ADVERTISEMENT

ಲಾಠಿ ಚಾರ್ಜ್ ಪ್ರಕರಣ: ವಿಚಾರಣೆ ಆರಂಭ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2011, 9:20 IST
Last Updated 16 ಸೆಪ್ಟೆಂಬರ್ 2011, 9:20 IST

ಚಾಮರಾಜನಗರ: ರೈತರ ಮೇಲೆ 2009ರ ಡಿ. 11ರಂದು ನಡೆದ ಲಾಠಿ ಚಾರ್ಜ್ ಪ್ರಕರಣ ಸಂಬಂಧ ಮ್ಯಾಜಿಸ್ಟಿರಿಯಲ್ ತನಿಖೆ ಗುರುವಾರ ಆರಂಭಗೊಂಡಿದೆ.

ತನಿಖೆ ನಡೆಸಲು ನೇಮಕವಾಗಿರುವ ಮೈಸೂರು ಪ್ರಾದೇಶಿಕ ವಿಭಾಗದ ಆಯುಕ್ತೆ ಜಯಂತಿ ಅವರು ಬೆಳಿಗ್ಗೆ ಘಟನೆ ನಡೆದ ಸ್ಥಳ ಪರಿಶೀಲನೆ ನಡೆಸಿದರು. ಜಿಲ್ಲಾಡಳಿತ ಭವನ ಬಳಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

ಬೆಳೆ ನಷ್ಟ, ನೀರಾವರಿ ಯೋಜನೆ ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆ ಮುಂದಿಟ್ಟುಕೊಂಡು ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ನೇತೃತ್ವದಲ್ಲಿ ನಡೆದ ಹೋರಾಟದ ವೇಳೆ ಪೊಲೀಸರು ಮತ್ತು ರೈತರೊಂದಿಗೆ ಮಾತಿನ ಚಕಮಕಿ ನಡೆದಿತ್ತು. ಇದೇ ವೇಳೆ ರೈತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎಂದು ರೈತ ಸಂಘ ದೂರಿತ್ತು. 39 ಮುಖಂಡರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.

ರೈತರ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದೆ. ಈ ಕುರಿತು ಸೂಕ್ತ ತನಿಖೆ ನಡೆಸಬೇಕು. ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ರೈತರಿಗೆ ಸೂಕ್ತ ಪರಿಹಾರ ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ರೈತ ಸಂಘ ಮತ್ತು ಹಸಿರು ಸೇನೆಯಿಂದ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಅಂತಿಮವಾಗಿ ಪ್ರಾದೇಶಿಕ ಆಯುಕ್ತರು ತನಿಖೆ ನಡೆಸಿ ವರದಿ ಸಲ್ಲಿಸಲು ಸರ್ಕಾರ ಸೂಚಿಸಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಘಟನೆಗೆ ಸಂಬಂಧಪಟ್ಟಂತೆ ಮಾಹಿತಿ ಇರುವ ವ್ಯಕ್ತಿಗಳಿಂದ ಹೇಳಿಕೆ ದಾಖಲಿಸಿಕೊಳ್ಳಲಾಯಿತು. ಶುಕ್ರವಾರ ಕೂಡ ವಿಚಾರಣೆ ನಡೆಯಲಿದೆ. ರೈತ ಸಂಘದ ಮುಖಂಡರು, ಕಾರ್ಯಕರ್ತರು ಹಾಗೂ ಘಟನೆ ನಡೆದ ವೇಳೆ ತಾವು ಹಾಜರಿದ್ದವೆಂದು ಕೆಲವು ನಾಗರಿಕರು ಆಯುಕ್ತರ ಮುಂದೆ ಮಾಹಿತಿ ನೀಡಿದರು.

ಪರ-ವಿರೋಧದ ಹೇಳಿಕೆ
ನ್ಯಾಯಯುತವಾಗಿ ಪ್ರತಿಭಟನೆ ನಡೆಸಲಾ ಗುತಿತ್ತು. ಆದರೆ, ಆಗಿನ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಏಕಾಏಕಿ ನಿರ್ಧಾರ ಕೈಗೊಂಡಿದ್ದಾರೆ. ರೈತರ ಮೇಲೆ ಲಾಠಿ ಪ್ರಹಾರ ನಡೆಸಿ ದೌರ್ಜನ್ಯ ಎಸಗಿದ್ದಾರೆ. ಹಲವು ಮುಖಂಡರು, ಕಾರ್ಯಕರ್ತರು ದೌರ್ಜನ್ಯದಿಂದ ಗಾಯ ಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಾಂತಿ ಯುತ ಹೋರಾಟ ಹತ್ತಿಕ್ಕಲು ಅನ್ನದಾತರ ಮೇಲೆ ಲಾಠಿ ಪ್ರಯೋಗಿಸಿದ್ದಾರೆ ಎಂದು ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರು ಘಟನಾ ಸ್ಥಳದಲ್ಲಿ ಆಯುಕ್ತೆ ಜಯಂತಿ ಅವರಿಗೆ ಮಾಹಿತಿ ನೀಡಿದರು.

`ರೈತ ಮುಖಂಡರು ಜೋಡಿರಸ್ತೆಯಲ್ಲಿ ಟ್ರ್ಯಾಕ್ಟರ್ ನಿಲ್ಲಿಸಿಕೊಂಡು ಪ್ರತಿಭಟನೆ ಮಾಡು ತ್ತಿದ್ದರು. ಇದರಿಂದ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಸಂಚಾರಕ್ಕೆ ತೊಂದರೆಯಾ ಯಿತು. ಆ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು~ ಎಂದು ಕೆಲವು ಮುಖಂಡರು ಆಯುಕ್ತರ ಮುಂದೆ ಹೇಳಿಕೆ ನೀಡಿದರು.

ನಂತರ ಮಾತನಾಡಿದ ಜಯಂತಿ, `ಮಾಹಿತಿ ಇರುವ ಎಲ್ಲರಿಂದಲೂ ಹೇಳಿಕೆ ದಾಖಲಿಸ ಲಾಗುವುದು. ಡಿಸಿ ಕಚೇರಿ ಸಭಾಂಗಣದಲ್ಲಿ ನಡೆಯುವ ವಿಚಾರಣೆಗೆ ಹಾಜರಾಗಿ ಮಾಹಿತಿ ನೀಡಬೇಕು~ ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಕೆ. ಅಮರನಾರಾಯಣ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಟಿ. ಚಂದ್ರಶೇಖರ್, ಉಪ ವಿಭಾಗಾಧಿಕಾರಿ ಎ.ಬಿ. ಬಸವರಾಜು, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಚ್. ಚಂದ್ರಶೇಖರ್ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.