ಚಾಮರಾಜನಗರ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕ್ರೀಡೆಯ ಬಗ್ಗೆ ಹೆಚ್ಚಿನ ಆಸಕ್ತಿ ತೋರುತ್ತಿದ್ದು ಪೂರಕವಾಗಿ ವಿಶ್ವವಿದ್ಯಾಲಯದಿಂದ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಚಾಮರಾಜನಗರ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎಂ.ಆರ್.ಗಂಗಾಧರ್ ತಿಳಿಸಿದರು.
ಚಾಮರಾಜನಗರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭಾಂಗಣದಲ್ಲಿ ಆಯೋಜಿಸಿದ್ದ 2025-26ನೇ ಸಾಲಿನ ವಿಶ್ವವಿದ್ಯಾಲಯ ಕ್ರೀಡಾ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ವಿಶ್ವವಿದ್ಯಾಲಯದಲ್ಲಿ ಗ್ರಾಮೀಣ ಭಾಗದ ಶೇ 80ರಷ್ಟು ವಿದ್ಯಾರ್ಥಿಗಳು ಪದವಿ ಸೇರಿದಂತೆ ಉನ್ನತ ವ್ಯಾಸಂಗ ಪಡೆಯಲು ಬರುತ್ತಿದ್ದಾರೆ. ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆ ಅನಾವರಣಕ್ಕೆ ಅವಕಾಶ ವೇದಿಕೆ ನೀಡಲು ವರ್ಷಪೂರ್ತಿ ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಕಳೆದ 2 ವರ್ಷಗಳಿಂದ ಹಲವು ಕ್ರೀಡಾಕೂಟಗಳನ್ನು ಆಯೋಜನೆ ಮಾಡಿದ್ದು ಪ್ರತಿಭಾವಂತ ಕ್ರೀಡಾಪಟುಗಳು ಅಂತರ ವಿಶ್ವವಿದ್ಯಾಲಯ ಹಾಗೂ ರಾಜ್ಯಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದಾರೆ. ಕ್ರೀಡಾಪಟುಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ಯಾಂಪಸ್‌ನೊಳಗೆ ಕ್ರೀಡಾಂಗಣ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.
ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಶಾಂತರಾಜು ಮಾತನಾಡಿ 2024-25ನೇ ಸಾಲಿನ ಕ್ರೀಡಾ ಚಟುವಟಿಕೆಗಳು ಯಶಸ್ವಿಯಾಗಿ ನಡೆದಿವೆ ಎಂದರು.
2025-26ನೇ ಸಾಲಿನ ಕ್ರೀಡಾ ಚಟುವಟಿಕೆಗಳ ಆಯವ್ಯಯ ವೆಚ್ಚದ ಬಗ್ಗೆ ವರದಿ ಮಂಡಿಸಿ ಅನುಮೋದನೆ ಪಡೆಯಲಾಯಿತು. ಚಾಮರಾಜನಗರ ವಿಶ್ವವಿದ್ಯಾಲಯದ ಕ್ರೀಡಾ ಸಲಹಾ ಸಮಿತಿ ಸದಸ್ಯ ಜಿ.ಬಂಗಾರು ಮಾತನಾಡಿದರು.
ಸಭೆಯಲ್ಲಿ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್, ಕೊಳ್ಳೇಗಾಲ ಮಹದೇಶ್ವರ ಕಾಲೇಜು ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಜಯಶಂಕರ್, ಜೆಎಸ್‌ಎಸ್ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಉಮೇಶ್, ಕ್ರೀಡಾ ಸಲಹಾ ಸಮಿತಿ ಸದಸ್ಯರಾದ ಡಾ.ಬಿ. ಕೃಷ್ಣಯ್ಯ, ಚಾ.ರಂ. ಶ್ರೀನಿವಾಸ್‌ಗೌಡ, ಕಾರ್ತಿಕ್ ನಾಯಕ್, ಮಣಿಕಂಠ ಸಭೆಯಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.