ADVERTISEMENT

ಸದಾಶಿವ ಆಯೋಗದ ಶಿಫಾರಸ್ಸು ಜಾರಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 3 ಜುಲೈ 2012, 8:25 IST
Last Updated 3 ಜುಲೈ 2012, 8:25 IST

ಚಾಮರಾಜನಗರ:`ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಂಬಂಧ ರಚಿಸಿದ್ದ ನ್ಯಾ.ಎ.ಜೆ. ಸದಾಶಿವ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಶೀಘ್ರವೇ ಕ್ರಮಕೈಗೊಳ್ಳಬೇಕು~ ಎಂದು ವಿಧಾನ ಪರಿಷತ್‌ನ ಮಾಜಿ ಸದಸ್ಯ ಸಿ. ರಮೇಶ್ ಒತ್ತಾಯಿಸಿದರು.

ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಭಾನುವಾರ ತಾಲ್ಲೂಕು ಮಾತಂಗ ವಿದ್ಯಾರ್ಥಿ ವೇದಿಕೆಯಿಂದ ಹಮ್ಮಿ ಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ಒಳ ಮೀಸಲಾತಿ ಜಾರಿಯ ವರದಿ ನ್ಯಾಯಯುತವಾಗಿದೆ. ದಲಿತರ ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರ ಸೌಲಭ್ಯ ಕಲ್ಪಿಸಬೇಕು. ಸರ್ಕಾರಿ ಉದ್ಯೋಗಕ್ಕಾಗಿ ವಿದ್ಯಾಭ್ಯಾಸ ಮಾಡದಿದ್ದರೂ ಸಮುದಾಯ ದ ಅಭಿವೃದ್ಧಿಗೆ ಜಾರಿಗೊಳಿಸಿರುವ ಕಾರ್ಯಕ್ರಮಗಳ ಬಗ್ಗೆ ಅರಿವು ಹೊಂದಲು ಶಿಕ್ಷಣ ಅಗತ್ಯ. ಈ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಮಕ್ಕಳಿಗೆ ಶಿಕ್ಷಣ ಕೊಡಿಸಲು ಪೋಷಕರು ಮುಂದಾಗಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರಪ್ರಸಾದ್ ಮಾತನಾಡಿ, ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೋಷಕರು, ಸಂಘ- ಸಂಸ್ಥೆಗಳು, ಆಯಾ ಜನಾಂಗದ ಮುಖಂಡರು ಉತ್ತೇಜನ ನೀಡಬೇಕು. ವಿದ್ಯಾರ್ಥಿಗಳು ಐಎಎಸ್, ಕೆಎಎಸ್‌ನಂತಹ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಉನ್ನತ ಹುದ್ದೆ ಅಲಂಕರಿಸಿ ಸಮಾಜ ಸೇವೆ ಮಾಡುವ ಗುರಿ ಹೊಂದಬೇಕು ಎಂದು ಕಿವಿಮಾತು ಹೇಳಿದರು.

ನಾಗಮ್ಮ ಅವರನ್ನು ಸನ್ಮಾನಿಸಲಾಯಿತು. ಬಾಬು ಜಗಜೀವನರಾಂ ಯುವ ಜಾಗೃತಿ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಎಂ. ಶಿವಮೂರ್ತಿ, ಜಿಲ್ಲಾ ಶ್ರೀಶಿವಶರಣ ಮಾದರ ಚನ್ನಯ್ಯ ವಿಚಾರ ವೇದಿಕೆ ಅಧ್ಯಕ್ಷ ರಾಜಣ್ಣ, ಉಪಾಧ್ಯಕ್ಷ ಚಾಮರಾಜು, ಆದಿಜಾಂಬವ ನೌಕರರ ಸಂಘದ ಅಧ್ಯಕ್ಷ ಬಸವರಾಜು, ನಗರಸಭೆ ಸದಸ್ಯ ಕೆ.ಎಸ್. ಮಹೇಶ್, ಮಾಜಿ ಸದಸ್ಯ ಮಹದೇವಯ್ಯ, ಮುಖಂಡ ಬಸವನಪುರ ರಾಜಶೇಖರ್, ಬಿಎಸ್‌ಪಿ ಜಿಲ್ಲಾ ಘಟಕದ ಅಧ್ಯಕ್ಷ ಅರಕಲವಾಡಿ ನಾಗೇಂದ್ರ, ಪ್ರಾಂಶುಪಾಲ ಮುತ್ತುರಾಜು, ಸಿ. ಲಿಂಗಯ್ಯ, ಹನುಮಂತಯ್ಯ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.