ಆಶಾ ಕಾರ್ಯಕರ್ತೆಯರು
– ಪ್ರಜಾವಾಣಿ ಕಡತ ಚಿತ್ರ
ಚಾಮರಾಜನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಹಿಸಿ ಆ.12 ರಿಂದ 14ರವರೆಗೆ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದು ಆಶಾ ಕಾರ್ಯಕರ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಮೇಟಿ ಮನವಿ ಮಾಡಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 12ರಂದು ಜಿಲ್ಲಾಡಳಿತ ಭವನದ ಮುಂಭಾಗ ಅಹೋರಾತ್ರಿ ಧರಣಿ ಆರಂಭವಾಗಲಿದ್ದು 800ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ. ರಾಜ್ಯದಾದ್ಯಂತ ಧರಣಿ ನಡೆಯಲಿದೆ ಎಂದರು.
ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹ 10,000 ಗೌರವಧನವನ್ನು ಏಪ್ರಿಲ್‌ನಿಂದ ಅನ್ವಯವಾಗುವಂತೆ ನೀಡಬೇಕು, ಬಜೆಟ್‌ನಲ್ಲಿ ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರಿಗೆ ಹೆಚ್ಚಿಸಲಾಗಿರುವು ₹ 1000 ಪ್ರೋತ್ಸಾಹಧನವನ್ನು ಆಶಾ ಕಾರ್ಯಕರ್ತೆಯರಿಗೂ ಕೊಡಬೇಕು, ಜನಸಂಖ್ಯೆಯ ಮಿತಿ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು.
ಅವೈಜ್ಞಾನಿಕ ಮೌಲ್ಯಮಾಪನ ಪ್ರಕ್ರಿಯೆ ಕೈಬಿಡಬೇಕು, ಆಶಾ ಸುಗಮಕಾರರನ್ನು ಮುಂದುವರಿಸಬೇಕು, ನಿವೃತ್ತರಾದವರಿಗೆ ಇಡಿಗಂಟು ನೀಡಬೇಕು, 2 ಸಾವಿರ ಗೌರವ ಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಆಶಾ ಯೂನಿಯನ್ ರಾಜ್ಯ ಉಪಾಧ್ಯಕ್ಷೆ ಉಮಾದೇವಿ, ಸಂಘದ ಜಿಲ್ಲಾಧ್ಯಕ್ಷೆ ಕವಿತಾ, ಮುಖಂಡರಾದ ಭಾಗ್ಯ, ಅಶ್ವಿನಿ, ಜಯಲಕ್ಷ್ಮೀ, ಶಶಿಕಲಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.