ADVERTISEMENT

ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2017, 5:46 IST
Last Updated 30 ಅಕ್ಟೋಬರ್ 2017, 5:46 IST

ಚಾಮರಾಜನಗರ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಜನರ ಸಮಸ್ಯೆ ಹಾಗೂ ದೂರುಗಳಿಗೆ ತಕ್ಷಣ ಪರಿಹಾರ ಕ್ರಮಗಳಿಗೆ ಮುಂದಾಗುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ. ರಾಮು ಸೂಚನೆ ನೀಡಿದರು. ನಗರದಲ್ಲಿ ಶನಿವಾರ ನಡೆದ ಜಿಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಹಿತರಕ್ಷಣಾ (ಕ್ಷೇಮಾಭಿವೃದ್ಧಿ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಿತಿ ಸಭೆಯು ತಾಲ್ಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಸಕಾಲಕ್ಕೆ ನಡೆಯಬೇಕು. ಸಭೆಯಲ್ಲಿ ಚರ್ಚಿತವಾಗುವ ಸಮಸ್ಯೆ ಹಾಗೂ ಕುಂದುಕೊರತೆಗಳಿಗೆ ತ್ವರಿತ ಪರಿಹಾರ ಸಿಗಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಗಮನ ಹರಿಸುವಂತೆ ತಿಳಿಸಿದರು.

ಚಾಮರಾಜನಗರದ ಆದಿಜಾಂಬವ ಜನಾಂಗದವರಿಗೆ ರುದ್ರಭೂಮಿ ಒದಗಿಸಲು ಅಗತ್ಯವಿರುವ ಪ್ರಕ್ರಿಯೆ ತುರ್ತಾಗಿ ಕೈಗೊಳ್ಳಬೇಕು. ಗಂಗಾಕಲ್ಯಾಣ ಯೋಜನೆಯಡಿ ಕೊರೆಯಲಾಗಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವಿಳಂಬ ಧೋರಣೆ ಮಾಡಬಾರದು. ನಿಗದಿತ ವೇಳೆಗೆ ಕಾಮಗಾರಿ ಪೂರ್ಣಗೊಳಿಸಿ ನೀರಾವರಿ ಸೌಲಭ್ಯ ಪಡೆಯಲು ಅನುವು ಮಾಡಿಕೊಡಬೇಕು ಎಂದು ನಿರ್ದೇಶಿಸಿದರು.

ADVERTISEMENT

ಪರಿಶಿಷ್ಟ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜುಗೊಳ್ಳಲು ಪರೀಕ್ಷಾ ತರಬೇತಿ ಕೇಂದ್ರವನ್ನು ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆರಂಭಿಸಬೇಕು. ಇದರಿಂದ ಅಭ್ಯರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ ಎಂದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಸಿವಿಲ್ ಕಾಮಗಾರಿ ಹಂಚಿಕೆ ಮಾಡುವಾಗ ನಿಯಮದಂತೆ ಟೆಂಡರ್‌ ಪ್ರಕ್ರಿಯೆಯಲ್ಲಿ ಮೀಸಲಾತಿ ನೀಡಲಾಗುತ್ತಿದೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿ ತಿಳಿಸಿದರು.

ಹಿತರಕ್ಷಣಾ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಎಂ. ಚಿಕ್ಕಮಹದೇವ ಹಾಗೂ ರಾಮಕೃಷ್ಣಯ್ಯ ಮಾತನಾಡಿ, ಪರಿಶಿಷ್ಟ ಜಾತಿ, ವರ್ಗದವರಿಗೆ ಅರಣ್ಯ ಪ್ರದೇಶದಲ್ಲಿ ಮಂಜೂರಾಗಿರುವ ದರಖಾಸ್ತು ಜಮೀನು ಹಾಗೂ ಜೀತವಿಮುಕ್ತರಿಗೆ ಸಾಗುವಳಿ ಚೀಟಿ ನೀಡಿ ಜಮೀನು ಹಂಚಿಕೆ ಮಾಡಿಲ್ಲ. ಈ ಕುರಿತು ಹಿಂದೆಯೂ ಚರ್ಚೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ತಾಲ್ಲೂಕಿನ ಹರದನಹಳ್ಳಿಯಲ್ಲಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ, ಗಿರಿಜನ ಉಪಯೋಜನೆಯಡಿ ಕುರಿ ವಿತರಣೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳ ಪರಿಶೀಲನೆ ಹಾಗೂ ಪರಿಹಾರ ಸೇರಿದಂತೆ ಹಿಂದಿನ ಸಭೆಯಲ್ಲಿ ದಾಖಲಾದ ದೂರುಗಳಿಗೆ ಸಂಬಂಧಿಸಿದಂತೆ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಪರಾಮರ್ಶೆ ನಡೆಯಿತು.

ಪಿಟಿಸಿಎಲ್ ಕಾಯ್ದೆ ದುರುಪಯೋಗ, ಬಾಂಕಿನಲ್ಲಿ ಸಾಲಸೌಲಭ್ಯಕ್ಕೆ ವಿಳಂಬ, ಪೌರಕಾರ್ಮಿಕರಿಗೆ ಮೂಲಸೌಕರ್ಯ, ಜಮೀನು ಮಂಜೂರು ಮುಂತಾದ ದೂರುಗಳ ಅರ್ಜಿಗಳನ್ನು ಸ್ವೀಕರಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್‌ ಕುಮಾರ್ ಮೀನಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ಹೆಚ್. ಸತೀಶ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೃಷ್ಣಪ್ಪ, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.