
ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ): ‘ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿಯನ್ನು ಮತ್ತೆ ಆರಂಭಿಸುವ ವಿಚಾರದಲ್ಲಿ ಅರಣ್ಯಾಧಿಕಾರಿಗಳು ರೈತರು ಮತ್ತು ಗ್ರಾಮಸ್ಥರಿಗೆ ಹಣದ ಆಮಿಷ ಒಡ್ಡಿ ಭಿನ್ನಾಭಿಪ್ರಾಯ ಮೂಡಿಸಲು ಮುಂದಾಗಿದ್ದಾರೆ’ ಎಂದು ರೈತ ಮುಖಂಡ ಹೊನ್ನೂರು ಪ್ರಕಾಶ್ ಆರೋಪಿಸಿದರು.
‘ಸಫಾರಿ ಪುನರಾರಂಭ ವಿರೋಧಿಸಿ ಸಾಮೂಹಿಕ ನಾಯಕತ್ವದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ಬಂಡೀಪುರದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ಬಳಿ ಪ್ರತಿಭಟನೆಗೆ ಮುಂದಾಗಿದ್ದೆವು. ಆಗ ಅರಣ್ಯಾಧಿಕಾರಿಗಳು ಸ್ಥಳೀಯರಿಗೆ ಕುಮ್ಮಕ್ಕು ನೀಡಿ ರೈತರ ಮೇಲೆ ಮುಗಿಬೀಳುವಂತೆ ಕಾರ್ಯತಂತ್ರ ರೂಪಿಸಿದ್ದರು. ಈ ಘಟನೆ ಕುರಿತು ತನಿಖೆ ನಡೆಸಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.
‘ಸಫಾರಿ ಮರು ಆರಂಭ ನಿರ್ಧಾರವನ್ನು ವಿರೋಧಿಸಿ ಸ್ಥಳೀಯ ಗ್ರಾಮ ಪಂಚಾಯಿತಿಗಳಿಗೆ ಹಕ್ಕೊತ್ತಾಯ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಸ್ಥಳೀಯ ಮಟ್ಟದಲ್ಲಿ ಸಫಾರಿ ವಿರುದ್ಧ ಪ್ರತಿಭಟನೆ ನಡೆಸಲಾಗುವುದು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.