ADVERTISEMENT

ಚಾಮರಾಜನಗರ: ಕಾಡುಪ್ರಾಣಿಗಳ ಹಾವಳಿ ತಡೆಗೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2025, 2:32 IST
Last Updated 9 ಡಿಸೆಂಬರ್ 2025, 2:32 IST
ಚಾಮರಾಜನಗರ ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಹಾವಳಿ ತಡೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ನಗರದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು
ಚಾಮರಾಜನಗರ ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಹಾವಳಿ ತಡೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ನಗರದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು   

ಚಾಮರಾಜನಗರ: ತಾಲ್ಲೂಕಿನ ಹೆಗ್ಗೋಠಾರ, ಕಲ್ಪುರ ಸೇರಿದಂತೆ ಕಾಡಂಚಿನ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಇದನ್ನು ತಡೆಯುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಚಾಮರಾಜನಗರ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಮುಂಭಾಗ ಜಮಾಯಿಸಿದ ರೈತರು ಕೆಲಕಾಲ ಪ್ರತಿಭಟನಾ ಧರಣಿ ನಡೆಸಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಬಸವಣ್ಣ ಮಾತನಾಡಿ, ಕಾಡುಪ್ರಾಣಿಗಳು ಜಾನುವಾರುಗಳ ಮೇಲೆ ದಾಳಿ ಮಾಡಿ ಕೊಂದು ಹಾಕುತ್ತಿವೆ. ತಾಲ್ಲೂಕಿನ ಹೆಗ್ಗೋಠಾರ, ಕಲ್ಲುರ ಗ್ರಾಮಗಳಲ್ಲಿ ಹುಲಿ, ಚಿರತೆ ಸೇರಿದಂತೆ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ಕಳೆದ 2 ತಿಂಗಳಲ್ಲಿ 8ರಿಂದ10 ಜಾನುವಾರುಗಳನ್ನು ಕೊಂದು ಹಾಕಿವೆ. ಗ್ರಾಮಸ್ಥರ ಮೇಲೂ ದಾಳಿ ಮಾಡುತ್ತಿವೆ ಎಂದರು.

ADVERTISEMENT

ಇಷ್ಟಾದರೂ ದಾಳಿ ಮಾಡಿದ ಹುಲಿ ಹಾಗೂ ಚಿರತೆಗಳನ್ನು ಸೆರೆ ಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಕ್ರಮ ವಹಿಸಿಲ್ಲ. ಪ್ರಶ್ನಿಸಿದರೆ ಸೆರೆ ಕಾರ್ಯಾಚರಣೆಗೆ ಬೋನುಗಳು ಇಲ್ಲ, ಸಿಬ್ಬಂದಿ ಕೊರತೆಯ ಸಬೂಬು ಹೇಳುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಚಾಮರಾಜನಗರ ತಾಲ್ಲೂಕಿನಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಅಧಿಕಾರಿ ಇಲ್ಲದೆ ಕೆಲಸಗಳು ಆಗುತ್ತಿಲ್ಲ. ಸರ್ಕಾರ ಕೂಡಲೇ ಅರಣ್ಯಗೆ ಅಗತ್ಯ ಸಿಬ್ಬಂದಿ ನೇಮಕ ಮಾಡಬೇಕು. ಸಿಬ್ಬಂದಿಗೆ ಪರಿಕರಗಳನ್ನು ಪೂರೈಕೆ ಮಾಡಬೇಕು. ಈ ಮೂಲಕ ಜನ, ಜಾನುವಾರುಗಳನ್ನು ರಕ್ಷಣೆ ಮಾಡಬೇಕು. ಇಲ್ಲದಿದ್ದರೆ ಉಸ್ತುವಾರಿ ಸಚಿವರಿಗೆ ಘೇರಾವ್ ಹಾಕಲಾಗುವುದು. ಚಾಮರಾಜನಗರಕ್ಕೆ ಮುಖ್ಯಮಂತ್ರಿಗಳು ಭೇಟಿನೀಡಿದಾಗ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಂಘದ ಸಂಘಟನಾ ಕಾರ್ಯದರ್ಶಿ ವಿಜಯ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಶೇ50 ರಷ್ಟು ಅರಣ್ಯವಿದ್ದು ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದೆ. ಪ್ರಾಣಿಗಳ ದಾಳಿಯಿಂದ ರೈತರು ಮೃತಪಟ್ಟಾಗ ಪರಿಹಾರ ನೀಡುವ ಬದಲು, ಕಾಡುಪ್ರಾಣಿಗಳ ಹಾವಳಿ ತಡೆಗೆ ಮುಂದಾಗಬೇಕು. ಸಂಸದರು, ಶಾಸಕರು ಕ್ರಮ ವಹಿಸಬೇಕು. ಮುಂದೆ ಕಾಡುಪ್ರಾಣಿಗಳ ದಾಳಿ ನಡೆದರೆ ಜನಪ್ರತಿನಿಧಿಗಳ ಮನೆಗಳಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿಗಳಾದ ಮೇಲಾಜಿಪುರ ಕುಮಾರ್, ಕಲ್ಪುರ ರಘು, ಮಹೇಶ್, ಮುರುಘೇಂದ್ರಸ್ವಾಮಿ, ಲೋಕೇಶ್ ಹಳೇಪುರ, ಮಹೇಶ್, ತಮ್ಮಯಪ್ಪ, ದೊರೆಸ್ವಾಮಿ, ಸಂಜಯ್ ಸೇರಿದಂತೆ ಹಲವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.