ADVERTISEMENT

ಮಹದೇಶ್ವರ ಬೆಟ್ಟದ ಅಭಿವೃದ್ಧಿಗೆ ಮೀನಮೇಷ ಎಣಿಸುವುದಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ

ಮಹದೇಶ್ವರ ಬೆಟ್ಟಕ್ಕೆ ಮುಖ್ಯಮಂತ್ರಿ ಭೇಟಿ, ದೇವರ ದರ್ಶನ, ಪ್ರಾಧಿಕಾರದ ಸಭೆ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2020, 19:30 IST
Last Updated 25 ನವೆಂಬರ್ 2020, 19:30 IST
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬುಧವಾರ ಮಲೆ ಮಹದೇಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದರು
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬುಧವಾರ ಮಲೆ ಮಹದೇಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದರು   

ಮಹದೇಶ್ವರ ಬೆಟ್ಟ: ‘ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಹಾಗೂ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಬೇಕಾದಷ್ಟು ಹಣ ಬಿಡುಗಡೆ ಮಾಡಲಾಗುವುದು. ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಮೀನ ಮೇಷ ಎಣಿಸುವುದಿಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬುಧವಾರ ಹೇಳಿದರು.

ಮಹದೇಶ್ವರ ಬೆಟ್ಟದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಎಷ್ಟೇ ಕಷ್ಟ ಆದರೂ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿ ನಡೆಸಲು ಸರ್ಕಾರ ಬದ್ಧವಾಗಿದೆ. ಅದಕ್ಕೆ ಬೇಕಾಗುವಷ್ಟು ಅನುದಾನ ನೀಡಲಾಗುವುದು’ ಎಂದರು.

‘ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 15 ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಪಡಿಸಲು ತೀರ್ಮಾನ ಕೈಗೊಳ್ಳಲಾಗಿದೆ’ ಎಂದರು.

ADVERTISEMENT

ಜಿಲ್ಲಾ ಕೇಂದ್ರ ಚಾಮರಾಜನಗರಕ್ಕೆ ಭೇಟಿ ನೀಡದ ವಿಚಾರದ ಬಗ್ಗೆ ಕೇಳಿದ್ದಕ್ಕೆ, ‘ಕರೆದರೆ ಯಾವಾಗ ಬೇಕಾದರೂ ಬರುತ್ತೇನೆ’ ಎಂದು ಉತ್ತರಿಸಿದರು.

ಮಾದಪ್ಪನ ದರ್ಶನ, ಸಾಲೂರು ಮಠಕ್ಕೆ ಭೇಟಿ: ಇದಕ್ಕೂ ಮೊದಲು, ಮಧ್ಯಾಹ್ನ 3.50ರ ಸುಮಾರಿಗೆಯಡಿಯೂರಪ್ಪ ಅವರು ಮುಡುಕುತೊರೆಯಿಂದ ಹೆಲಿಕಾಪ್ಟರ್‌ ಮೂಲಕ ಮಹದೇಶ್ವರ ಬೆಟ್ಟಕ್ಕೆ ಬಂದರು. ಅವರೊಂದಿಗೆ ಸುತ್ತೂರು ಶ್ರೀ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್, ಶಾಸಕರಾದ ಆರ್ ನರೇಂದ್ರ, ಸಿ.ಎಸ್.ನಿರಂಜನ ಕುಮಾರ್, ಎನ್.ಮಹೇಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೊಯರ್ ನಾರಾಯಣ್‍ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯ ಸಾರಾ ಥಾಮಸ್ ಮತ್ತಿತರರು ಸ್ವಾಗತಿಸಿದರು.

ಹೆಲಿಪ್ಯಾಡ್‌ನಿಂದ ನೇರವಾಗಿಮಲೆ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಯಡಿಯೂರಪ್ಪ ಅವರು, ಸ್ವಾಮಿಯ ದರ್ಶನ ಪಡೆದರು. ಬಳಿಕ ಸಾಲೂರು ಮಠಕ್ಕೆ ತೆರಳಿ ಹಿರಿಯ ಸ್ವಾಮೀಜಿಗಳ ಆರೋಗ್ಯ ವಿಚಾರಿಸಿದರು. ಶ್ರೀಮಠದ 2021ನೇ ಸಾಲಿನ ಕ್ಯಾಲೆಂಡರ್‌ ಬಿಡುಗಡೆ ಮಾಡಿದರು.

ನಂತರನಾಗಮಲೆ ಭವನದಲ್ಲಿ ಪ್ರಾಧಿಕಾರದ ಸಭೆ ನಡೆಸಿದರು. ಎರಡು ಗಂಟೆಗಳ ಕಾಲ ಸುದೀರ್ಘ ಸಭೆ ನಡೆಯಿತು. ಸಭೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್, ಸಾಲೂರು ಮಠದ ಶಾಂತಮಲ್ಲಿಕಾರ್ಜುನಸ್ವಾಮಿಗಳು, ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ, ಶಾಸಕರಾದ ಆರ್ ನರೇಂದ್ರ, ಎನ್ ಮಹೇಶ್, ಸಿ ಪುಟ್ಟರಂಗಶೆಟ್ಟಿ, ಸಿ.ಎಸ್. ನಿರಂಜನ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ನಾರಾಯಣ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯ‌ ಸಾರಾ ಥಾಮಸ್, ಮಲೆ ಮಹದೇಶ್ವರ ಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಹಾಜರಿದ್ದರು.

ರೈತರೊಂದಿಗೆ ಚರ್ಚೆ: ಸಮಸ್ಯೆ ಬಗೆಹರಿಸುವ ಭರವಸೆ
ಪ್ರಾಧಿಕಾರದ ಸಭೆ ನಡೆದ ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ತಮ್ಮನ್ನು ಭೇಟಿ ಮಾಡುವುದಕ್ಕಾಗಿ ಕಾದು ಕುಳಿತಿದ್ದ ರೈತ ಮುಖಂಡರನ್ನು ಕರೆಸಿಕೊಂಡು ಅವರೊಂದಿಗೆ ಸಮಾಲೋಚನೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರೈತರ ಸಮಸ್ಯೆಗಳನ್ನು ಆಲಿಸಿದ್ದೇನೆ. ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಕ್ರಮ ವಹಿಸಲಾಗುವುದು’ ಎಂದರು.

ಸಭೆಯ ಬಗ್ಗೆ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನೂರು ಪ್ರಕಾಶ್‌ ಅವರು, ‘ಜಿಲ್ಲೆಯಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದ್ದೇವೆ. ಚಾಮರಾಜನಗರಕ್ಕೆ ಭೇಟಿ ನೀಡುವಂತೆ ಮನವಿ ಮಾಡಿದೆವು. ಬರುವುದಾಗಿ ಹೇಳಿದ್ದಾರೆ. ಇದರ ಜೊತೆಗೆ ಜಿಲ್ಲೆಯಲ್ಲಿ ಒಂದು ರೈತ ಭವನ ನಿರ್ಮಾಣ. ಮಹದೇಶ್ವರ ಬೆಟ್ಟದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ. ಬೆಟ್ಟದ ಸುತ್ತಮುತ್ತಲಿನ ಗ್ರಾಮಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಮನವಿ ಮಾಡಿದ್ದೇವೆ. ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.