ADVERTISEMENT

ಮೊಬೈಲ್‌ ಬಳಕೆಗೆ ಮಿತಿ ಇರಲಿ, ಭವಿಷ್ಯದ ಗುರಿ ಇರಲಿ...

ಎಸ್‌ಸಿ, ಎಸ್‌ಟಿ, ಒಬೊಸೊ ಹಾಸ್ಟೆಲ್‌ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2022, 16:38 IST
Last Updated 11 ನವೆಂಬರ್ 2022, 16:38 IST
ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಹಾಸ್ಟೆಲ್‌ ವಿದ್ಯಾರ್ಥಿಗಳು
ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಹಾಸ್ಟೆಲ್‌ ವಿದ್ಯಾರ್ಥಿಗಳು   

ಚಾಮರಾಜನಗರ: ‘ಮೊಬೈಲ್ ಬಳಕೆಯಿಂದಾಗಿ ಇಂದಿನ ವಿದ್ಯಾರ್ಥಿಗಳಲ್ಲಿ ಆಲೋಚನಾ ಕ್ರಮ ಕಡಿಮೆಯಾಗುತ್ತಿದೆ. ಯಾವುದನ್ನೇ ಆಗಲಿ ಮಿತವಾಗಿ ಬಳಸಬೇಕು. ವಿದ್ಯಾರ್ಥಿಗಳು ಸ್ಪಷ್ಟ ಗುರಿಯನ್ನು ಇಟ್ಟುಕೊಂಡು ಸಕಾರಾತ್ಮಕ ಚಿಂತನೆಯೊಂದಿಗೆ ಮುನ್ನಡೆಯಬೇಕು‌’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಶುಕ್ರವಾರ ಹೇಳಿದರು.

ಜಿಲ್ಲಾ ಪಂಚಾಯತ್ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಇಲಾಖೆಗಳ ಹಾಸ್ಟೆಲ್‌ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಮತ್ತು ವ್ಯಕ್ತಿತ್ವ ವಿಕಸನ ಕುರಿತು ಏರ್ಪಡಿಸಲಾಗಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡಲು ಅವಕಾಶಗಳು ಬೇಕಾಗಿವೆ. ವಿಷಯಗಳ ಆಯ್ಕೆಯಲ್ಲಿ ಸ್ಪರ್ಧಾತ್ಮಕತೆ ಇರಬೇಕು. ಕೆಲ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಬರೆದರೆ ಇನ್ನುಳಿದವರು ಖಾಸಗಿ ಕ್ಷೇತ್ರಗಳತ್ತ ಒಲವು ಹೊಂದಿರುತ್ತಾರೆ. ವಿಷಯಗಳ ಮಾಹಿತಿಯನ್ನು ತಲುಪಿಸುವ ಸಲುವಾಗಿ ಹಾಗೂ ವಿದ್ಯಾರ್ಥಿಗಳ ಬುದ್ದಿಮತ್ತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಮಕ್ಕಳು ವಿದ್ಯಾರ್ಥಿ ಜೀವನದಲ್ಲಿ ಸತತ ಪರಿಶ್ರಮ, ನಿರಂತರ ಅಧ್ಯಯನ ಪ್ರಯತ್ನದಿಂದ ಸಾಗುವ ಗುರಿಯೆಡೆಗೆ ಸ್ಪಷ್ಟತೆ ಹೊಂದಿರಬೇಕು’ ಎಂದರು.

ADVERTISEMENT

ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮಾತನಾಡಿ, ‘ಇದು ಸ್ಪರ್ಧಾತ್ಮಕ ಯುಗ. ಯುವಜನತೆಗೆ ಸಾಕಷ್ಟು ಉದ್ಯೋಗವಕಾಶಗಳಿವೆ. ಪ್ರಪಂಚದ ಬೇರೆ ಬೇರೆ ದೇಶಗಳಲ್ಲಿ ಭಾರತೀಯರು, ಕರ್ನಾಟಕದವರು, ಜಿಲ್ಲೆಯವರು ವಿವಿಧ ಉದ್ಯೋಗಗಳನ್ನು ಮಾಡುತ್ತಿದ್ದಾರೆ. ಇದಕ್ಕೆ ಸ್ಪರ್ಧಾತ್ಮಕ ಅವಕಾಶಗಳೇ ಕಾರಣ’ ಎಂದರು.

‘ಇಂದು ಪ್ರತಿಯೊಂದು ಹುದ್ದೆಗೂ ಪ್ರವೇಶ ಪರೀಕ್ಷೆ ಇದೆ. ಇದಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಾಗಾರ ವಿದ್ಯಾರ್ಥಿಗಳಿಗೆ ಅತ್ಯಗತ್ಯವಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯಿಂದ ವಿಶ್ವದ ಯಾವುದೇ ಭಾಗದಲ್ಲಿ ಏನೇ ನಡೆದರೂ ಕ್ಷಣಾರ್ಧದಲ್ಲಿ ಎಲ್ಲರಿಗೂ ತಿಳಿಯಲಿದೆ. ಪ್ರಚಲಿತ ವಿದ್ಯಮಾನದಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಯುವಜನರಿಗೆ ಸಾಕಷ್ಟು ಅವಕಾಶಗಳಿವೆ. ಸಾಮಾನ್ಯ ಜ್ಞಾನವಿರುವ ಯಾವುದೇ ವ್ಯಕ್ತಿ ಮಾಧ್ಯಮ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಬಹುದು’ ಎಂದು ತಿಳಿಸಿದರು.

ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಭೂಗೋಳಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಪಿ.ಎನ್.ಹೇಮಚಂದ್ರ ಅವರು ಉದ್ಯೋಗ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಒಂದು ಪರಿಚಯ ಕುರಿತು, ಮೈಸೂರಿನ ಸಿದ್ದಾರ್ಥ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ವಿಭಾಗದ ಸಹ ಪ್ರಾಧ್ಯಾಪಕ ಕೆ.ಎ. ಪ್ರಸನ್ನಕುಮಾರ್ ಅವರು ವ್ಯಕ್ತಿತ್ವ ವಿಕಸನ ಮತ್ತು ಜೀವನ ಕೌಶಲಗಳು ಕುರಿತು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ ಅವರು ಕ್ರೀಡಾ ಕ್ಷೇತ್ರ ಕುರಿತು ವಿಷಯ ಮಂಡಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎಚ್‌.ಎಸ್‌.ವಿಂಧ್ಯಾಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.