ADVERTISEMENT

ಜನಸಂಖ್ಯೆ ನಿಯಂತ್ರಣ: ಅರಿವು ಅಗತ್ಯ

ಜಿಲ್ಲಾಧಿಕಾರಿ ಎಂ.ವಿ. ಸಾವಿತ್ರಿ

​ಪ್ರಜಾವಾಣಿ ವಾರ್ತೆ
Published 12 ಜುಲೈ 2013, 6:00 IST
Last Updated 12 ಜುಲೈ 2013, 6:00 IST

ಚಾಮರಾಜನಗರ: `ಜನಸಂಖ್ಯಾ ನಿಯಂತ್ರಣಕ್ಕೆ ಸರ್ಕಾರ ಹಲವು ಕಾರ್ಯಕ್ರಮ ರೂಪಿಸಿದೆ. ಆದರೆ, ಅರಿವಿನ ಕೊರತೆಯಿಂದ ಈ ಕಾರ್ಯಕ್ರಮಗಳು ಸಫಲತೆ ಕಾಣುತ್ತಿಲ್ಲ' ಎಂದು ಜಿಲ್ಲಾಧಿಕಾರಿ ಎಂ.ವಿ. ಸಾವಿತ್ರಿ ಹೇಳಿದರು.

ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಜನಸಂಖ್ಯಾ ಸ್ಫೋಟ ನಡೆಯುತ್ತಿದೆ. ಇದರ ಪರಿಣಾಮ ಜನರ ಜೀವನಮಟ್ಟ ಸುಧಾರಣೆ ಕಾಣಲು ಸಾಧ್ಯವಾಗಿಲ್ಲ. ಯುವಕ- ಯುವತಿಯರು ಈ ಬಗ್ಗೆ ಜಾಗೃತರಾಗಬೇಕಿದೆ. ಪ್ರಜ್ಞಾವಂತಿಕೆ ಬೆಳೆಸಿಕೊಂಡರೆ ಜನಸಂಖ್ಯಾ ಸ್ಫೋಟಕ್ಕೆ ಕಡಿವಾಣ ಹಾಕಬಹುದು. ಈ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಜನಸಂಖ್ಯಾ ನಿಯಂತ್ರಣ ದಿನಾಚರಣೆ ಎಂಬ ಭಾವನೆಯಿಂದ ಆಚರಿಸಬೇಕು ಎಂದು ಸಲಹೆ ನೀಡಿದರು.

ಸಿದ್ಧಾರ್ಥ ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯ ಎನ್. ಮಹದೇವಸ್ವಾಮಿ ಮಾತನಾಡಿ, `ರಾಷ್ಟ್ರದಲ್ಲಿ ನಾಗಾಲೋಟದಲ್ಲಿ ಓಡುತ್ತಿರುವ ಜನಸಂಖ್ಯೆ ನಿಯಂತ್ರಣಕ್ಕೆ ಎಲ್ಲ ಯೋಜನೆಗಳು ನಿಷ್ಪ್ರಯೋಜಕವಾಗುತ್ತಿವೆ. 2032ರ ವೇಳೆಗೆ ಭಾರತ ನೆರೆಯ ಚೀನಾ ದೇಶದ ಜನಸಂಖ್ಯೆ ಮೀರಿಸಿ ಮೊದಲ ಸ್ಥಾನ ಗಿಟ್ಟಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಜನಸಂಖ್ಯೆಗೆ ನಿಯಂತ್ರಣ ಹೇರಬೇಕಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಿ. ನಾಗಶ್ರೀ ಮಾತನಾಡಿ, `ದೇಶದಲ್ಲಿ ಹಲವು ಕಾನೂನು ಜಾರಿಯಲ್ಲಿದ್ದರೂ ಜನಸಂಖ್ಯಾ ನಿಯಂತ್ರಣಕ್ಕೆ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ. ಹೆಣ್ಣುಮಕ್ಕಳ ಸಂಖ್ಯೆಯೂ ಕಡಿಮೆಯಾಗುತ್ತಿದೆ' ಎಂದು ಕಳವಳ ವ್ಯಕ್ತಪಡಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎನ್. ರಮೇಶ್‌ಬಾಬು ಮಾತನಾಡಿ, ಜಿಲ್ಲೆಯಲ್ಲಿ 2011ರ ಜನಗಣತಿ ಅನ್ವಯ 10,55,500 ಜನರಿದ್ದಾರೆ. ಜಿಲ್ಲೆಯ ಜನಸಂಖ್ಯಾ ಬೆಳವಣಿಗೆ ದರ ಶೇ. 5.77ರಷ್ಟಿದೆ. ರಾಜ್ಯದ ಒಟ್ಟಾರೆ ಪ್ರಮಾಣಕ್ಕೆ ಹೋಲಿಸಿದರೆ ಜಿಲ್ಲೆಯ ಜನಸಂಖ್ಯೆ ದರ ಕಡಿಮೆ ಇದೆ. ಕುಟುಂಬ ನಿಯಂತ್ರಣ ಯೋಜನೆಯಲ್ಲಿ ಇಡೀ ರಾಜ್ಯದಲ್ಲಿಯೇ ಜಿಲ್ಲೆಯು ಕಳೆದ 3 ವರ್ಷಗಳಿಂದ ಮೊದಲ ಸ್ಥಾನದಲ್ಲಿದೆ ಎಂದು ಹೇಳಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಲ್ಲಿಕಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪುಟ್ಟಮಾದು, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಗೋವಿಂದನಾಯಕ  ಹಾಜರಿದ್ದರು. ಕಾರ್ಯಕ್ರಮಕ್ಕೂ ಮೊದಲು ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದ ಮುಂಭಾಗದಿಂದ ಜಾಗೃತಿ ಜಾಥಾ ಆರಂಭಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.