ADVERTISEMENT

ಚಾಮರಾಜನಗರ: ಜಿಲ್ಲಾ ದಸರಾಗೆ ವಿಧ್ಯುಕ್ತ ಚಾಲನೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2022, 5:43 IST
Last Updated 27 ಸೆಪ್ಟೆಂಬರ್ 2022, 5:43 IST
   

ಚಾಮರಾಜನಗರ: ಮೈಸೂರು ದಸರಾದ ಭಾಗವಾಗಿ ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ನಾಲ್ಕು ದಿನಗಳ ಜಿಲ್ಲಾ ದಸರಾ ಮಹೋತ್ಸವಕ್ಕೆ ಚಾಮರಾಜೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ವಿಧ್ಯುಕ್ತವಾಗಿ ಮಂಗಳವಾರ ಚಾಲನೆ ನೀಡಲಾಯಿತು.

ಶಾಸಕ ಸಿ‌.ಪುಟ್ಟರಂಗಶೆಟ್ಟಿ, ನಗರಸಭಾ ಅಧ್ಯಕ್ಷೆ ಸಿ.ಎಂ.ಆಶಾ, ಜಿಲ್ಲಾಧಿಕಾರಿ‌ ಚಾರುಲತಾ ಸೋಮಲ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ನಗರಸಭಾ ಸದಸ್ಯರು ಹಾಗೂ ಇತರ ಅಧಿಕಾರಿಗಳ ಸಮ್ಮುಖದಲ್ಲಿ ಚಾಮರಾಜೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಮಂಗಳಾರತಿ ನೆರವೇರಿಸಲಾಯಿತು.

ಬಳಿಕ, ಚಾಮರಾಜೇಶ್ವರ ಸ್ವಾಮಿಯ ಉತ್ಸವ ‌ಮೂರ್ತಿಯ ಎದುರು ದೀಪ ಬೆಳಗಿದ ಗಣ್ಯರು ಸಾಂಪ್ರದಾಯಿಕವಾಗಿ ದಸರಾ ಉತ್ಸವಕ್ಕೆ ಚಾಲನೆ ನೀಡಿದರು.

ADVERTISEMENT

ನಾಲ್ಕು ದಿನಗಳ‌ಕಾಲ ನಡೆಯುವ ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಫಲ ಪುಷ್ಪ ಪ್ರದರ್ಶನ, ರೈತ ದಸರಾ, ಮಹಿಳಾ ದಸರಾ ಕಲಾ ತಂಡಗಳ ಮೆರವಣಿಗೆ, ಮ್ಯಾರಾಥಾನ್ ಸೇರಿದಂತೆ ಹಲವು ವೈವಿಧ್ಯಮಯ ಕಾರ್ಯಕ್ರಮಗಳು‌ ನಡೆಯಲಿವೆ.

ಇಂದು ಸಂಜೆ 5.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ದಸರಾದ ವೇದಿಕೆ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.