ADVERTISEMENT

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; 56 ವರ್ಷದ ವ್ಯಕ್ತಿ ಬಂಧನ

ಕೊಳ್ಳೇಗಾಲ ತಾಲ್ಲೂಕಿನಲ್ಲಿ ನಡೆದ ಘಟನೆ; ಸಂತ್ರಸ್ತೆ ಐದು ತಿಂಗಳ ಗರ್ಭಿಣಿ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2022, 13:03 IST
Last Updated 28 ಅಕ್ಟೋಬರ್ 2022, 13:03 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೊಳ್ಳೇಗಾಲ: ಎಸ್ಸೆಸ್ಸೆಲ್ಸಿ ಓದುತ್ತಿರುವ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗುವಂತೆ ಮಾಡಿದ 56 ವರ್ಷ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಆರೋಪಿಯು ಪರಿಚಯಸ್ಥ ಬಾಲಕಿಯ ಬಾಯಿಗೆ ಬಟ್ಟೆ ಕಟ್ಟಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಹಲವು ತಿಂಗಳುಗಳ ಬಳಿಕ ಬಾಲಕಿ ಗುರುವಾರ ಮನೆಯವರಿಗೆ ವಿಷಯ ತಿಳಿಸಿದ್ದಳು. ಪೋಷಕರು ಗ್ರಾಮವೊಂದರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪರೀಕ್ಷೆ ಮಾಡಿಸಿದ್ದರು. ಬಾಲಕಿ ಐದು ತಿಂಗಳ ಗರ್ಭಿಣಿಯಾಗಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಆದರೆ, ವೈದ್ಯರು ಈ ವಿಷಯವನ್ನು ಪೋಷಕರಿಗೆ ತಿಳಿಸದೆ, ಆಕೆ ಓದುವ ಮುಖ್ಯ ಶಿಕ್ಷಕರಿಗೆ ಮಾಹಿತಿ ನೀಡಿದರು. ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ಇಲಾಖೆಯ ಅಧಿಕಾರಿಗಳು ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಗಮನಕ್ಕೆ ಈ ವಿಷಯ ತಂದರು.

ADVERTISEMENT

ವಿಷಯ ತಿಳಿದ ತಕ್ಷಣ ತಾಲ್ಲೂಕು ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ನಾಗೇಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗಂಗಾಧರ್, ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿಯ ಶಿವಮ್ಮ, ರಾಜೇಶ್ವರಿ ಸೇರಿದಂತೆ ಇತರರು ಗ್ರಾಮಕ್ಕೆ ಧಾವಿಸಿ ಬಾಲಕಿಯನ್ನು ನಗರದ ಸರ್ಕಾರಿ ಉಪವಿಭಾಗ ಆಸ್ಪತ್ರೆಗೆ ಕರೆ ತಂದು ಮತ್ತೊಮ್ಮೆ ಪರೀಕ್ಷೆ ನಡೆಸಿ ಕುಟುಂಬದವರಿಂದ ಮಾಹಿತಿ ಪಡೆದರು. ಆ ಬಳಿಕ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದರು.

ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು, ಆರೋಪಿಯನ್ನು ಶುಕ್ರವಾರ ಬಂಧಿಸಿದ್ದಾರೆ.

ಬಾಲಕಿಯನ್ನು ಜಿಲ್ಲಾ ಮಕ್ಕಳ ಸಾಂತ್ವನ ಕೇಂದ್ರಕ್ಕೆ ಕರೆದುದೊಯ್ಯಲಾಗಿದೆ ಎಂದು ಗ್ರಾಮಾಂತರ ಠಾಣೆ ಸಬ್‌ ಇನ್‌ಸ್ಪೆಕ್ಟರ್‌ ಮಂಜುನಾಥ್ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.