ADVERTISEMENT

ವಿದ್ಯುತ್ ದರ ಹೆಚ್ಚಳ ಖಂಡಿಸಿ ಚಾಮರಾಜನಗರದಲ್ಲಿ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಜೂನ್ 2023, 11:00 IST
Last Updated 5 ಜೂನ್ 2023, 11:00 IST
   

ಚಾಮರಾಜನಗರ: ವಿದ್ಯುತ್ ದರ ಹೆಚ್ಚಳ ಖಂಡಿಸಿ ಮತ್ತು ಬಿಜೆಪಿ ಅಧಿಕಾರದಲ್ಲಿದ್ದಾಗ ಜಾರಿಗೊಳಿಸಿರುವ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯನ್ನು ಮುಂದುವರಿಸುವಂತೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. 

ನಗರದ ಮೇಘಾ ಕಾಂಪ್ಲೆಕ್ಸ್‌ನಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿ ಬಳಿ ಸೇರಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಅಲ್ಲಿಂದ ವೀರಭದ್ರೇಶ್ವರ ದೇವಸ್ಥಾನ, ರಥ ಬೀದಿಯ ಮೂಲಕ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿ, ಅಲ್ಲಿ ಕೆಲ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡ ಎಸ್.ಬಾಲರಾಜು ಮಾತನಾಡಿ, ‘ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಮಾಡುತ್ತಿರುವ ಮೋಸ, ವಂಚನೆ ವಿರುದ್ದ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ಏಪ್ರಿಲ್‌ 1ರಿಂದ ಅನ್ವಯವಾಗುವಂತೆ ವಿದ್ಯುತ್ ದರ ಹೆಚ್ಚಳ ಮಾಡಿರುವುದರಿಂದ ಸಾರ್ವಜನಕರಿಗೆ ಹೊರೆಯಾಗಿದೆ. ವಿದ್ಯುತ್ ದರ ಹೆಚ್ಚಳ ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್‌ ಈಗ ಷರತ್ತುಗಳನ್ನು ಒಡ್ಡುತ್ತಿರುವುದು ಅಕ್ಷಮ್ಯ. ಚುನಾವಣೆ ಸಂದರ್ಭದಲ್ಲಿ ಕೊಟ್ಟಿರುವ ಭರವಸೆಯಂತೆ ಷರತ್ತುಗಳನ್ನು ಹಾಕದೆ, ಐದು ಗ್ಯಾರಂಟಿ ಯೋಜನೆಗಳನ್ನು ಯಥಾವತ್ತಾಗಿ ಜನತೆಗೆ ತಲುಪಿಸಬೇಕು. ಗೃಹ ಜ್ಯೋತಿ ಯೋಜನೆಯಲ್ಲಿ 200 ಯುನಿಟ್ ಬಳಕೆಗೆ ಪೂರ್ಣ ಪ್ರಮಾಣ ಅವಕಾಶ ಕೊಡಬೇಕು’ ಎಂದು ಆಗ್ರಹಿಸಿದರು. 

‘ನಿರುದ್ಯೋಗ ಭತ್ಯೆಯನ್ನು ಎಲ್ಲರಿಗೂ ಕೊಡುವುದಾಗಿ ಕಾಂಗ್ರೆಸ್‌ ಹೇಳಿತ್ತು. ಈಗ  2022–23ನೇ ಸಾಲಿನ ಪದವೀಧರರಿಗೆ ಮಾತ್ರ ನಿರುದ್ಯೋಗ ಭತ್ಯೆ ನೀಡುವುದಾಗಿ ಘೋಷಣೆ ಮಾಡಿರುವುದು ಸರಿಯಲ್ಲ. ಐದು ವರ್ಷಗಳಿಂದ ನೌಕರಿ ಸಿಗದೆ ಇರುವ ನಿರುದ್ಯೋಗಿಗಳಿಗೆ 10 ವರ್ಷಗಳ ಕಾಲ ನಿರುದ್ಯೋಗ ಭತ್ಯೆ ಕೊಡಬೇಕು. ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ತನಕ ಬಿಜೆಪಿ ಹೋರಾಟ ಮಾಡುತ್ತದೆ’ ಎಂದು ಎಚ್ಚರಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ನಾರಾಯಣಪ್ರಸಾದ್ ಮಾತನಾಡಿ, ‘ಕಾಂಗ್ರೆಸ್ ಸರ್ಕಾರ ವಿದ್ಯುತ್ ಶುಲ್ಕ ಹೆಚ್ಚಳ ಮಾಡಿರುವ ವಿರುದ್ದ ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸಲಾಗಿದೆ. ಗೋವುಗಳನ್ನು ಸಂರಕ್ಷಣೆ ಮಾಡಬೇಕಾದ ಪಶುಸಂಗೋಪನಾ ಸಚಿವರೇ ಪಶುಗಳನ್ನು ಯಾಕೆ ಕಡಿಯಬಾರದು ಎಂದು ಹೇಳಿರುವುದು ವಿಷಾದನೀಯ. ಹಸುಗಳನ್ನು ಏಕೆ ಕಡಿಯಬಾರದು ಎಂಬ ಮನಸ್ಥಿತಿಯುಳ್ಳ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ನಿರಂತರ ಹೋರಾಟ ಮಾಡುತ್ತದೆ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ನಾಗಶ್ರೀಪ್ರತಾಪ್, ಕೆರೆಹಳ್ಳಿ ಮಹದೇವಸ್ವಾಮಿ, ಉಪಾಧ್ಯಕ್ಷ ಪಿ.ವೃಷಬೇಂದ್ರಪ್ಪ, ಮುಖಂಡರಾದ ಎಂ.ರಾಮಚಂದ್ರ, ನಿಜಗುಣರಾಜು ಡಾ.ಎ.ಆರ್.ಬಾಬು, ಎಪಿಎಂಸಿ ಅಧ್ಯಕ್ಷ ಮನೋಜ್ ಪಟೇಲ್, ಗ್ರಾಮಾಂತರ ಮಂಡಲ ಅಧ್ಯಕ್ಷ ಬಸವಣ್ಣ, ನಗರ‌ ಮಂಡಲ ಅಧ್ಯಕ್ಷ ರಾಜು, ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಪ್ರಣಯ್, ಉಪಾಧ್ಯಕ್ಷ ಶಿವುವಿರಾಟ್, ಪಣ್ಯದಹುಂಡಿ ಸತೀಶ್,  ಬುಲೆಟ್ ಚಂದ್ರು, ಕೆ.ವೀರಭದ್ರಸ್ವಾಮಿ ಇತರರು ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.