ಚಾಮರಾಜನಗರ: ಮಾಸಿಕ ಕನಿಷ್ಠ ₹10,000 ಗೌರವ ಧನ ನೀಡಬೇಕು, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ನೀಡಿದಂತೆ ₹ 1,000 ಪ್ರೋತ್ಸಾಹ ಧನ ಹೆಚ್ಚಳ ಮಾಡಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನೂರಾರು ಆಶಾ ಕಾರ್ಯಕರ್ತೆಯರು ಸೋಮವಾರದಿಂದ ಅಹೋರಾತ್ರಿ ಧರಣಿ ಆರಂಭಿಸಿದರು.
ಇದಕ್ಕೂ ಮುನ್ನ ಚಾಮರಾಜೇಶ್ವರ ದೇವಸ್ಥಾನದ ಆವರಣದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಆಶಾ ಕಾರ್ಯಕರ್ತೆಯರು, ಕೈಯಲ್ಲಿ ಬೇಡಿಕೆಗಳ ಫಲಕಗಳನ್ನು ಹಿಡಿದು ಸಾಗಿ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮಾರ್ಗವಾಗಿ ಜಿಲ್ಲಾಡಳಿತ ಭವನದ ಆವರಣ ತಲುಪಿದರು. ಸರ್ಕಾರಗಳ ತಾರತಮ್ಯ ನೀತಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಜನವರಿಯಲ್ಲಿ 42 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‌ನಲ್ಲಿ ಸತತ 4 ದಿನಗಳ ಹೋರಾಟ ನಡೆಸಿದ ಸಂದರ್ಭ ಕೇಂದ್ರದ ಭಾಗಶಃ ಪ್ರೋತ್ಸಾಹಧನದೊಂದಿಗೆ ರಾಜ್ಯದ ಗೌರವಧನ ಸೇರಿಸಿ ಮಾಸಿಕ ₹10,000 ನೀಡುವುದಾಗಿ ಸರ್ಕಾರ ಭರವಸೆ ನೀಡಿತ್ತು. 7 ತಿಂಗಳು ಕಳೆದರೂ ಬೇಡಿಕೆ ಈಡೇರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ತಾಯಿ ಮರಣ ಪ್ರಮಾಣ ತಗ್ಗಿಸುವಲ್ಲಿ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸದಿರುವುದು ಬೇಸರದ ವಿಚಾರ. ಕಾರ್ಯಕರ್ತೆಯರನ್ನು ಕಾರ್ಮಿಕರು ಎಂದು ಪರಿಗಣಿಸಿ ಕನಿಷ್ಠ ವೇತನ, ಪಿಎಫ್, ಇಎಸ್‌ಐ, ಗ್ರಾಚ್ಯುಟಿ ಸೌಲಭ್ಯ ನೀಡಬೇಕು, ಉದ್ಯೋಗ ಭದ್ರತೆ ಒದಗಿಸಬೇಕು ಎಂದರು.
ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡುಗಂಟು ನೀಡಬೇಕು. ನಗರ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುವ ಕಾರ್ಯಕರ್ತೆಯರಿಗೆ ಮಾಸಿಕ ಗೌರವ ಧನವನ್ನು ₹ 2 ಸಾವಿರ ಹೆಚ್ಚಿಸಬೇಕು. ಜನಸಂಖ್ಯೆಯ ಮಿತಿ ಹೆಸರಿನಲ್ಲಿ ಕೆಲಸದಿಂದ ತೆಗೆಯಬಾರದು. ಅವೈಜ್ಞಾನಿಕ ಮೌಲ್ಯಮಾಪನ ಪ್ರಕ್ರಿಯೆ ಕೈಬಿಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯ ವೇಳೆ ಆಶಾ ಯೂನಿಯನ್ ರಾಜ್ಯ ಉಪಾಧ್ಯಕ್ಷೆ ಉಮಾದೇವಿ, ಸಂಘದ ಜಿಲ್ಲಾಧ್ಯಕ್ಷೆ ಕವಿತಾ, ಮುಖಂಡರಾದ ಭಾಗ್ಯಾ, ಅಶ್ವಿನಿ, ಜಯಲಕ್ಷ್ಮಿ, ಶಶಿಕಲಾ ಸೇರಿದಂತೆ ನೂರಾರು ಆಶಾ ಕಾರ್ತಕರ್ತೆಯರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.