ADVERTISEMENT

ಸಚಿವ ಹೆಗಡೆ ವಿರುದ್ಧ ಬೃಹತ್‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ಜನವರಿ 2018, 9:37 IST
Last Updated 28 ಜನವರಿ 2018, 9:37 IST

ಕೊಳ್ಳೇಗಾಲ: ಸಂವಿಧಾನ ಮತ್ತು ದಲಿತ ಜನರ ಕುರಿತು ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಶನಿವಾರ ಅಂಬೇಡ್ಕರ್ ಸ್ಮಾರಕ ಸಂಘದ ನೇತೃತ್ವದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

ನಗರದ ಎಂ.ಜಿ.ಎಸ್.ವಿ ಸಮಾವೇಶಗೊಂಡ ಪ್ರತಿಭಟನಾಕಾರರು ಗುರುಕಾರ್ ವೃತ್ತ, ಡಾ.ರಾಜ್‍ಕುಮಾರ್ ರಸ್ತೆ, ಡಾ.ಬಿ.ಆರ್. ಅಂಬೇಡ್ಕರ್ ರಸ್ತೆ ಮೂಲಕ ತಾಲ್ಲೂಕು ಕಚೇರಿಗೆ ತೆರಳಿ ಉಪವಿಭಾಗಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರಿಗೆ ಮನವಿ ಸಲ್ಲಿಸಿದರು.

ಬಳಿಕ ಮಸೀದಿ ವೃತ್ತ ಹಾಗೂ ಎಡಿಬಿ ವೃತ್ತದಲ್ಲಿ ಅನಂತಕುಮಾರ್ ಹೆಗಡೆ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ಬೆಂಕಿ ಹಚ್ಚಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಅನಂತಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಮಾಡುವುದಕ್ಕೆ ನಾವು ಬಂದಿರುವುದು ಎಂದು ಹೇಳಿಕೆ ನೀಡುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡಲು ಮುಂದಾಗಿದ್ದಾರೆ. ಸಂವಿಧಾನದ ಅಡಿಯಲ್ಲಿಯೇ ಅವರು ಸಂಸದ ಮತ್ತು ಸಚಿವ ಸ್ಥಾನ ಗಳಿಸಿರುವುದು. ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಈ ರೀತಿ ಜನರನ್ನು ಕೆರಳಿಸುವಂತಹ ಹೇಳಿಕೆ ನೀಡಿದ್ದಾರೆ. ಇಂತಹ ದುಷ್ಟ ಸಚಿವರನ್ನು ಸಂಪುದಿಂದ ವಜಾಗೊಳಿಸಬೇಕು. ಅವರನ್ನು ಶಿಕ್ಷೆಗೆ ಗುರಿ ಪಡಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ಹೇಳಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಅಕ್ಮಲ್ ಪಾಷ, ಡಾ.ಅಂಬೇಡ್ಕರ್ ಸ್ಮಾರಕ ಸಂಘದ ಅಧ್ಯಕ್ಷ ನಟರಾಜು, ಉಪಾಧ್ಯಕ್ಷ ನಾಗರಾಜು, ಕಾರ್ಯದರ್ಶಿ ಪುಟ್ಟಬುದ್ಧಿ, ಪದಾಧಿಕಾರಿಗಳಾದ ನಟರಾಜು ಮಾಳಿಗೆ, ಚಂದು, ರಾಜಶೇಖರ್‍ಮೂರ್ತಿ, ಜಯಕರ್ನಾಟಕ ಸಂಘದ ಅಧ್ಯಕ್ಷ ಪ್ರಭುಸ್ವಾಮಿ, ಲಂಚಮುಕ್ತ ವೇದಿಕೆಯ ಅಧ್ಯಕ್ಷ ಮಾಂಬಳ್ಳಿ ಮೋಹನ್, ವಕೀಲರ ಸಂಘದ ಅಧ್ಯಕ್ಷ ಬಸವರಾಜು, ರೈತ ಸಂಘದ ಅಧ್ಯಕ್ಷ ಶೈಲೇಂದ್ರ, ಎಸ್‍ಸಿ, ಎಸ್‍ಟಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ, ಡಿ.ಎಸ್.ಎಸ್ ಜಿಲ್ಲಾ ಸಂಚಾಲಕ ಆಲ್ದೂರು ನಾಗೇಂದ್ರ, ಯುವಶಕ್ತಿ ವೇದಿಕೆಯ ಅಧ್ಯಕ್ಷ ಸಿದ್ದಪ್ಪಾಜಿ, ವಿವಿಧ ಸಂಘಟನೆಗಳ ಸದಸ್ಯರು, ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.