ADVERTISEMENT

5 ಪಿಯು ಕಾಲೇಜು ಸ್ಥಾಪನೆಗೆ ಚಿಂತನೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2013, 8:34 IST
Last Updated 7 ಸೆಪ್ಟೆಂಬರ್ 2013, 8:34 IST

ಚಾಮರಾಜನಗರ: `ಮುಂದಿನ ಶೈಕ್ಷಣಿಕ ವರ್ಷದಿಂದ ತಾಲ್ಲೂಕಿನ ಐದು ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು ಆರಂಭಿಸಲು ಚಿಂತಿಸಲಾಗಿದೆ' ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಹೇಳಿದರು.

ತಾಲ್ಲೂಕಿನ ಬದನಗುಪ್ಪೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಶುಕ್ರವಾರ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ ರೂ 22 ಲಕ್ಷ ವೆಚ್ಚದಡಿ ಹೆಚ್ಚುವರಿ 3 ಕೊಠಡಿ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಬದನಗುಪ್ಪೆ, ನಂಜೇದೇವನಪುರ, ಮಂಗಲ, ಜ್ಯೋತಿಗೌಡನಪುರ ಹಾಗೂ  ಕೋಳಿಪಾಳ್ಯದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಪಿಯು ಕಾಲೇಜು ಆರಂಭಿಸಲು ಚಿಂತಿಸಲಾಗಿದೆ. ಈ ಭಾಗದ ವಿದ್ಯಾರ್ಥಿಗಳ ಸಂಖ್ಯೆ ಅನುಗುಣವಾಗಿ ಹಾಗೂ ಹೆಣ್ಣುಮಕ್ಕಳ ಶೈಕ್ಷಣಿಕ ಅಭಿವೃದ್ಧಿ  ದೃಷ್ಟಿಯಿಂದ ಪಿಯು ಕಾಲೇಜು ಮಂಜೂರು ಮಾಡಬೇಕು ಎಂದು ಈ ಹಿಂದೆಯೇ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿತ್ತು.

ಬದನಗುಪ್ಪೆ- ಕೆಲ್ಲಂಬಳ್ಳಿ ಗ್ರಾಮದ ಬಳಿ 1,360 ಎಕರೆಯನ್ನು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಗುರುತಿಸಲಾಗಿದೆ. ಜಮೀನುಗಳ ಸರ್ವೇ ಕಾರ್ಯ ಪೂರ್ಣಗೊಂಡಿದೆ. ಶೀಘ್ರವೇ, ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಲಿದೆ. ರೈತರೊಂದಿಗೆ ಚರ್ಚಿಸಿ ಜಮೀನಿಗೆ ಸೂಕ್ತ ದರ ನಿಗದಿಪಡಿಸಲಾಗುವುದು ಎಂದು ಹೇಳಿದರು.

ಚಾಮರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 12 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಪ್ರಗತಿಯಲ್ಲಿದೆ. ಈ ಯೋಜನೆ ಪೂರ್ಣಗೊಂಡರೆ ಎಲ್ಲ ಗ್ರಾಮಗಳಲ್ಲಿಯೂ ಅಂತರ್ಜಲ ವೃದ್ಧಿಸಲಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಿ. ನಾಗಶ್ರೀ, ಎಸ್‌ಡಿಎಂಸಿ ಅಧ್ಯಕ್ಷ ಟೈಗರ್ ಮಲ್ಲೆೀಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಬ್ದುಲ್ ಗಫಾರ್, ಮಾಜಿ ಸದಸ್ಯ ಜಿ. ನಂಜುಂಡಸ್ವಾಮಿ, ಮುಖಂಡರಾದ ಮಲ್ಲಪ್ಪ, ಬಿ.ಪಿ. ನಾಗರಾಜಮೂರ್ತಿ, ಬಿ.ಎಸ್. ಶಿವಕುಮಾರ್, ಬಿ.ಆರ್. ಕುಮಾರ್, ಸುರೇಶ್, ಶ್ರೀಕಂಠನಾಯಕ, ಗೋಪಾಲನಾಯಕ, ಎಂ. ಕುಮಾರ್, ಮುಖ್ಯಶಿಕ್ಷಕ ರಂಗಸ್ವಾಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.