ADVERTISEMENT

ಚಾಮರಾಜನಗರ | ಕಾವೇರಿ ಹೋರಾಟ: ಹೆದ್ದಾರಿ ತಡೆದು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2023, 16:54 IST
Last Updated 16 ನವೆಂಬರ್ 2023, 16:54 IST
ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು
ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು   

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು 67ನೇ ದಿನವಾದ ಗುರುವಾರ ನಗರದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. 

ಚಾಮರಾಜೇಶ್ಚರ ಉದ್ಯಾನದಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶಾಲು ಬೀಸಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು‌ ನಿರ್ವಹಣಾ ಪ್ರಾಧಿಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. 

ಸೇನಾ ಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ‘ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಸರ್ಕಾರಗಳು, ಕಾವೇರಿ ನೀರು‌ ನಿರ್ವಹಣಾ ಪ್ರಾಧಿಕಾರ ಮೌನವಾಗಿದೆ’ ಎಂದು ದೂರಿದರು. 

ADVERTISEMENT

‘ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವುದನ್ನು ತಕ್ಷಣವೇ ನಿಲ್ಲಿಸಬೇಕು, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು. ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ನಿಲ್ಲಿಸುವವರೆಗೂ ಹೋರಾಟ ಮಾಡಲಾಗುವುದು’ ಎಂದರು.

ಶಾ.ಮುರಳಿ, ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ ಗೋಪಾಲ್, ಗು.ಪುರುಷೋತ್ತಮ್, ರಾಚಪ್ಪ, ಆಲೂರು ನಾಗೇಂದ್ರ, ತಾಂಡವಮೂರ್ತಿ, ಚಾ.ಸಿ.ಸಿದ್ದರಾಜು ಇದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.