ಗುಂಡ್ಲುಪೇಟೆ: ಮಕ್ಕಳ ಕಳ್ಳ ಸಾಗಾಣಿಕೆ ವ್ಯವಸ್ಥಿತ ಜಾಲವಾಗಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಹಿರಿಯ ಸಿವಿಲ್ ಮತ್ತು ಜೆಎಂಎಫ್‍ಸಿ ನ್ಯಾಯಾಧೀಶ ಬಸವರಾಜ ತಳವಾರ ಹೇಳಿದರು.
ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆದ ಮಕ್ಕಳ ಮೇಲಿನ ದೌರ್ಜನ್ಯ ತಡೆ ಕಾನೂನುಗಳು, ಗರ್ಭಿಣಿ, ಬಾಣಂತಿ ಹಾಗೂ ಮಕ್ಕಳ ಆರೋಗ್ಯದ ಕುರಿತು ಜಾಗೃತಿ ಜಾಥಾ ಹಾಗೂ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಮಕ್ಕಳನ್ನು ಕಳ್ಳ ಸಾಗಾಣೆ ಮಾಡಿ ದೇಹದ ಯಾವುದಾದರೂ ಅಂಗವನ್ನು ನ್ಯೂನ್ಯತೆಗೊಳಿಸಿ ಅಥವಾ ಮತ್ತು ಬರಿಸುವ ಔಷಧಿ ನೀಡಿ ಆ ಮಕ್ಕಳನ್ನು ದೊಡ್ಡ ನಗರಗಳ ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಭಿಕ್ಷಾಟನೆಗೆ ತೊಡಗಿಸಿ, ಹಣ ಸಂಪಾದಿಸುವ ದೊಡ್ಡ ಜಾಲವಿದೆ. ಇಂತಹ ಮಕ್ಕಳಿಗೆ ಭಿಕ್ಷೆ ನೀಡಿದರೆ ನಾವು ಅವರಿಗೆ ಬೆಂಬಲ ನೀಡಿದಂತಾಗಿ ಮಕ್ಕಳ ಕಳ್ಳತನ ಜಾಸ್ತಿಯಾಗುತ್ತದೆ ಎಂದರು.
ಗ್ರಾಮಾಂತರ ಪ್ರದೇಶಗಳಲ್ಲಿ ಬಡತನ ಕಾರಣದಿಂದ ಮಕ್ಕಳನ್ನು ಗಾರ್ಮೆಂಟ್ಸ್ ಕೆಲಸ ಹಾಗೂ ಇನ್ನಿತರ ಆಸೆ ಆಮಿಷಗಳನ್ನು ಒಡ್ಡಿ, ಕ್ಲಬ್, ಪಬ್‌ಗಳಿಗೆ ಮಾರಾಟ ಮಾಡುವಂತಹ ಪ್ರಕರಣಗಳಿಗೆ ಸಂಬಂಧಿಕರೆ ಪ್ರಮುಖ ಕಾರಣವಾಗಿದ್ದು, ಇದರ ಬಗ್ಗೆ ಸ್ಥಳೀಯರು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶರಾದ ದೀಪು ಎಂ.ಟಿ. ಮಾತನಾಡಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಪ್ರತಿ ಮನೆಗಳಿಗೆ ಭೇಟಿ ನೀಡುವುದರಿಂದ ಅವರ ಸಮಸ್ಯೆಗಳ ಬಗ್ಗೆ ಅರಿವಿದ್ದು, ಹೆಣ್ಣು ಮಕ್ಕಳು ಶೋಷಣೆಗೆ ಒಳಗಾದ ಸಮಯದಲ್ಲಿ ಸಾಂತ್ವನ ಕೇಂದ್ರದ ಮೂಲಕ ಕಾನೂನು ಸಹಾಯ ಪಡೆಯಲು ನೆರವಾಗಬೇಕು ಎಂದು ಸಲಹೆ ನೀಡಿದರು.
ಬಾಲ್ಯ ವಿವಾಹವು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಮೇಲೆ ದುಷ್ಪರಿಣಾಮ ಬೀರುತ್ತದೆ. ಇದಕ್ಕೆ ಮುಖ್ಯ ಕಾರಣ ಅನಕ್ಷರತೆ. ಹಾಗಾಗಿ ಶಿಕ್ಷಣದಿಂದ ಮಾತ್ರ ಬಾಲ್ಯ ವಿವಾಹ ತಡೆಯಲು ಸಾಧ್ಯ. ಆರ್ಥಿಕವಾಗಿ ಹಿಂದುಳಿದವರು, ಮಹಿಳೆಯರು ಕಾನೂನಿನ ಸಮಸ್ಯೆಗಳಿಗೆ ವಕೀಲರನ್ನು ನೇಮಕ ಮಾಡಿಕೊಳ್ಳಲು ಆಗದವರು ಉಚಿತವಾಗಿ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಸಲಹೆ ಪಡೆದು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಹೇಳಿದರು.
ಇದಕ್ಕೂ ಮೊದಲು ತಾಲ್ಲೂಕು ಕಚೇರಿಯ ಆವರಣದಲ್ಲಿ ಕಾನೂನು ಅರಿವು ಜಾಗೃತಿ ಜಾಥಕ್ಕೆ ತಹಶೀಲ್ದಾರ್ ತನ್ಮಯ್ ಚಾಲನೆ ನೀಡಿದರು.
ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು ತಾಲ್ಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಶಾಲಾ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ವಕೀಲರ ಸಂಘ, ತಾಲ್ಲೂಕು ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ, ಆರ್‌ಎಲ್‌ಎಚ್‌ಪಿ ಸಂಸ್ಥೆ, ಕೈಲಾಶ್ ಸತ್ಯಾರ್ಥಿ ಚಿಲ್ಡ್ರನ್ಸ್ ಫೌಂಡೇಶನ್ ಹಾಗೂ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರ ಗುಂಡ್ಲುಪೇಟೆ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಗಿರೀಶ್, ತಾಲ್ಲೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ಸಿಡಿಪಿಒ ಹೇಮಾವತಿ, ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಅಲೀಂಪಾಷ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ಎಸ್. ವೆಂಕಟೇಶ್, ಕಾರ್ಯದರ್ಶಿ ಬೀರೇಗೌಡ, ವಕೀಲ ಅರವಿಂದ್, ಸಬ್ ಇನ್‌ಸ್ಪೆಕ್ಟರ್ ಸಾಹೇಬಗೌಡ, ಸ್ತ್ರೀ ಶಕ್ತಿ ಒಕ್ಕೂಟದ ದ್ರಾಕ್ಷಯಣಮ್ಮ, ಬಾಲ ನ್ಯಾಯ ಮಂಡಳಿ ಸದಸ್ಯರಾದ ಸರಸ್ವತಿ, ಕೈಲಾಶ್ ಸತ್ಯಾರ್ಥಿ ಚಿಲ್ಡ್ರನ್ ಫೌಂಡೇಶನ್ ಜಿಲ್ಲಾ ಸಂಯೋಜಕ ನಾರಾಯಣಸ್ವಾಮಿ, ಆರ್‌ಎಲ್‌ಎಚ್‌ಪಿ ಸಂಸ್ಥೆಯ ಪ್ರತಿಮಾ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.