ADVERTISEMENT

ವಿದ್ಯಾರ್ಥಿಗಳ ಕಷ್ಟಕ್ಕೆ ಸ್ಪಂದಿಸಿ: ಸರ್ಕಾರಕ್ಕೆ ಎಬಿವಿಪಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಜನವರಿ 2021, 11:50 IST
Last Updated 19 ಜನವರಿ 2021, 11:50 IST
ಎಬಿವಿಪಿ ಕಾರ್ಯಕರ್ತರು ಮಂಗಳವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು
ಎಬಿವಿಪಿ ಕಾರ್ಯಕರ್ತರು ಮಂಗಳವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು   

ಚಾಮರಾಜನಗರ: ರಾಜ್ಯದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಸರ್ಕಾರ ತಕ್ಷಣವೇ ಸ್ಪಂದಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಜಿಲ್ಲಾಡಳಿತ ಭವನದ ದ್ವಾರದ ಬಳಿ ಸೇರಿದ ಪ್ರತಿಭಟನಕಾರರು, ಅಲ್ಲಿಂದ ಜಿಲ್ಲಾಡಳಿತ ಭವನದವರೆಗೂ ಮೆರವಣಿಗೆಯಲ್ಲಿ ತೆರಳಿ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನೂ ಕೂಗಿದರು.

‘ಕೋವಿಡ್‌ನಿಂದಾಗಿ ಎಲ್ಲ ಶೈಕ್ಷಣಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಇತ್ತೀಚೆಗೆ ಶಾಲಾ ಕಾಲೇಜುಗಳು ಆರಂಭಗೊಂಡಿದ್ದು, ಶೈಕ್ಷಣಿಕ ಚಟುವಟಿಕೆಗಳು ಸಹಜಸ್ಥಿತಿಗೆ ಬರುತ್ತಿವೆ. ವಿದ್ಯಾರ್ಥಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ರಾಜ್ಯ ಸರ್ಕಾರ ಅವುಗಳನ್ನು ಬಗೆಹರಿಸಬೇಕು’ ಎಂದು ಪ್ರತಿಭಟನನಿರತರು ಒತ್ತಾಯಿಸಿದರು.

ADVERTISEMENT

‘ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನೀಡುವ ವಿದ್ಯಾರ್ಥಿ ವೇತನಗಳು ಕೋವಿಡ್‌ ಕಾರಣದಿಂದ ತಲುಪದೆ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ರಾಜ್ಯ ಸರ್ಕಾರ ತಕ್ಷಣವೇ ಅರ್ಜಿ ಹಾಕಿರುವ ಎಲ್ಲರಿಗೂ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಬೇಕು’ ಎಂದು ಆಗ್ರಹಿಸಿದರು.

‘ಹಲವು ತಿಂಗಳ ನಂತರ ಶಾಲಾ ಕಾಲೇಜುಗಳು ತೆರೆದಿವೆ. ವಿದ್ಯಾರ್ಥಿಗಳ ಹಾಜರಾತಿ ದಿನೇ ದಿನೇ ಹೆಚ್ಚುತ್ತಿದೆ. ಆದರೆ, ಇನ್ನೂ ಪೂರ್ಣ ಪ್ರಮಾಣದಲ್ಲಿ ಹಾಸ್ಟೆಲ್‌ಗಳನ್ನು ತೆರೆದಿಲ್ಲ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಹಾಸ್ಟೆಲ್‌ ವ್ಯವಸ್ಥೆ ಇದೆ. ಉಳಿದ ತರಗತಿಯ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ. ಸರ್ಕಾರ ಎಲ್ಲರಿಗೂ ಹಾಸ್ಟೆಲ್‌ ಸೌಲಭ್ಯ ಕಲ್ಪಿಸಬೇಕು’ ಎಂದು ಪ್ರತಿಭಟನನಿರತ ವಿದ್ಯಾರ್ಥಿಗಳು ಒತ್ತಾಯಿಸಿದರು.

‘ಅನೇಕ ಕಾಲೇಜುಗಳಲ್ಲಿ ಕೆಲವು ವಿಷಯಗಳಿಗೆ ಕಾಯಂ ಉಪನ್ಯಾಸಕರ ಕೊರತೆ ಇದೆ. ಬೋಧಕರು ಇಲ್ಲದಿರುವುದರಿಂದ ವಿದ್ಯಾರ್ಥಿಗಳಿಗೆ ಪಾಠ ಆಗುತ್ತಿಲ್ಲ. ಕಾಯಂ ಇಲ್ಲದಿದ್ದರೂ ಅತಿಥಿ ಉಪನ್ಯಾಸಕರಿದ್ದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಸರ್ಕಾರವು ಅತಿಥಿ ‌ಉಪನ್ಯಾಸಕರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

ಎಬಿವಿಪಿಯ ರಾಜ್ಯ ಸಹ ಕಾರ್ಯದರ್ಶಿ ಶ್ರೀರಾಮ, ನಗರ ಕಾರ್ಯದರ್ಶಿ ಶೃತನ್, ಪದಾಧಿಕಾರಿಗಳಾದ ಶ್ರೀನಿಧಿ ಸುಕನ್ಯ, ರಾಮು, ತೇಜಸ್ವಿನಿ ಸೇರಿದಂತೆ ಹಲವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.