ADVERTISEMENT

ಹೆಚ್ಚಿನ ಬೆಲೆಗೆ ಮಾರಾಟ: ಪರವಾನಗಿ ಅಮಾನತಿಗೆ ಸೂಚನೆ

ಬಿತ್ತನೆ ಬೀಜ, ರಸಗೊಬ್ಬರ ಗುಣಮುಟ್ಟ ಖಾತರಿ ಪಡಿಸಿಕೊಳ್ಳಲು ಕೃಷಿ ಸಚಿವರ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 15 ಜೂನ್ 2021, 16:54 IST
Last Updated 15 ಜೂನ್ 2021, 16:54 IST
ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು
ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು   

ಚಾಮರಾಜನಗರ: ಬಿತ್ತನೆಬೀಜ, ರಸಗೊಬ್ಬರಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ಪರವಾನಗಿಯನ್ನು ಅಮಾನತು ಮಾಡುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಮಂಗಳವಾರ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ರಸಗೊಬ್ಬರ, ಬಿತ್ತನೆ ಬೀಜಗಳ ಲಭ್ಯತೆ, ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಕೈಗೊಳ್ಳಲಾಗಿರುವ ಪೂರ್ವ ಸಿದ್ಧತೆ ಸಂಬಂಧ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು,ರಸಗೊಬ್ಬರ, ಬಿತ್ತನೆ ಬೀಜವನ್ನು ಯಾವ ದರದಲ್ಲಿ ಮಾರಾಟವಾಗುತ್ತಿದೆ ಎಂಬ ಬಗ್ಗೆ ಅಧಿಕಾರಿಗಳು ಪರಿಶೀಲಿಸಬೇಕು. ನಿಗದಿತ ದರಕ್ಕಿಂತ ಹೆಚ್ಚು ಬೆಲೆಗೆ ಮಾರಾಟ ಮಾಡುವುದು ಕಂಡು ಬಂದಲ್ಲಿ ಪರವಾನಗಿಯನ್ನು ಅಮಾನತು ಮಾಡಿ ಪ್ರಕರಣ ದಾಖಲಿಸಬೇಕು. ಮುಂದೆ ಪರವಾನಗಿಯನ್ನು ನವೀಕರಿಸಬಾರದು’ ಎಂದರು.

ನಕಲಿ ಹಾಗೂ ಗುಣಮಟ್ಟ ಕಾಯ್ದುಕೊಳ್ಳದ ಬಿತ್ತನೆಬೀಜ, ರಸಗೊಬ್ಬರ ಮಾರಾಟಗಾರರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಅವರು ತಿಳಿಸಿದರು.

ADVERTISEMENT

ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಮಾತನಾಡಿ, ‘ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ ರಸಗೊಬ್ಬರಗಳು ಲಭ್ಯವಾಗಬೇಕು. ಸಹಾಯಧನ ಸೇರಿದಂತೆ ಇಲಾಖೆಯ ಸೌಲಭ್ಯಗಳು ದೊರಕಬೇಕು’ ಎಂದರು.

ಶಾಸಕ ಎನ್.ಮಹೇಶ್ ಅವರು ಮಾತನಾಡಿ, ‘ಬಿತ್ತನೆ ಬೀಜ ರಸಗೊಬ್ಬರಗಳ ಬೇಡಿಕೆ ಹಾಗೂ ಪೂರೈಕೆ ನಡುವೆ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಮಾರಾಟಗಾರರು ಇವುಗಳ ದಾಸ್ತಾನು ವಿವರವನ್ನು ಪ್ರದರ್ಶಿಸಬೇಕು’ ಎಂದರು.

ಮತ್ತೊಬ್ಬ ಶಾಸಕ ಸಿ.ಎಸ್.ನಿರಂಜನ ಕುಮಾರ್ ಅವರು ಮಾತನಾಡಿ, ‘ಸಾಕಷ್ಟು ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಬೇಕು. ರೈತರಿಗೆ ಅಗತ್ಯವಿದ್ದಾಗ ಅವುಗಳು ಲಭ್ಯವಿರಬೇಕು’ ಎಂದರು.

ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಮಾತನಾಡಿ, ‘ಫಸಲ್ ಭೀಮಾ ಯೋಜನೆ ಮಾಹಿತಿ ನೀಡಲು ಕ್ರಮ ತೆಗೆದುಕೊಳ್ಳಲಾಗಿದೆ. ಈಗಾಗಲೇ ಸಭೆ ನಡೆಸಿ ಸೂಚನೆ ನೀಡಲಾಗಿದೆ. ಪ್ರಚಾರ ವಾಹನಗಳು, ರೈತ ಸಂಪರ್ಕ ಕೇಂದ್ರದ ಮೂಲಕ ಹೆಚ್ಚಿನ ಪ್ರಚಾರಕ್ಕೆ ಅಗತ್ಯ ಕ್ರಮ ವಹಿಸಲಾಗಿದೆ’ ಎಂದರು.

ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪಿ.ಬಿ.ಶಾಂತಮೂರ್ತಿ ಕುಲಗಾಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೊಯರ್ ನಾರಾಯಣ ರಾವ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ ರಾಜ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಜಂಟಿ ಕೃಷಿ ನಿರ್ದೇಶಕಿ ಎಚ್‌.ಟಿ.ಚಂದ್ರಕಲಾ, ಕೃಷಿ ಉಪನಿರ್ದೇಶಕ ಮುತ್ತುರಾಜ್, ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.