ಆನೆ ಮುಂದೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ದಾಳಿಗೆ ಸಿಲುಕಿದ್ದ ಬಸವರಾಜ್
ಗುಂಡ್ಲುಪೇಟೆ (ಚಾಮರಾಜನಗರ): ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಯ ಮುಂದೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಆನೆ ದಾಳಿಯಿಂದ ಗಾಯಗೊಂಡು ಪರಾರಿಯಾಗಿದ್ದ ಆರೋಪಿಯನ್ನು ಸೋಮವಾರ ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ₹ 25,000 ದಂಡ ವಿಧಿಸಿ ತಪ್ಪೊಪ್ಪಿಗೆ ಪತ್ರ ಪಡೆದಿದ್ದಾರೆ.
ಕಾಡಾನೆ ಜೊತೆಗೆ ಉದ್ಧಟತನ ಪ್ರದರ್ಶಿಸಿದ್ದ ಆರೋಪಿ ಆರ್.ಬಸವರಾಜ್‌ನನ್ನು ನಂಜನಗೂಡಿನ ನಿವಾಸದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ತಿಳಿವಳಿಕೆ ಕೊರತೆಯಿಂದ ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಬಂಡೀಪುರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.
‘ಬಂಡೀಪುರ ಬಂಕಾಪುರ ದೇವಸ್ಥಾನಕ್ಕೆ ತೆರಳಿ ಮರಳುವಾಗ ಹೆದ್ದಾರಿಯಲ್ಲಿ ಆನೆ ಕಂಡು ಮೋಜು ಮಸ್ತಿಗಾಗಿ ಸೆಲ್ಫಿ ತೆಗೆದುಕೊಳ್ಳಲು ಮುಂದಾದಾಗ ಆನೆ ದಾಳಿಗೆ ಸಿಲುಕಿ ಬದುಕಿದ್ದೇ ಹೆಚ್ಚು ಅನಿಸಿದೆ. ಇಂತಹ ದುಸ್ಸಾಹಸವನ್ನು ಯಾರೂ ಮಾಡಬೇಡಿ, ಅರಣ್ಯದೊಳಗೆ ಹಾದುಹೋಗಿರುವ ಹೆದ್ದಾರಿಗಳಲ್ಲಿ ವಾಹನಗಳನ್ನು ನಿಲ್ಲಿಸಬೇಡಿ, ಶೌಚಕ್ಕೆ ಹೋಗುವುದು, ಪ್ರಾಣಿಗಳಿಗೆ ಆಹಾರ ನೀಡುವುದನ್ನು ಮಾಡಬೇಡಿ’ ಎಂದು ಆರೋಪಿ ಬಸವರಾಜ್ ವಿಡಿಯೊದಲ್ಲಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಗಸ್ತು ವಾಹನ ಸಂಚರಿಸುವ ಮಾದರಿಯಲ್ಲಿ ಅರಣ್ಯದೊಳಗೆ ಹಾದುಹೋಗಿರುವ ರಸ್ತೆಯಗಳಲ್ಲಿ ಅರಣ್ಯ ಇಲಾಖೆಯ ಗಸ್ತು ವಾಹನಗಳನ್ನು ನಿಯೋಜಿಸಿ ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ವನ್ಯಜೀವಿಗಳಿಗೆ ಆಹಾರ ನೀಡದಂತೆ, ವಾಹನಗಳಿಂದ ಇಳಿಯದಂತೆ, ರಸ್ತೆಯಲ್ಲಿ ವೇಗವಾಗಿ, ಅಜಾಗರೂಕತೆಯಿಂದ ವಾಹನ ಚಲಾಯಿಸದಂತೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.