ADVERTISEMENT

ನರೇಗಾ: ಪ್ರಗತಿ ಹೆಚ್ಚಳಕ್ಕೆ ಸೂಚನೆ

ಪ್ರತಿದಿನ 20 ಸಾವಿರ ಮಾನವ ದಿನ ಸೃಜಿಸಬೇಕು: ಸಿಇಒ ಡಾ.ನರಸಿಂಹಮೂರ್ತಿ

​ಪ್ರಜಾವಾಣಿ ವಾರ್ತೆ
Published 21 ಜನವರಿ 2016, 9:35 IST
Last Updated 21 ಜನವರಿ 2016, 9:35 IST
ಚಾಮರಾಜನಗರದಲ್ಲಿ ಬುಧವಾರ ನಡೆದ ತಾಲ್ಲೂಕು ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎಚ್‌. ನರಸಿಂಹಮೂರ್ತಿ ಮಾತನಾಡಿದರು ಪ್ರಜಾವಾಣಿ ಚಿತ್ರ
ಚಾಮರಾಜನಗರದಲ್ಲಿ ಬುಧವಾರ ನಡೆದ ತಾಲ್ಲೂಕು ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎಚ್‌. ನರಸಿಂಹಮೂರ್ತಿ ಮಾತನಾಡಿದರು ಪ್ರಜಾವಾಣಿ ಚಿತ್ರ   

ಚಾಮರಾಜನಗರ: ‘ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರತಿದಿನ 20 ಸಾವಿರ ಮಾನವ ದಿನ ಸೃಜಿಸಬೇಕು’ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎಚ್. ನರಸಿಂಹಮೂರ್ತಿ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಈಗ 16ರಿಂದ 17 ಸಾವಿರ ಮಾನವ ದಿನಗಳು ಪ್ರತಿದಿನ ಸೃಜನೆಯಾಗುತ್ತಿವೆ. ಇದರಿಂದ ನಿಗದಿತ ಗುರಿ ಮುಟ್ಟಲು ಸಾಧ್ಯವಾಗುವುದಿಲ್ಲ.  ಮಾನವ ದಿನಗಳು ಹೆಚ್ಚಿಸಲು ಸೂಕ್ತ ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.

ಉದ್ಯೋಗ ಖಾತ್ರಿ ಯೋಜನೆಯಡಿ ಬೇರೆ ಇಲಾಖೆಯ ಸಮನ್ವಯ ಕಾಮಗಾರಿಗಳನ್ನು ಹೆಚ್ಚಾಗಿ ಮಾಡಿ ಗುರಿ ಮುಟ್ಟಬೇಕು. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ ಸೇರಿದಂತೆ ಇತರೇ ಇಲಾಖೆಯಲ್ಲಿ ಸಮನ್ವಯ ಕಾಮಗಾರಿ ಗುರುತಿಸಿ ಜನರಿಗೆ ಕೆಲಸ ಕೊಡಬೇಕು ಎಂದು ತಿಳಿಸಿದರು.

ಕೃಷಿ ಇಲಾಖೆಯು ರೈತರ ಭೂ ಅಭಿವೃದ್ಧಿ, ಬದು ನಿರ್ಮಾಣ, ಮಲ್ಟಿ ಆರ್ಚ್‌ ಚೆಕ್‌ಡ್ಯಾಂ, ಮಳೆ ನೀರು ಇಂಗು ಕಾಲುವೆ, ಒಕ್ಕಣೆ ಕಣ, ಎರೆಹುಳು ಘಟಕ ಕಾಮಗಾರಿ ಪ್ರಾರಂಭಿಸಬೇಕು ಎಂದು ಸೂಚಿಸಿದರು.

ಕೃಷಿ ಹೊಂಡವು ರೈತರಿಗೆ ಬಹಳ ಉಪಯುಕ್ತವಾಗಿದೆ. ಅರ್ಹ ಫಲಾನುಭವಿ ಹಾಗೂ ಸೂಕ್ತ ಜಾಗವನ್ನು ಇಲಾಖೆಯ ಅಧಿಕಾರಿಗಳು ಪರಿಶೀಲನೆ ಮಾಡಬೇಕು. ತ್ವರಿತವಾಗಿ ಕೆಲಸ ಪ್ರಾರಂಭಿಸಬೇಕು. ತಾಲ್ಲೂಕು ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿಗಳು ಇನ್ನೂ ಮೂರು ದಿನದಲ್ಲಿ ಈ ಕಾಮಗಾರಿಗಳಿಗೆ ಕ್ರಿಯಾಯೋಜನೆ ತಯಾರಿಸಬೇಕು ಎಂದು ತಾಕೀತು ಮಾಡಿದರು.

ತೋಟಗಾರಿಕೆ ಇಲಾಖೆಯಿಂದ ಪೌಷ್ಟಿಕ ಕೈತೋಟ ನಿರ್ಮಿಸಲು ಉದ್ಯೋಗ ಖಾತ್ರಿ ಯೋಜನೆಯಡಿ ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯಲ್ಲಿ ಜಾಬ್ ಕಾರ್ಡ್‌ ಹೊಂದಿರುವ ಫಲಾನುಭವಿಗೆ ತೋಟಗಾರಿಕೆ ಇಲಾಖೆಯಿಂದ ಗಿಡಗಳನ್ನು ನೀಡಲಾಗುತ್ತದೆ. ಇದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಎನ್‌. ಮುನಿರಾಜಪ್ಪ, ಸಹಾಯಕ ಯೋಜನಾಧಿಕಾರಿ ಸಿದ್ದಲಿಂಗಸ್ವಾಮಿ ಮುಂತಾದವರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.