ಸುರಕ್ಷತಾ ಕ್ರಮ: 15 ದಿನಗಳೊಳಗೆ ವರದಿ ಸಲ್ಲಿಸಿ | ‘ಕೂಡು ರಸ್ತೆಗಳಲ್ಲಿ ಎಚ್ಚರಿಕೆ ಫಲಕ ಅಳವಡಿಸಿ’ | ‘ವಾಹನಗಳ ಪಾರ್ಕಿಂಗ್‌ಗೆ ಸ್ಥಳ ನಿಗದಿಗೊಳಿಸಿ’
ಚಾಮರಾಜನಗರ: ಜಿಲ್ಲಾ ವ್ಯಾಪ್ತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಹಾಗೂ ಮುಖ್ಯ ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಯಲು ಸುರಕ್ಷತಾ ಕ್ರಮಗಳನ್ನು ಅನುಷ್ಠಾನಗೊಳಿಸಬೇಕು ಎಂದು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುವ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ತಿಳಿಸಲಾಗಿದೆ.
ಆದರೂ ಅಧಿಕಾರಿಗಳು ಸುರಕ್ಷತಾ ಕ್ರಮಗಳ ಅನುಷ್ಠಾನದಲ್ಲಿ ವಿಳಂಬ ತೋರುತ್ತಿರುವುದು ಸರಿಯಲ್ಲ. 15 ದಿನಗಳೊಳಗೆ ಬ್ಲಾಕ್ ಸ್ಪಾಟ್‌ಗಳಲ್ಲಿ ಅಪಘಾತ ಪ್ರಮಾಣ ತಗ್ಗಿಸಲು ತೆಗೆದುಕೊಂಡ ಸುರಕ್ಷತಾ ಕ್ರಮಗಳ ಮಾಹಿತಿಯನ್ನು ಛಾಯಾಚಿತ್ರಗಳ ಸಮೇತ ಸಲ್ಲಿಸಬೇಕು ಜಿಲ್ಲಾಧಿಕಾರಿ ತಾಕೀತು ಮಾಡಿದರು.
ಹೆದ್ದಾರಿಯಲ್ಲಿ ರಸ್ತೆಗಳು ಕೂಡುವ ಕಡೆಗಳಲ್ಲಿ ಎಚ್ಚರಿಕೆ ಹಾಗೂ ಸೂಚನಾ ಫಲಕಗಳು, ಸಿಗ್ನಲ್ ಲೈಟ್‌ಗಳನ್ನು ಅಳವಡಿಕೆ ಮಾಡಿಲ್ಲ. ಪರಿಣಾಮ ವಾಹನ ಸವಾರರಿಗೆ ಗೊಂದಲಗಳು ಉಂಟಾಗಿ ಅಪಘಾತಗಳು ಸಂಭವಿಸುತ್ತಿವೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿ ಅಗತ್ಯವಿರುವ ಕಡೆಗಳಲ್ಲಿ ಫಲಕಗಳನ್ನು ಹಾಗೂ ಸಿಗ್ನಲ್ ಕಂಬಗಳನ್ನು ಹಾಕಬೇಕು. ಅವಘಡಗಳಿಗೆ ಅವಕಾಶವಾಗದ ಹಾಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ವಾಹನ ಸವಾರರಿಗೆ ಮಾರ್ಗದರ್ಶನ ನೀಡುವ ಫಲಕಗಳನ್ನು ಅಅಲ್ಲಲ್ಲಿ ಅಳವಡಿಸಬೇಕು. ಅಗತ್ಯವಿರುವ ಕಡೆಗಳಲ್ಲಿ ವೇಗ ನಿಯಂತ್ರಕ, ಹಂಪ್ಸ್, ರಸ್ತೆ ವಿಭಜಕ ಸೇರಿದಂತೆ ಸುರಕ್ಷತಾ ಪರಿಕರಗಳನ್ನು ಅಳವಡಿಸಬೇಕು. ಜಂಕ್ಷನ್‌ಗಳಲ್ಲಿ ಸಮರ್ಪಕ ಬೆಳಕಿನ ವ್ಯವಸ್ಥೆ ಮಾಡಬೇಕು. ಬ್ಲಿಂಕರ್‌ಗಳ ಅಳವಡಿಕೆ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ನಗರಾಭಿವೃದ್ದಿ ಕೋಶ, ನಗರಸಭೆ ಆಯುಕ್ತರು, ಮುಖ್ಯಾಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲಿಸಿ ಸುಗಮ ಸಂಚಾರಕ್ಕೆ ಹಾಗೂ ವಾಹನಗಳ ದಟ್ಟಣೆ ಕಡಿಮೆಮಾಡಲು ತುರ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ.