ADVERTISEMENT

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಎಸ್‌ಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2021, 17:25 IST
Last Updated 10 ಜೂನ್ 2021, 17:25 IST
ಬಿಎಸ್‌ಪಿ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಬೆಲೆ ಏರಿಕೆಯ ವಿರುದ್ಧ ಪ್ರತಿಭಟನೆ ನಡೆಸಿದರು
ಬಿಎಸ್‌ಪಿ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಬೆಲೆ ಏರಿಕೆಯ ವಿರುದ್ಧ ಪ್ರತಿಭಟನೆ ನಡೆಸಿದರು   

ಚಾಮರಾಜನಗರ: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ಕೆ.ಸಿ.ರಂಗಯ್ಯ ಸ್ಮಾರಕದ ಬಳಿ ಸೇರಿದ ಪ್ರತಿಭಟನಾಕಾರರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ ಮಾತನಾಡಿ, ‘ಕೇಂದ್ರ ಹಾಗೂ ರಾಜ್ಯ ಸರ್ಕಾರವು ಅವೈಜ್ಞಾನಿಕವಾಗಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಶೇ 300ಕ್ಕೂ ಹೆಚ್ಚು ತೆರಿಗೆ ವಿಧಿಸಿವೆ. ಇದರಿಂದ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಲೀಟರ್‌ಗೆ ₹100 ದಾಟಿದೆ. ಜಗತ್ತಿನ ಯಾವ ದೇಶದಲ್ಲೂ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಇಷ್ಟೊಂದು ತೆರಿಗೆ ವಿಧಿಸಿ ತನ್ನ ದೇಶದ ಪ್ರಜೆಗಳನ್ನು ಶೋಷಣೆ ಮಾಡುವ ಸರ್ಕಾರವಿಲ್ಲ’ ಎಂದು ದೂರಿದರು.

ADVERTISEMENT

‘ಕೋವಿಡ್-19 ಪರಿಸ್ಥಿyನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆ.ರೋಗಿಗಳಿಗೆ ಹಾಸಿಗೆ, ಆಮ್ಲಜನಕ, ವೆಂಟಿಲೇಟರ್, ಔಷಧೋಪಚಾರಗಳನ್ನು ಸಕಾಲಕ್ಕೆ ಒದಗಿಸದೆ ಲಕ್ಷಾಂತರ ಜನ ಬಲಿಯಾಗಿದ್ದಾರೆ. ಹಾಗೆಯೇ ಲಾಕ್‌ಡೌನ್‌ನಿಂದಾಗಿ ಕೋಟ್ಯಂತರ ಜನ ಉದ್ಯೋಗ ಕಳೆದುಕೊಂಡು ಬಡತನ ಹಾಗೂ ಹಸಿವಿನಿಂದ ತತ್ತರಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಬೆಲೆ ಏರಿಕೆ, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿದೆ’ ಎಂದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎನ್.ನಾಗಯ್ಯ ಅವರು ಮಾತನಾಡಿ, ‘ಅಡುಗೆ ಎಣ್ಣೆ ಲೀಟರ್‌ಗೆ ₹200 ದಾಟಿದೆ. ಅಡುಗೆ ಸಿಲಿಂಡರ್ ಬೆಲೆ ₹1,000 ಸಮೀಪಿಸುತ್ತಿದೆ. ಇವುಗಳ ಜೊತೆಗೆ ಆಹಾರ ಧಾನ್ಯಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನ ಮುಟ್ಟಿದೆ. ಇಂತಹ ಸಂದರ್ಭದಲ್ಲಿ ಜನಸಾಮಾನ್ಯರ ನೆರವಿಗೆ ನಿಲ್ಲಬೇಕಾದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮನಬಂದಂತೆ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ತೆರಿಗೆ ವಿಧಿಸಿ ಜನರನ್ನು ಮತ್ತಷ್ಟು ಶೋಷಣೆ ಮಾಡುತ್ತಿವೆ. ಆದ್ದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವೈಜ್ಞಾನಿಕ ತೆರಿಗೆ ಏರಿಕೆಯನ್ನು ಕೈ ಬಿಡಬೇಕು. ಹಾಗೆಯೇ ಪೆಟ್ರೋಲ್ ಹಾಗೂ ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ಸೇರಿಸಬೇಕು’ ಎಂದು ಆಗ್ರಹಿಸಿದರು.

ಬಿಎಸ್‌ಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ಪ್ರಧಾನ ಕಾರ್ಯದರ್ಶಿ ಬ.ಮ.ಕೃಷ್ಣಮೂರ್ತಿ, ತಾಲ್ಲೂಕು ಅಧ್ಯಕ್ಷ ಅಮಚವಾಡಿ ಪ್ರಕಾಶ್, ಸಂಯೋಜಕ ಎಸ್.ಪಿ.ಮಹೇಶ್, ಉಪಾಧ್ಯಕ್ಷ ರಾಜು, ಪದಾಧಿಕಾರಿಗಳಾದ ಗಗನ್ ಚಂದ್ರ, ರಾಜಶೇಖರ್, ಪುಷ್ಪಾ, ಗ್ರಾಮ ಪಂಚಾಯಿತಿ ಸದಸ್ಯ ಬಾಲರಾಜ್, ಬಿಸಲವಾಡಿ ಲಿಂಗರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.