
ಚಾಮರಾಜನಗರ: ಬೇಸಿಗೆ ಸಂದರ್ಭ ಜನ–ಜಾನುವಾರುಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ‘ಬೇಸಿಗೆಯ ನಿರ್ವಹಣೆ ಸಂಬಂಧ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ ಕುಡಿಯುವ ನೀರು ಪೂರೈಸಲು ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.
ಅಗತ್ಯಬಿದ್ದರೆ ಖಾಸಗಿ ಬೋರ್‌ವೆಲ್ ಹಾಗೂ ಟ್ಯಾಂಕರ್‌ಗಳ ಮೂಲಕ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಬೇಕು. ಜಾನುವಾರುಗಳಿಗೆ ಕುಡಿಯುವ ನೀರಿಗೆ ಕೊರತೆ ಉಂಟಾದಂತೆ ಕಟ್ಟೆಗಳನ್ನು ಸ್ವಚ್ಛಗೊಳಿಸಿ ನೀರು ತುಂಬಿಸಬೇಕು. ಮೇವಿನ ಕೊರತೆ ಉಂಟಾಗದಂತೆ ಸಾಕಷ್ಟು ಮೇವು ಲಭ್ಯವಿರಿಸಬೇಕು ಎಂದು ತಾಕೀತು ಮಾಡಿದರು.
ಪಟ್ಟಣ ಹಾಗೂ ನಗರಗಳಲ್ಲೂ ಕುಡಿಯುವ ನೀರು ಸರಬರಾಜಿಗೆ ತೊಂದರೆಯಾಗದಂತೆ ಮುಂಜಾಗ್ರತೆ ವಹಿಸಬೇಕು, ಲಭ್ಯವಿರುವ ನೀರಿನ ಮೂಲಗಳಿಂದ ನೀರೆತ್ತಿ ಸರಬರಾಜು ಮಾಡಬೇಕು. ಈಗಾಗಲೇ ನಗರದ ಹಲವು ವಾರ್ಡ್‍ಗಳಲ್ಲಿ ನೀರಿನ ಸಮಸ್ಯೆ ಇರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬಂದಿದ್ದು, ಅಧಿಕಾರಿಗಳು ತುರ್ತು ಕ್ರಮವಹಿಸಬೇಕು. ಬೇಸಿಗೆಯಲ್ಲಿ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ನಗರ, ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ದುರಸ್ತಿ ಅಗತ್ಯವಿದ್ದರೆ ಶೀಘ್ರ ಸರಿಪಡಿಸಿ ಉಪಯೋಗ ಆಗುವಂತೆ ಚಾಲನೆಗೊಳಿಸಬೇಕು. ಸ್ವಚ್ಛತೆ ಕೆಲಸಗಳು ಪರಿಣಾಮಕಾರಿಯಾಗಿ ಆಗಬೇಕು. ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
ತೋಟಗಾರಿಕೆ, ಕೃಷಿ ಬೆಳೆ ಚಟುವಟಿಕೆಗಳ ನಿರ್ವಹಣೆಗೆ ಯಾವುದೇ ಸಮಸ್ಯೆಯಾಗಬಾರದು. ಬೇಸಿಗೆ ವೇಳೆ ಕಾಡ್ಗಿಚ್ಚು, ಆಕಸ್ಮಿಕ ಬೆಂಕಿ ಅನಾಹುತಗಳು ಸಂಭವಿಸದಂತೆ ನಿರಂತರ ನಿಗಾ ವಹಿಸಬೇಕು. ಅರಣ್ಯ ಇಲಾಖೆ, ಅಗ್ನಿಶಾಮಕ ಅಧಿಕಾರಿಗಳು ಕಟ್ಟೆಚ್ಚೆರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪಾ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ ಗ್ರಾಮಗಳ ಬಗ್ಗೆ ಹೆಚ್ಚು ಆದ್ಯತೆ ನೀಡಿ, ಸಮಸ್ಯೆ ಕಾಣಿಸಿಕೊಂಡ ಕೂಡಲೇ ಪರ್ಯಾಯವಾಗಿ ನೀರು ಪೂರೈಸಲು ಗಮನ ಹರಿಸಬೇಕು ಎಂದು ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶ್ರುತಿ ಡಿ.ಸಿ, ತಹಶೀಲ್ದಾರ್‌ಗಳಾದ ಬಸವರಾಜು, ಚೈತ್ರಾ, ನಯನಾ, ತನ್ಮಯ್, ಜಿಲ್ಲಾ ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕಿ ಎಂ.ವಿ.ಸುಧಾ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಇಮ್ಯಾನುವಲ್ ಸಂತೋಷ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಮಂಜುನಾಥ್, ಇತರ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.