ಚಾಮರಾಜನಗರ: ತಾಲ್ಲೂಕಿನ ಬಗರ್‌ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯು ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆಯಲ್ಲಿ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆಯಿತು.
ಬಗರ್‌ಹುಕುಂ ಅರ್ಜಿಗಳನ್ನು ಪರಿಶೀಲಿಸಿ ಮಾತನಾಡಿದ ಶಾಸಕರು, ‘ಕ್ಷೇತ್ರದಲ್ಲಿ ಬಗರ್‌ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಗೆ 7,626 ಅರ್ಜಿಗಳು ಬಂದಿದ್ದು 1,802 ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ. ಕಳೆದ ಸಭೆಯಲ್ಲಿ 8 ಅರ್ಜಿಗಳಿಗೆ ಮಂಜೂರಾತಿ ಸಿಕ್ಕಿದ್ದು, ಇಂದಿನ ಸಭೆಯಲ್ಲಿ 13 ಅರ್ಜಿಗಳಿಗೆ ಮಂಜೂರಾತಿ ದೊರೆತಿದೆ. ಉಳಿದ ಅರ್ಜಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಲಾಗುವುದು. ಆಯ್ಕೆಯಾದ ಫಲಾನುಭವಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸಾಗುವಳಿ ಚೀಟಿ ವಿತರಣೆ ಮಾಡಿಸಲಾಗುವುದು’ ಎಂದರು.
‘ಜಾನುವಾರು ಸಂಖ್ಯೆಯ ಆಧರಿಸಿ ಹೆಚ್ಚುವರಿ ಗೋಮಾಳ ಲಭ್ಯವಿರುವ ಬಗ್ಗೆ ಪಶುಸಂಗೋಪನಾ ಇಲಾಖೆ ದೃಢಪಡಿಸಿದರೆ ಗೋಮಾಳ ಭೂಮಿ ಮಂಜೂರಾತಿ ಅರ್ಜಿಗಳನ್ನು ಪುರಸ್ಕರಿಸಲಾಗುವುದು’ ಎಂದರು.
ಸಭೆಯಲ್ಲಿ ಅಕ್ರಮ ಸಕ್ರಮ ಸಮಿತಿಯ ಕಾರ್ಯದರ್ಶಿ ಹಾಗೂ ತಹಶೀಲ್ದಾರ್ ಗಿರಿಜಾ, ಸದಸ್ಯರಾದ ಮಹಾಲಿಂಗು, ರವಿಕುಮಾರ್, ಮಲ್ಲಿಕಾ ಚನ್ನೇಗೌಡ, ಕಂದಾಯ ನಿರೀಕ್ಷಕ ರಾಜಶೇಖರ್, ಷಡಕ್ಷರಿ, ಗುರುಸಿದ್ದಪ್ಪ, ಗ್ರಾಮ ಲೆಕ್ಕಾಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.