
ಹನೂರು: ‘ಎಲ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೂ ಸ್ವಂತ ಆಂಬುಲೆನ್ಸ್ ನೀಡುವ ಕುರಿತು ಈಗಾಗಲೇ ಚಿಂತನೆ ನಡೆಸಲಾಗಿದೆ’ ಎಂದು ಶಾಸಕ ಎಂ. ಆರ್ ಮಂಜುನಾಥ್ ತಿಳಿಸಿದರು.
ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ರಾಮಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ನೂತನ ಆಂಬುಲೆನ್ಸ್ ವಾಹನವನ್ನು ತಾಲ್ಲೂಕು ವೈದ್ಯಾಧಿಕಾರಿಗಳಿಗೆ ಹಸ್ತಾಂತರ ಮಾಡಿ ಮಾತನಾಡಿದರು.
‘ಭೌಗೋಳಿಕವಾಗಿ ಹೆಚ್ಚು ವಿಸ್ತೀರ್ಣ ಹೊಂದಿರುವ ಹನೂರು ಕ್ಷೇತ್ರಕ್ಕೆ ಆಂಬುಲೆನ್ಸ್‌ಗಳ ಸೇವೆ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಗಳಿಗೂ ಸಹ ಆಂಬುಲೆನ್ಸ್ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದರು.
‘ಇದರಿಂದ ಸಾರ್ವಜನಿಕರಿಗೆ ಒಳ್ಳೆಯ ಸೇವೆ ಸಿಗಲಿ, ತುರ್ತು ಸಂದರ್ಭಗಳಲ್ಲಿ ಅಗತ್ಯವಿರುವ ವ್ಯಕ್ತಿಗಳಿಗೆ ಸದುಪಯೋಗವಾಗಲಿ’ ಎಂದರು.
ತಾಲೂಕು ವೈದ್ಯಾಧಿಕಾರಿ ಡಾ.ಪ್ರಕಾಶ್ ಮಾತನಾಡಿ, ‘ಆಂಬುಲೆನ್ಸ್ ಕೊರತೆ ಬಗ್ಗೆ ನಾವು ಹಿರಿಯ ಅಧಿಕಾರಿಗಳು ಹಾಗೂ ಶಾಸಕರ ಗಮನಕ್ಕೆ ತಂದಿದ್ದೆವು. ಹಂತ ಹಂತವಾಗಿ ಆಂಬುಲೆನ್ಸ್ ಕೊರತೆ ನೀಗಿಸಲು ಶಾಸಕರು, ಹಿರಿಯ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ’ ಎಂದರು.
ತಹಶಿಲ್ದಾರ್ ಚೈತ್ರಾ, ತಾಲ್ಲೂಕು ಪಂಚಾಯಿತಿ ಇ.ಒ ಉಮೇಶ್, ರಾಮಾಪುರ ವೈದ್ಯಧಿಕಾರಿ ಮನು, ಆಶಾ ಕಾರ್ಯಕರ್ತೆಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.