ADVERTISEMENT

ಚಾಮುಲ್ ನೇಮಕಾತಿ ಪ್ರಕರಣ: ಜಂಟಿ ತನಿಖೆಗೆ ಡಿಸಿ ಆದೇಶ ತಂಡ ರಚನೆ

ವಾರದೊಳಗೆ ವರದಿ ನೀಡಲು ಸೂಚನೆ

ಸೂರ್ಯನಾರಾಯಣ ವಿ
Published 30 ಡಿಸೆಂಬರ್ 2019, 7:35 IST
Last Updated 30 ಡಿಸೆಂಬರ್ 2019, 7:35 IST
ಚಾಮುಲ್
ಚಾಮುಲ್   

ಚಾಮರಾಜನಗರ: ತಾಲ್ಲೂಕಿನ ಕುದೇರಿನ ಚಾಮರಾಜನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ (ಚಾಮುಲ್) ಇದ್ದ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ನಡೆದಿದೆ ಎನ್ನಲಾದ ಅವ್ಯವಹಾರಗಳ ಕುರಿತ ತನಿಖೆಗೆ ನಾಲ್ವರು ಅಧಿಕಾರಿಗಳ ತಂಡವನ್ನು ರಚಿಸಿ ಜಂಟಿ ತನಿಖೆ ನಡೆಸಿ, ವಾರದೊಳಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಆದೇಶಿಸಿದ್ದಾರೆ.

72ಹುದ್ದೆಗಳ ನೇಮಕಾತಿಯಲ್ಲಿ ಅವ್ಯವಹಾರ ನಡೆಸಿ ಅನರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಹಲವು ಸಂಘ-ಸಂಸ್ಥೆಗಳು ಜಿಲ್ಲಾಡಳಿತಕ್ಕೆ ದೂರು ನೀಡಿ ತನಿಖೆ ನಡೆಸುವಂತೆ ಆಗ್ರಹಿಸಿದ್ದವು.

ನೇಮಕಾತಿ ಪ್ರಕ್ರಿಯೆಯ ವಿವಿಧ ಅಂಶಗಳ ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ನೀಡಬೇಕಿರುವುದರಿಂದ ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ADVERTISEMENT

ಜಿಲ್ಲೆಯ ಸಮಾಜ ಕಲ್ಯಾಣ ಉಪನಿರ್ದೇಶಕರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರನ್ನು ಜಂಟಿ ತನಿಖೆಗೆ ನೇಮಕ ಮಾಡಲಾಗಿದೆ.

ಉದ್ಯೋಗ ನೇಮಕಾತಿ ಸಂಬಂಧ ನಡೆಸಲಾಗಿರುವ ಲಿಖಿತ ಪರೀಕ್ಷೆ, ಸಂದರ್ಶನ, ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅರ್ಹ ಅಭ್ಯರ್ಥಿಗಳ ಆಯ್ಕೆ ಪಟ್ಟಿ ತಯಾರಿಕೆ ಹಾಗೂ ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ ಮಾಡಿರುವ ಕುರಿತು ಜಂಟಿ ತನಿಖೆ ನಡೆಯಲಿದೆ.

ಈ ಮಧ್ಯೆ, ಅಕ್ರಮ ನೇಮಕಾತಿಯನ್ನು ಖಂಡಿಸಿ ಸಂತೇಮರಹಳ್ಳಿ ಹೋಬಳಿಯಲ್ಲಿ ಸೋಮವಾರ ಸ್ವಯಂ ಪ್ರೇರಿತ ಬಂದ್ ಕರೆಯಲಾಗಿದೆ.

ಜಿಲ್ಲಾಧಿಕಾರಿ ಆದೇಶದ ಪ್ರತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.