಮೋದನೆ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಕಾಮಗಾರಿ ಮಂದಗತಿಯಲ್ಲಿ ಸಾಗಿದೆ. ಅನುಮೋದನೆ ದೊರೆತ ನಂತರ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು' ಎಂದು ಗುತ್ತಿಗೆದಾರರು ಶಾಸಕರಿಗೆ ವಿವರಿಸಿದರು.
ನಿರ್ಮಿತಿ ಕೇಂದ್ರದ ಅಧಿಕಾರಿ ರಾಜಪ್ಪ, ವೃಷಭೇಂದ್ರಪ್ಪ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಚೆಲುವಯ್ಯ, ಮಹದೇವು, ರಂಗಸ್ವಾಮಿ, ಗುತ್ತಿಗೆದಾರ ರಂಗರಾಜು, ಮುಖಂಡ ಸೋಮಲಿಂಗಪ್ಪ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.