
ಚಾಮರಾಜನಗರ: ಫೆ.28ರಿಂದ ಮಾರ್ಚ್ 17ರವರೆಗೆ ಜಿಲ್ಲೆಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪಾ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 6,285 ಹೊಸ ವಿದ್ಯಾರ್ಥಿಗಳು, 150 ಖಾಸಗಿ ಹಾಗೂ 474 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿದಂತೆ 6,909 ಪರೀಕ್ಷಾರ್ಥಿಗಳು ಹಾಜರಾಗಲಿದ್ದಾರೆ. 17 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುವುದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ (ಹಾಲ್ ಟಿಕೇಟ್) ತೋರಿಸಿ ಗ್ರಾಮಗಳಿಂದ ಪರೀಕ್ಷಾ ಕೇಂದ್ರಗಳಿಗೆ ಕೆ.ಎಸ್.ಆರ್.ಟಿ.ಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಬಸ್‌ಗಳು ಸಂಚರಿಸುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದ ಕೋರಿಕೆಯ ಮೇರೆಗೆ ಬಸ್ ನಿಲುಗಡೆ ಮಾಡಲು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಪರೀಕ್ಷಾ ಕೇಂದ್ರಗಳಿಗೆ ಹಾಗೂ ಗೌಪ್ಯ ವಸ್ತುಗಳನ್ನು ಸಾಗಿಸುವ ವಾಹನಗಳಿಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಪ್ರತಿ ಕೇಂದ್ರಕ್ಕೆ ಆರೋಗ್ಯ ಇಲಾಖೆಯ ಇಬ್ಬರು ಶುಶ್ರೂಷಕರನ್ನು ಪ್ರಥಮ ಚಿಕಿತ್ಸಾ ಕಿಟ್‌ನೊಂದಿಗೆ ನೇಮಿಸಲಾಗಿದೆ.
ಪರೀಕ್ಷಾ ನಡೆಯುವ ಸಮಯ ಹಾಗೂ ಓದುವ ಸಮಯದಲ್ಲಿ ತೊಂದರೆಯಾಗದಂತೆ ನಿರಂತರ ವಿದ್ಯುತ್ ಪೂರೈಸಲು ಸೆಸ್ಕ್ ಅಧಿಕಾರಿಗಳಿಗೆ ನಿದೇಶನ ನೀಡಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲು 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಕೆಂದ್ರಗಳಲ್ಲಿ ಸಿ.ಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಸಂಪೂರ್ಣ ಪರೀಕ್ಷಾ ಪ್ರಕ್ರಿಯೆಯು ಕಣ್ಗಾವಲಿನಲ್ಲಿ ನಡೆಯಲಿದೆ. ಜಿಲ್ಲಾ ಹಂತದಲ್ಲಿ ವೀಕ್ಷಣೆಗೆ ಪ್ರತ್ಯೇಕ ತಂಡ ರಚಿಸಲಾಗಿದೆ.
ಪರೀಕ್ಷಾ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳುಸುದ್ದಿ, ವದಂತಿಗಳಿಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಕಿವಿಗೊಡಬಾರದು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜಿಲ್ಲಾಡಳಿತದಿಂದ ಸಹಾಯವಾಣಿ ತೆರೆಯಲಾಗಿದ್ದು ನುರಿತ ಉಪನ್ಯಾಸಕರನ್ನು ನಿಯೋಜಿಸಲಾಗಿದೆ. ಯಾವುದೇ ಸಂದೇಹ, ಸ್ಪಷ್ಠಿಕರಣಕ್ಕಾಗಿ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaDnM2V3wtb4rOZJ1e2j ಮೂಲಕ ಮಾಹಿತಿ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಶ್ರೀರೂಪ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.