
ಚಾಮರಾಜನಗರ: ಫೆ.28ರಿಂದ ಮಾರ್ಚ್17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪಾ ಸೂಚನೆ ನೀಡಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ವೀಡಿಯೊ ಕಾನ್ಪರೆನ್ಸ್ ಸಭಾಂಗಣದಲ್ಲಿ ಬುಧವಾರ ದ್ವಿತೀಯ ಪಿಯುಸಿ ಪರೀಕ್ಷೆ ಸಂಬಂಧಿಸಿದಂತೆ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 6,285 ವಿದ್ಯಾರ್ಥಿಗಳು ಹೊಸದಾಗಿ ಪರೀಕ್ಷೆ ಬರೆಯುತ್ತಿದ್ದಾರೆ, 150 ಖಾಸಗಿ ವಿದ್ಯಾರ್ಥಿಗಳು, 474 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿ 6,909 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಜಿಲ್ಲೆಯಲ್ಲಿ 17 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಮುಕ್ತ, ಸುವ್ಯವಸ್ಥಿತ ಹಾಗೂ ಪಾರದರ್ಶಕವಾಗಿ ನಡೆಯಲು ಅಧಿಕಾರಿಗಳು ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕು. ಅಗತ್ಯಕ್ಕೆ ತಕ್ಕಂತೆ ಮಹಿಳಾ ಸಿಬ್ಬಂದಿ ಸಹ ನಿಯೋಜಿಸಬೇಕು. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳು ಅತಿಕ್ರಮ ಪ್ರವೇಶ ಮಾಡದಂತೆ ಎಚ್ಚರಿಕೆ ವಹಿಸಬೇಕು, ಕೇಂದ್ರಗಳ ಬಳಿ ಅಕ್ರಮಗಳಿಗೆ ಪ್ರಚೋದಿಸುವವರ ವಿರುದ್ದ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಆರೋಗ್ಯ ಇಲಾಖೆಯು ಪ್ರತಿ ಪರೀಕ್ಷಾ ಕೇಂದ್ರಕ್ಕೆ ಇಬ್ಬರು ಶುಶ್ರೂಷಕರನ್ನು ನಿಯೋಜಿಸಿ ಪ್ರಥಮ ಚಿಕಿತ್ಸೆ ಕಿಟ್‌ಗಳನ್ನು ಒದಗಿಸಬೇಕು, ಪರೀಕ್ಷಾ ದಿನ ವಿದ್ಯಾರ್ಥಿಗಳು ಹಾಗೂ ಪರೀಕ್ಷೆಯ ಕಾರ್ಯಗಳಿಗೆ ತೊಂದರೆಯಾಗದಂತೆ ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ಪೂರೈಸಬೇಕು. ಕುಡಿಯುವ ನೀರು ಸಹಿತ ಅಗತ್ಯ ಮೂಲಸೌಕರ್ಯಗಳು ಸಮರ್ಪಕವಾಗಿರಬೇಕು ಎಂದರು.
ಪರೀಕ್ಷಾ ದಿನ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬರಲು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ವಿದ್ಯಾರ್ಥಿಗಳು ಪರೀಕ್ಷೆಯ ಪ್ರವೇಶಪತ್ರ ತೋರಿಸಿ ಉಚಿತವಾಗಿ ಸಂಚರಿಸಬಹುದು. ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಅನುಕೂಲವಾಗುವಂತೆ ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಿಂದ ಹೆಚ್ಚಿನ ಬಸ್ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರಗಳಿರುವ ಮಾರ್ಗಗಳಲ್ಲಿ ವಿದ್ಯಾರ್ಥಿಗಳಿಗೆ ನೆರವಾಗುವ ದೃಷ್ಟಿಯಿಂದ ಕಡ್ಡಾಯವಾಗಿ ಬಸ್ ನಿಲುಗಡೆಗೊಳಿಸಬೇಕು ಎಂದು ಜಿಲ್ಲಾಧಿಕಾರಿಯವರು ಸೂಚಿಸಿದರು.
ಪರೀಕ್ಷೆ ಹಾಗೂ ಪ್ರಶ್ನೆ ಪತ್ರಿಕೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಗೊಂದಲ, ಸಂದೇಹ, ಸುಳ್ಳು ವದಂತಿ ಹಬ್ಬಿಸುವವರ ವಿರುದ್ದ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ. ಸಾರ್ವಜನಿಕರು, ಪೋಷಕರು, ವಿದ್ಯಾರ್ಥಿಗಳು ಸುಳ್ಳು ಮಾಹಿತಿಗಳಿಗೆ ಕಿವಿಗೊಡಬಾರದು. ಈ ಬಗ್ಗೆ ಅಧಿಕಾರಿಗಳು ಜಾಗೃತಿ ಮೂಡಿಸಬೇಕು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಪುಟ್ಟಗೌರಮ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಸುರೇಶ್, ಖಜಾನೆ ಇಲಾಖೆ ಉಪನಿರ್ದೇಶಕಿ ಕೆ.ಎಸ್.ರಾಜೇಶ್ವರಿ, ತಾಲ್ಲೂಕುಗಳ ತಹಶೀಲ್ದಾರ್, ವಿವಿಧ ಇಲಾಖೆಗಳ ಅಧಿಕಾರಿಗಳು, ಪ್ರಾಂಶುಪಾಲರು ಸಭೆಯಲ್ಲಿ ಇದ್ದರು.
ಸಭೆಗೂ ಮೊದಲು ಜಿಲ್ಲಾಡಳಿತ ಭವನದ ಹಳೆ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ಜಂಟಿ ಅಧ್ಯಕ್ಷತೆಯಲ್ಲಿ ಪ್ರಾಂಶುಪಾಲರೊಂದಿಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಗತಿ ಸುಧಾರಣಾ ಸಂಬಂಧ ಸಭೆ ನಡೆಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.