ADVERTISEMENT

ವಾಲ್ಮೀಕಿ ಜಯಂತಿ ಅದ್ದೂರಿ ಆಚರಣೆಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2012, 5:55 IST
Last Updated 12 ಅಕ್ಟೋಬರ್ 2012, 5:55 IST

ಚಾಮರಾಜನಗರ: ಸಂಘ-ಸಂಸ್ಥೆಗಳು ಸೇರಿದಂತೆ ಎಲ್ಲರ ಸಹಕಾರದೊಂದಿಗೆ ಅ. 29ರಂದು ಜಿಲ್ಲಾ ಕೇಂದ್ರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಎನ್.ಜಯರಾಂ ಮಾತನಾಡಿ, ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಇದಕ್ಕೂ ಮೊದಲು ಪ್ರವಾಸಿ ಮಂದಿರದ ಆವರಣದಿಂದ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆ ಆರಂಭಿಸಬೇಕು. ಜನಪದ ಕಲಾತಂಡಗಳು ಭಾಗವಹಿಸುವಂತೆ ಕ್ರಮವಹಿಸಬೇಕು ಎಂದು ಸೂಚಿಸಿದ ಅವರು, ಅ. 27ರಂದು ಮಹರ್ಷಿ ವಾಲ್ಮೀಕಿ ಕುರಿತು ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗುವುದು ಎಂದರು.

ಕಾರ್ಯಕ್ರಮ ನಿಗದಿತ ಸಮಯಕ್ಕೆ ಆರಂಭವಾಗಬೇಕು. ವಾಲ್ಮೀಕಿ ಜಯಂತಿ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲ ವರ್ಗದ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಆಗ ಮಾತ್ರ ಜಾತ್ಯತೀತ ತತ್ವವನ್ನು ಗೌರವಿಸಿದಂತಾಗುತ್ತದೆ ಎಂದರು.

ಚೂಡಾ ಮಾಜಿ ಅಧ್ಯಕ್ಷ ಸುಂದರ್ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರವನ್ನು ಆನೆಯ ಮೇಲೆ ಮೆರವಣಿಗೆ ಮಾಡಬೇಕು ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ದೇಶದ ಮಹಾನ್ ವ್ಯಕ್ತಿಗಳ ಜನ್ಮ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸುವ ಮಾದರಿಯಲ್ಲಿಯೇ ಮಹರ್ಷಿ ವಾಲ್ಮೀಕಿ ಜಯಂತಿಯನ್ನೂ ಯಾವುದೇ ಲೋಪವಿಲ್ಲದೆ ಯಶಸ್ವಿಯಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರಪ್ರಸಾದ್, ಜಿಲ್ಲಾ ಗಿರಿಜನ ಕಲ್ಯಾಣಾಧಿಕಾರಿ ನಾಗರತ್ನಮ್ಮ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಎಸ್. ಪ್ರತಿಭಾ, ಜಿಲ್ಲಾ ಆಹಾರ ಇಲಾಖೆಯ ಉಪ ನಿರ್ದೇಶಕ ಡಾ.ಎಸ್.ಇ. ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ಮಂಜಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಮಹದೇವ, ಕೇತಮ್ಮ, ಮುಖಂಡರಾದ ಸುರೇಶ್ ನಾಯಕ್, ಸುರೇಶ್‌ನಾಗ್ ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.