ADVERTISEMENT

ವಲಸೆ ತಡೆಗೆ ಉದ್ಯೋಗ ಖಾತ್ರಿ ವರದಾನ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2012, 6:15 IST
Last Updated 25 ಫೆಬ್ರುವರಿ 2012, 6:15 IST

ಚಾಮರಾಜನಗರ: `ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಸದ್ಬಳಕೆಯಾದರೆ ಗ್ರಾಮೀಣ ವಲಸೆಗೆ ಕಡಿವಾಣ ಬೀಳಲಿದೆ~ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಂಕರರಾಜ್ ಹೇಳಿದರು.

ನಗರದ ಜಿ.ಪಂ. ಕೆಡಿಪಿ ಸಭಾಂಗಣದಲ್ಲಿ ಶುಕ್ರವಾರ ಆದಿವಾಸಿ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ, ಸಾಧನ ಸಂಸ್ಥೆ, ಮಹಿಳಾ ಸಮಾಖ್ಯಾ, ಕೇಂದ್ರೀಯ ಕಾರ್ಮಿಕ ಶಿಕ್ಷಣ ಮಂಡಳಿ, ಉದ್ಯೋಗ ಮತ್ತು ಕಾರ್ಮಿಕ ಇಲಾಖೆಯಿಂದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕುರಿತು ಹಮ್ಮಿಕೊಂಡಿದ್ದ ತಾಲ್ಲೂಕುಮಟ್ಟದ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಶೇ. 80ರಷ್ಟು ಅಸಂಘಟಿತ ಕಾರ್ಮಿಕರಿದ್ದಾರೆ. ಅವರ ಬದುಕನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ 2005ರಿಂದ ಉದ್ಯೋಗ ಖಾತ್ರಿ ಯೋಜನೆ ಆರಂಭಗೊಂಡಿತು. ಗ್ರಾಮೀಣರು ಉದ್ಯೋಗ ಅರಸಿಕೊಂಡು ಪಟ್ಟಣ ಪ್ರದೇಶಕ್ಕೆ ವಲಸೆ ಹೋಗುವುದನ್ನು ತಡೆಗಟ್ಟಲು ಈ ಯೋಜನೆ ಸಹಕಾರಿಯಾಗಿದೆ ಎಂದರು.

ಕೇಂದ್ರ ಸರ್ಕಾರದಿಂದ ಉದ್ಯೋಗ ಖಾತ್ರಿ ಯೋಜನೆಯ ಅಧಿನಿಯಮ ಕೂಡ ಜಾರಿಗೊಂಡಿದೆ. ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿಯಿಂದ ಸಮರ್ಪಕ ಮಾಹಿತಿ ಪಡೆದು ಪ್ರತಿಯೊಬ್ಬರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಯೋಜನೆಯಡಿ ಮಹಿಳೆಯರು ಹಾಗೂ ಪುರುಷರಿಗೆ ಸಮಾನ ಹಕ್ಕಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಕೆ. ಈಶ್ವರ್ ಮಾತನಾಡಿ, `ಉದ್ಯೋಗ ಪಡೆಯುವುದು ಪ್ರತಿಯೊಬ್ಬರ ಹಕ್ಕು. ಸರ್ಕಾರದ ಇಂತಹ ಯೋಜನೆಗಳು ಯಶಸ್ವಿಯಾಗಲು ಹಾಗೂ ವಿಫಲವಾಗಲು ಫಲಾನುಭವಿಗಳೇ ಕಾರಣರಾಗುತ್ತಾರೆ~ ಎಂದರು.

ಕಾರ್ಯಕ್ರಮದಲ್ಲಿ ಸಿಡಬ್ಲ್ಯುಇ ಪ್ರಾದೇಶಿಕ ನಿರ್ದೇಶಕ ಜಡ್.ಎ. ಭಗವಾನ್, ಸಾಧನಾ ಸಂಸ್ಥೆ ಕಾರ್ಯ ದರ್ಶಿ ಎನ್. ಮಧು, ಕೇಂದ್ರೀಯ ಕಾರ್ಮಿಕ ಶಿಕ್ಷಣ ಮಂಡಳಿಯ ಶಂಕರಲಿಂಗೇಗೌಡ, ಆದಿವಾಸಿ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಿರ್ದೇಶಕ ಬಿ.ಎಸ್. ಬಸವರಾಜು, ಕಲೆ ನಟರಾಜು ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.