ADVERTISEMENT

ವಿದ್ಯುತ್ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2020, 14:32 IST
Last Updated 5 ಅಕ್ಟೋಬರ್ 2020, 14:32 IST
ವಿದ್ಯುತ್‌ ಕ್ಷೇತ್ರವನ್ನು ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿ ಸೆಸ್ಕ್‌ ಅಧಿಕಾರಿಗಳು ಹಾಗೂ ನೌಕರರು ಸೋಮವಾರ ಪ್ರತಿಭಟನೆ ನಡೆಸಿದರು
ವಿದ್ಯುತ್‌ ಕ್ಷೇತ್ರವನ್ನು ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿ ಸೆಸ್ಕ್‌ ಅಧಿಕಾರಿಗಳು ಹಾಗೂ ನೌಕರರು ಸೋಮವಾರ ಪ್ರತಿಭಟನೆ ನಡೆಸಿದರು   

ಚಾಮರಾಜನಗರ: ಕೇಂದ್ರ ಸರ್ಕಾರ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಮುಂದಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಆಶ್ರಯದಲ್ಲಿ ನೌಕರರು, ಅಧಿಕಾರಿಗಳು ಕಪ್ಪುಪಟ್ಟಿ ಧರಿಸಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಸೆಸ್ಕ್‌ ಕಚೇರಿಯ ಮುಂಭಾಗ ಜಮಾಯಿಸಿ ಅಧಿಕಾರಿಗಳು ಹಾಗೂ ನೌಕರರು, ‘ವಿದ್ಯುತ್ ಕಾಯ್ದೆಗೆ ತಿದ್ದುಪಡಿ ಬೇಡ, ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣ ಬೇಡ, ಕಾರ್ಮಿಕರ ಒಗ್ಗಟ್ಟು ಚಿರಾಯುವಾಗಲಿ’ ಎಂಬ ಘೋಷಣೆಗಳನ್ನು ಕೂಗಿದರು.

ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಎನ್.ಮಹೇಶ್ ಅವರು ಮಾತನಾಡಿ, ‘ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಿದರೆ ಗ್ರಾಹಕರಿಗೆ, ನೌಕರರ ವರ್ಗದವರಿಗೆ ಮಾರಕವಾಗಲಿದ್ದು, ಇದು ಕಾರ್ಮಿಕ ವಿರೋಧಿ ನೀತಿಯಾಗಿದೆ. ರೈತರು, ಜನಸಾಮಾನ್ಯರಿಗೆ ಹೊರೆಯಾಗಲಿದೆ. ಕೃಷಿ ಉದ್ದೇಶದಕ್ಕೆ ರೈತರಿಗೆ ನೀಡುತ್ತಿರುವ ಉಚಿತ ವಿದ್ಯುತ್‌ಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಬಡವರಿಗೆ ನೀಡುತ್ತಿರುವ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಉಚಿತ ವಿದ್ಯುತ್‌ಗೆ ಕಡಿವಾಣ ಬೀಳುವ ಸಾಧ್ಯತೆ’ ಎಂದು ಕಳವಳ ವ್ಯಕ್ತಪಡಿಸಿದರು.

ADVERTISEMENT

‘ವಿದ್ಯುತ್ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿರುವ 60 ಸಾವಿರಕ್ಕೂ ಹೆಚ್ಚು ನೌಕರರು ಹಾಗೂ ಈ ಸಂಸ್ಥೆ ಕಟ್ಟಿ ಬೆಳಸಿದ 40 ಸಾವಿರ ಪಿಂಚಣಿದಾರರಿಗೆ ತೊಂದರೆಯಾಗಲಿದೆ. ಆದ್ದರಿಂದ ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ವಿದ್ಯುತ್ ಖಾಸಗೀಕರಣ ಮಾಡಬಾರದು’ ಆಗ್ರಹಿಸಿದರು.

ಸ್ಥಳೀಯ ಸಂಸ್ಥೆ ಅಧ್ಯಕ್ಷ ಮುರಳಿಕೃಷ್ಣಸ್ವಾಮಿ, ಕಾರ್ಯದರ್ಶಿ ಸಿದ್ದರಾಜಪ್ಪ ಖಜಾಂಚಿ ಎಸ್.ರಮೇಶ್, ಉಪಾಧ್ಯಕ್ಷ ಮಂಜುನಾಥ್, ಲೆಕ್ಕಾಧಿಕಾರಿ ಭಾಸ್ಕರ್, ಎಸ್‌ಸಿ. ಎಸ್‌ಟಿ ಕಲ್ಯಾಣ ಸಂಸ್ಥೆ ಅಧ್ಯಕ್ಷ ಸಿದ್ದರಾಜು, ಸಹಾಯಕ ಎಂಜಿನಿಯರ್ ರೇಖಾಮಣಿ, ನೌಕರರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.