ಚಾಮರಾಜನಗರ: ನಗರದ ವಿವಿಧೆಡೆ ಶುಕ್ರವಾರ ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಂ ಅವರ 117ನೇ ಜನ್ಮ ದಿನಚಾರಣೆ ಆಚರಿಸಲಾಯಿತು.
ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಬು ಜಗಜೀವನರಾಂ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಕೇಂದ್ರ ಪರಿಹಾರ ಸಮಿತಿಯ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ‘ಡಾ.ಬಾಬು ಜಗಜೀವನರಾಂ ಅವರು ಎಲ್ಲ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ ಮಹಾನ್ ನಾಯಕ. ಸಮಾಜದಲ್ಲಿನ ಅಸ್ಪೃಶ್ಯತೆ ಹೋಗಲಾಡಿಸುವಲ್ಲಿ ಬಾಬೂಜಿ ಕೊಡುಗೆ ಅಪಾರ. ಜಾತಿ ವ್ಯವಸ್ಥೆಯನ್ನು ತೊಡೆದುಹಾಕಿ ಸಮಾನತೆ ತರುವುದು ಅವರ ಉದ್ದೇಶವಾಗಿತ್ತು. ದೇಶದಲ್ಲಿ ಎಲ್ಲರಿಗೂ ಆಹಾರ ದೊರೆಯದೇ ಇದ್ದಾಗ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಹಸಿರು ಕ್ರಾಂತಿ ರೂಪಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಿದರು. ಆಹಾರ ಉತ್ಪಾದನೆ ಹೆಚ್ಚಿಸಿದರು’ ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅರಕಲವಾಡಿ ನಾಗೇಂದ್ರ ಮಾತನಾಡಿ, ‘ಯಾವುದೇ ಸೌಲಭ್ಯಗಳು ಇಲ್ಲದ ಸಂದರ್ಭದಲ್ಲಿ ಶ್ರಮಪಟ್ಟು ಓದಿ, ಅವಕಾಶ ಪಡೆದು ಸಾಧನೆ ಮಾಡುವ ಮೂಲಕ ದೇಶ, ಸಮಾಜಕ್ಕೆ ತಮ್ಮದೇ ಕೊಡುಗೆಯನ್ನು ಡಾ.ಬಾಬು ಜಗಜೀವ ನರಾಂ ಅವರು ನೀಡಿದ್ದಾರೆ. ಅಂತಹ ಮಹಾನ್ ನಾಯಕನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ’ ಎಂದರು.
ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದು ಶೆಟ್ಟಿ ಮಾತನಾಡಿದರು.
ಚೂಡಾ ಮಾಜಿ ಅಧ್ಯಕ್ಷ ಕುಲಗಾಣ ಶಾಂತಮೂರ್ತಿ, ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಮೂಡಳ್ಳಿ ಮೂರ್ತಿ, ಕಾರ್ಯದರ್ಶಿ ಸಿ.ಚನ್ನಬಸವಯ್ಯ, ಮುಖಂಡರಾದ ಅರಕಲವಾಡಿ ಮಹದೇವಯ್ಯ, ವೇಣುಗೋಪಾಲ, ಹೇಮಂತ್, ರಾಜು, ನಗರ ಘಟಕ ಎಸ್‌ಸಿ ಮೋರ್ಚಾದ ಅಧ್ಯಕ್ಷ ಪರಶಿವಮೂರ್ತಿ, ಕಾರ್ಯದರ್ಶಿ ರಾಚಪ್ಪ, ಮುಖಂಡರಾದ ಶಿವಕುಮಾರ್, ಲಿಂಗರಾಜು ಹಾಜರಿದ್ದರು.
ಕಾಂಗ್ರೆಸ್ ಕಚೇರಿ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಬೂಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.
ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ‘ಡಾ.ಬಾಬು ಜಗಜೀವನ ರಾಂ ಅವರು ವಿವಿಧ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿದರು. ಕೃಷಿ ಸಚಿವರಾಗಿದ್ದಾಗ ಕೃಷಿಗೆ ಹೆಚ್ಚು ಒತ್ತು ನೀಡಿ, ದೇಶದ ಆಹಾರ ಸಮಸ್ಯೆಯನ್ನು ನೀಗಿಸಿದರು’ ಎಂದು ಸ್ಮರಿಸಿದರು.
ಕಾಡಾ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಮಾತನಾಡಿ, ‘ಬಾಬು ಜಗಜೀವನ ರಾಂ ಅವರು ಕಾರ್ಮಿಕ ಸಚಿವರಾಗಿದ್ದಾಗ ಅನೇಕ ಜನಪರ ಯೋಜನೆ ಅನುಷ್ಠಾನ ಮಾಡಿದ್ದರು. ಅವರಿಗೆ ಪ್ರಧಾನಿಯಾಗುವ ಎಲ್ಲ ಅರ್ಹತೆ ಇತ್ತು. ಆದರೂ ಅವರು ತಮಗೆ ಸಿಕ್ಕ ಉಪಪ್ರದಾನಿ, ಸಚಿವ ಖಾತೆಯನ್ನು ಸಮರ್ಥವಾಗಿ ನಿರ್ವಹಿಸಿದರು’ ಎಂದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕ ಮಹದೇವ, ಆರ್.ಮಹದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಎಸ್.ಗುರುಸ್ವಾಮಿ, ಮಹಮದ್ ಅಸ್ಗರ್, ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎ. ಮಹದೆವಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟಜಾತಿ ವಿಭಾಗದ ಜಿಲ್ಲಾಧ್ಯಕ್ಷ ನಲ್ಲೂರ್ ಸೋಮೇಶ್ವರ್, ಕಾಗಲವಾಡಿ ಚಂದ್ರು, ವಕೀಲ ಅರುಣ್ ಕುಮಾರ್, ಎಪಿಎಂಸಿ ಅಧ್ಯಕ್ಷ ಮಹದೇವಸ್ವಾಮಿ, ರಾಮಸಮುದ್ರ ಶಿವಮೂರ್ತಿ, ಬಸವನಪುರ ರಾಜಶೇಖರ್ ಇತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.