ಕವಿತಾ ಮಾತನಾಡಿ ರಸ್ತೆ ಸುರಕ್ಷತೆಗೆ ತೆಗೆದುಕೊಳ್ಳಬೇಕಾಗಿರುವ ಕ್ರಮಗಳು ಹಾಗೂ ಕಾಮಗಾರಿಗಳ ಕುರಿತು ಪರಿಶೀಲಿಸಿ ವಿವರವಾದ ವರದಿ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳು ಅಪಘಾತಗಳನ್ನು ತಪ್ಪಿಸಲು ತುರ್ತು ಕ್ರಮ ಕೈಗೊಳ್ಳಬೇಕು. ಪೊಲೀಸ್ ಇಲಾಖೆ ಅಗತ್ಯ ಮಾರ್ಗದರ್ಶನ ನೀಡಲಿದೆ ಎಂದರು.
ಕೊಳ್ಳೇಗಾಲ ಉಪವಿಭಾಗಾಧಿಕಾರಿ ಬಿ.ಆರ್.ಮಹೇಶ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಎಂ.ಎಸ್.ವಾಬ್ಲೆ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಕಿರಣ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್ ವಿಶ್ವ, ಲೋಕೋಪಯೋಗಿ ಇಲಾಖೆಯ ಹೆದ್ದಾರಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರೇಣುಕಾ, ಶಾಂತಮ್ಮ, ರೋಟರಿ ಕ್ಲಬ್‍ನ ಅಬ್ದುಲ್ ಅಸೀಸ್ ದೀನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ಎಂ.ವಿ.ಸುಧಾ, ಪ್ರಾದೇಶಿಕ ಸಾರಿಗೆ ಅಧಿಕಾರಿ ಗಾಯತ್ರಿ ಹಾಗೂ ಇತರ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಇದ್ದರು.
‘ಸ್ಥಳೀಯ ಆಡಳಿತ ಕ್ರಮಕೈಗೊಳ್ಳಲಿ’
ನಗರ ಹಾಗೂ ಪಟ್ಟಣ ವ್ಯಾಪ್ತಿಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಸಂಬಂಧಪಟ್ಟ ನಗರಸಭೆ ಪುರಸಭೆ ಪಟ್ಟಣ ಪಂಚಾಯಿತಿಗಳು ಅನುವು ಮಾಡಿಕೊಡಬೇಕು ವಾಹನಗಳ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆ ಸಂಚಾರ ದಟ್ಟಣೆ ತಡೆಗೆ ಮಾರ್ಗಗಳಲ್ಲಿ ಸೂಚನಾ ಫಲಕಗಳ ಅಳವಡಿಕೆ ಮಾಡಬೇಕು. ಸಾರ್ವಜನಿಕರು ಎಲ್ಲೆಲ್ಲಿ ವಾಹನಗಳನ್ನು ನಿಲುಗಡೆ ಮಾಡಬೇಕು ಎಂದು ಸ್ಥಳ ಗುರುತಿಸಿ ಮಾರ್ಕಿಂಗ್ ಮಾಡಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.