ADVERTISEMENT

ಗ್ರಾಮಸ್ಥರಿಗೆ ತುರ್ತು ಆರೋಗ್ಯ ಸೇವೆ ಲಭ್ಯ: ಶಾಸಕ ಸಿ.ಪುಟ್ಟರಂಗಶೆಟ್ಟಿ

ದೊಡ್ಡಮೋಳೆ ಗ್ರಾಮದಲ್ಲಿ ಆಯುಷ್ಮಾನ್ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟಿಸಿದ ಶಾಸಕ ಪುಟ್ಟರಂಗಶೆಟ್ಟಿ 

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2025, 2:14 IST
Last Updated 14 ನವೆಂಬರ್ 2025, 2:14 IST
ಚಾಮರಾಜನಗರ ತಾಲ್ಲೂಕಿನ ದೊಡ್ಡಮೋಳೆ ಗ್ರಾಮದಲ್ಲಿ ಗುರುವಾರ ಆಯುಷ್ಮಾನ್ ಆರೋಗ್ಯ ಕೇಂದ್ರದ ಕಟ್ಟಡವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು
ಚಾಮರಾಜನಗರ ತಾಲ್ಲೂಕಿನ ದೊಡ್ಡಮೋಳೆ ಗ್ರಾಮದಲ್ಲಿ ಗುರುವಾರ ಆಯುಷ್ಮಾನ್ ಆರೋಗ್ಯ ಕೇಂದ್ರದ ಕಟ್ಟಡವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು   

ಚಾಮರಾಜನಗರ: ತಾಲ್ಲೂಕಿನ ದೊಡ್ಡಮೋಳೆ ಗ್ರಾಮದಲ್ಲಿ ಗುರುವಾರ ಜನಸಾಮಾನ್ಯರಿಗೆ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ನಿರ್ಮಿಸಲಾಗಿರುವ ಆಯುಷ್ಮಾನ್ ಆರೋಗ್ಯ ಕೇಂದ್ರದ ಕಟ್ಟಡವನ್ನು ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು.  

ಬಳಿಕ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ದೊಡ್ಡಮೋಳೆ ಗ್ರಾಮ ಪಂಚಾಯಿತಿ ಕಚೇರಿ ಹಿಂಭಾಗದಲ್ಲಿ ₹ 35 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಆರೋಗ್ಯ ಕೇಂದ್ರಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಶಾಸಕರು, ದೊಡ್ಡಮೋಳೆ ಗ್ರಾಮ ದೊಡ್ಡ ಗ್ರಾಮ ಪಂಚಾಯಿತಿಯಾಗಿದ್ದು ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಅಗತ್ಯ ಜನಸಂಖ್ಯೆ ಹೊಂದಿದೆ. 2008ರಲ್ಲಿಯೇ ಇಲ್ಲಿ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣವಾಗಬೇಕಿತ್ತು, ಜಾಗದ ಅಲಭ್ಯತೆಯಿಂದ ಕಾಮಗಾರಿ ವಿಳಂಬವಾಗಿ 15 ವರ್ಷಗಳ ಬಳಿಕ ನೂತನ ಆಯುಷ್ಮಾನ್ ಆರೋಗ್ಯ ಕೇಂದ್ರ ತಲೆಎತ್ತಿದೆ. ಗ್ರಾಮದ ಜನರು ಆರೋಗ್ಯ ಕೇಂದ್ರದ ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.

ADVERTISEMENT

ಆರೋಗ್ಯ ಕೇಂದ್ರವು ಹರದನಹಳ್ಳಿ, ಚಿಕ್ಕಮೋಳೆ, ಬ್ಯಾಡಮೂಡ್ಲು, ಚಂದುಕಟ್ಟೆ ಮೋಳೆ, ಡೊಳ್ಳಿಪುರ, ಸೇರಿದಂತೆ ಸುತ್ತಲಿನ ಗ್ರಾಮಗಳ ಜನರಿಗೆ ಉಚಿತ ಆರೋಗ್ಯ ಸೇವೆ ಪಡೆಯಲು ಅನುಕೂಲವಾಗಲಿದೆ ಎಂದರು.

ಮುಂದೆ ಆಯುಷ್ಮಾನ್ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಪ್ರಯತ್ನಿಸಲಾಗುವುದು. ಆರೋಗ್ಯ ಕೇಂದ್ರದಲ್ಲಿ ಒಬ್ಬರು ಸಮುದಾಯ ಆರೋಗ್ಯ ಅಧಿಕಾರಿ ಹಾಗೂ ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆ ಒದಗಿಸಲಿದ್ದಾರೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.    

ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ದೊಡ್ಡಮೋಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿರ್ಮಲಾ ರಂಗನಾಥ್, ಸದಸ್ಯರಾದ ಭಾಗ್ಯಮ್ಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ, ತಾ‌ಲ್ಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ, ಹರದನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗುರುರಾಜ್ ಸಕಲಾತಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಪುಟ್ಟಸ್ವಾಮಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದೊರೆಸ್ವಾಮಿ, ಗುತ್ತಿಗೆದಾರರಾದ ಸಮೀವುಲ್ಲಾ ಕಾರ್ಯಕ್ರಮದಲ್ಲಿ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.