ADVERTISEMENT

‘ಸಿದ್ದರಾಮಯ್ಯ ನಿಷ್ಪ್ರಯೋಜಕ ಮುಖ್ಯಮಂತ್ರಿ’

ಬಿಜೆಪಿ ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಟೀಕೆ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2018, 6:50 IST
Last Updated 30 ಮಾರ್ಚ್ 2018, 6:50 IST

ಚಾಮರಾಜನಗರ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗದವರ ಅಭಿವೃದ್ಧಿಗಾಗಿ ಸಂವಿಧಾನಾತ್ಮಕವಾದ ಯಾವುದೇ ಕಾಯ್ದೆಯನ್ನು ಜಾರಿ ಮಾಡಿಲ್ಲ. ಅವರು ನಿಷ್ಪ್ರಯೋಜಕ ಮುಖ್ಯಮಂತ್ರಿ’ ಎಂದು ಬಿಜೆಪಿ ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಟೀಕಿಸಿದರು.

‘ನಾನು ಅಹಿಂದ ಮುಖ್ಯಮಂತ್ರಿ ಎಂದು ಹೇಳಿಕೆ ನೀಡುತ್ತಿರುವ ಅವರು ಹಿಂದುಳಿದ ವರ್ಗಗಳ ಅಭಿವೃದ್ಧಿ ಮತ್ತು ಶಾಸನಬದ್ಧವಾದ ಕಾಯ್ದೆ ರೂಪಿಸಲು ಬದ್ಧತೆಯಿಲ್ಲದೆ ಡೋಂಗಿ ರಾಜಕೀಯ ಮಾಡುತ್ತಿದ್ದಾರೆ. ಹಿಂದುಳಿದ ವರ್ಗದ ಜನರ ಅಭಿಮಾನವನ್ನು ತಮ್ಮ ರಾಜಕೀಯ ಬೆಳೆವಣಿಗೆಗೆ ಉಪಯೋಗ ಮಾಡಿಕೊಳ್ಳುತ್ತಿದ್ದಾರೆ’ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಬಿ.ಎಸ್‌.ಯಡಿಯೂರಪ್ಪ ಅವರ ಅಧಿಕಾರದ ಅವಧಿಯಲ್ಲಿ ಬಡವರ ಕಲ್ಯಾಣಕ್ಕಾಗಿ ಭಾಗ್ಯಲಕ್ಷ್ಮಿ, ಯಶಸ್ವಿನಿ, ಉಚಿತ ಬೈಸಿಕಲ್‌, ಸಾಮಾಜಿಕ ಭದ್ರತೆಗಳ ಯೋಜನೆ, ಮಡಿಲು ಸೇರಿದಂತೆ ಹಲವು ಯೋಜನೆಗಳ ಜಾರಿಗೊಳಿಸಿದರು. ಆದರೆ, ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗದವರಿಗೆ ಮೂಗಿಗೆ ಬೆಣ್ಣೆ ಹಚ್ಚುವ ಕೆಲಸ ಮಾಡಿದ್ದಾರೆ ಎಂದು ಟೀಕಿಸಿದರು.

ADVERTISEMENT

ಏಪ್ರಿಲ್ 3ರಂದು ಸಮಾವೇಶ: ಕಾಗಿನೆಲೆ ಯಲ್ಲಿ ಏಪ್ರಿಲ್‌ 3ರಂದು ಹಿಂದುಳಿದ ವರ್ಗಗಳ ಬೃಹತ್‌ ಸಮಾವೇಶವನ್ನು ಬಿಜೆಪಿ ಹಿಂದುಳಿದ ಮೋರ್ಚಾದಿಂದ ಹಮ್ಮಿಕೊಳ್ಳ ಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯ ಹಾಗೂ ಕೇಂದ್ರದ ವರಿಷ್ಠರು ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷ ಮಣಿಕಂಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೂರೊಂದುಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.